ಬೆಂಗಳೂರು,ಜು.17- ಆರ್‌ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವ ಸಮಾರಂಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಮೈಕಲ್ ಕುನ್ಹಾ ಅವರ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ಸಲ್ಲಿಸಿರುವ ವರದಿಯ ಬಗ್ಗೆ ಇಂದು ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ.
ಜೂ.4 ರ ಸಂಜೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದು ರಾಜ್ಯಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿತ್ತು. ಈ ಹಿನ್ನೆಲೆಯಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ನೇಮಿಸಲಾಗಿತ್ತು. ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಅನುಮತಿ ಪಡೆಯದೆ ಆರ್‌ಸಿಬಿ ವಿಜಯೋತ್ಸವ ಆಚರಿಸಲಾಗಿತ್ತು ಎಂಬ ಆರೋಪಗಳು ಕೇಳಿಬಂದಿದ್ದವು.
ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಗುರುತಿಸಿರುವ ಸಂಭಾವ್ಯ ಸ್ಥಳಗಳಲ್ಲಿ ಪ್ರಾಥಮಿಕ ಅಧ್ಯಯನ ನಡೆಸಲು ಅನುಮತಿ ನೀಡುವ ಬಗ್ಗೆ ಕೂಡ ಗಂಭೀರ ಚರ್ಚೆ ನಡೆಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಯ ಸಾಧಕ-ಬಾಧಕದ ಬಗ್ಗೆ ಅಧ್ಯಯನ ನಡೆಸಲು ಅನುಮತಿ ನೀಡುವ ಬಗ್ಗೆ ಆಡಳಿತಾತಕ ಒಪ್ಪಿಗೆ ನೀಡಲು ತೀರ್ಮಾನಿಸಲಾಗಿದೆ.
ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ತಾತ್ವಿಕ ಅನುಮೋದನೆ ಹಾಗೂ ಎನ್‌ಟಿಪಿಸಿ ಸಂಸ್ಥೆಯು ಅಧ್ಯಯನ ನಡೆಸಲು ಒಪ್ಪಿಗೆ ಸೂಚಿಸಲಾಗಿದೆ.
ಚಾಮುಂಡೇಶ್ವರಿ ವಿದ್ಯುತ್ ಸ್ಥಾವರ ನಿಗಮದಲ್ಲಿ ಕೇಂದ್ರ ಸರ್ಕಾರದ ಪ್ರಾಯೋಜಿತ 3779.06 ಕೋಟಿ ರೂ.ಗಳ ಅಂದಾಜು ಮೊತ್ತದ ಆರ್‌ಡಿಎಸ್‌ಎಸ್ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತಕ ಅನುಮೋದನೆ ನೀಡಲಾಗಿದೆ. ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತು ಹೊರಡಿಸಲಾಗಿರುವ ಅಧಿಸೂಚನೆಗಳಲ್ಲಿನ ಪ್ಲಾಸ್ಟಿಕ್ ಬ್ಯಾಗ್ ಎಂಬ ಪದದ ವ್ಯಾಖ್ಯಾನಕ್ಕೆ ತಿದ್ದುಪಡಿ ತರಲು ಒಪ್ಪಿಗೆ ಸೂಚಿಸಲಾಗಿದೆ.ರಾಜ್ಯ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಅಪರ ನಿಬಂಧಕರು (ವಿಚಾರಣೆಗಳು) ಹುದ್ದೆಗೆ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸಂಪುಟ ಸಮತಿಸಿದೆ.
