ಬೆಂಗಳೂರು, ಜು.13- ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವವಿರುವ ರಾಮನಗರ ಜಿಲ್ಲೆಯ ಹೆಸರನ್ನು ಯಾವುದೇ ಕಾರಣಕ್ಕೂ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸಬಾರದು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರಾಮನಗರಕ್ಕೆ ಐತಿಹಾಸಿಕ, ಪೌರಾಣಿಕ ಚರಿತ್ರೆ ಇದೆ. ಜತೆಗೆ ಭಾವನಾತ ಹಾಗೂ ಧಾರ್ಮಿಕ ವಿಚಾರ ಅಡಗಿರುವುದರಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಬಾರದು ಎಂದು ಆಗ್ರಹಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರು ರಾಮನಗರ ಎಂಬ ಹೆಸರನ್ನು ನಾಮಕರಣ ಮಾಡಿದ್ದಾರೆ. ಸಿದ್ಧಗಂಗಾಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಗಳು ಹಾಗೂ ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಭೈರವೈಕ್ಯ ಡಾ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಜನಿಸಿದ್ದು ರಾಮನಗರ ಜಿಲ್ಲೆಯಲ್ಲಿಯೇ ಎಂದು ಅವರು ಹೇಳಿದ್ದಾರೆ.
ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಸಹ ಇದೇ ಜಿಲ್ಲೆಗೆ ಸೇರಿದವರು. 2007ರಲ್ಲಿ ಅಭಿವೃದ್ಧಿ ದೃಷ್ಟಿಯಿಂದ ರಾಮನಗರ ಜಿಲ್ಲೆ ಮಾಡಲಾಗಿದೆ. ಅದನ್ನು ಕಡೆಗಣಿಸಿ ಈಗ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ಪ್ರಸ್ತಾವನೆಯನ್ನು ತಿರಸ್ಕರಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.