ಆಯುಷ್ ಇಲಾಖೆಯ ಆಯುರ್ವೇದ, ಸಿದ್ಧ, ಯುನಾನಿ ಔಷಧಿಗಳ ಅಮಲು ಜಾರಿ ವಿಭಾಗ ಹಾಗೂ ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ ಇಲಾಖೆಯ ಜೊತೆ ವಿಲೀನಗೊಳಿಸಲು ಚರ್ಚಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಹೊಸನಗರ ತಾಲ್ಲೂಕುಗಳ ವ್ಯಾಪ್ತಿಯ ಅರಣ್ಯ ಪ್ರದೇಶವನ್ನು ಒಳಗೊಂಡ ಶೆಟ್ಟಿಹಳ್ಳಿ ವನ್ಯಜೀವಿ ಧಾಮದ ವಿಸ್ತೀರ್ಣವನ್ನು ಪರಿಷ್ಕರಿಸಿ ಅಧಿಸೂಚನೆ ಹೊರಡಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಪ್ರಥಮ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ 2021ನೇ ಸಾಲಿನ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಿರಿಸಲಾಗಿದ್ದು, ಭರ್ತಿಯಾಗದೇ ಖಾಲಿ ಉಳಿದಿರುವ ಉರ್ದು ಭಾಷಾ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಸಾಮಾನ್ಯ ಅಭ್ಯರ್ಥಿಗಳಿಂದ ಒಂದು ಬಾರಿ ಕ್ರಮವಾಗಿ ಭರ್ತಿ ಮಾಡಲು ಅವಕಾಶ ಕಲ್ಪಿಸುವ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.
ನ್ಯಾಯ ವಿಜ್ಞಾನಗಳ ಪ್ರಯೋಗಾಲಯಗಳ ನಿರ್ದೇಶನಾಲಯಕ್ಕೆ 32 ಮೊಬೈಲ್ ಫೋರೆನ್ಸಿಕ್ ವಾಹನಗಳನ್ನು 20.40 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ತೀರ್ಮಾನಿಸಲಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಎಳವಟ್ಟಿ ಗ್ರಾಮದಲ್ಲಿ 28.3 ಎಕರೆ ಪ್ರದೇಶದಲ್ಲಿ ಮಾವು ಮತ್ತು ಇತರೆ ತೋಟಗಾರಿಕೆ ಬೆಲೆಗಳ ಸಂಸ್ಕರಣಾ ಘಟಕವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮಾದರಿಯಡಿ 35.07 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಲು ನಿರ್ಧರಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ ತೋಟಗಾರಿಕಾ ತಂತ್ರಜ್ಞಾನ ಪಾರ್ಕ್ ಅನ್ನು ಸ್ಥಾಪಿಸಲು ಅನುಮೋದಿಸಲಾಗಿದೆ. ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ 126 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು 128 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತಕ ಅನುಮೋದನೆ ನೀಡಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾಲ್ಕು ವಸತಿ ಶಾಲೆ/ಕಟ್ಟಡ ನಿರ್ಮಾಣ ಕಾಮಗಾರಿಯನ್ನು 64 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತಕ ಅನುಮೋದನೆ ದೊರೆತಿದೆ.
ಕನಕಪುರ ತಾಲ್ಲೂಕಿನ ಹುಣಸಹಳ್ಳಿ-ಚಿಕ್ಕನಹಳ್ಳಿ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಮರು ಡಾಂಬರೀಕರಣಗೊಳಿಸಲು ಸಮತಿಸಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ವೀರಭದ್ರನಪಾಳ್ಯದಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ 15 ಗುಂಟೆ ಜಮೀನನ್ನು ಗುತ್ತಿಗೆಗೆ ನೀಡಲು ತೀರ್ಮಾನಿಸಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಳವಡಿಸಿರುವ 1530 ಮಳೆ ಮಾಪನ ಕೇಂದ್ರಗಳ ಉಪಕರಣಗಳನ್ನು ಬದಲಿಸಿ ಹೊಸದಾಗಿ ಸ್ಥಾಪಿಸಲು 19.89 ಕೋಟಿ ರೂ. ಮೊತ್ತದ ಯೋಜನೆ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ.
ಮೈಸೂರು ವಿವಿಯಲ್ಲಿ ಡಾ.ಅಂಬೇಡ್ಕರ್ ಸಂವಿಧಾನ ಪೀಠವನ್ನು 10 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಸಮತಿಸಲಾಗಿದೆ. ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಅಂತರ್ಜಲ ಬಳಕೆಗೆ ನಿರಾಕ್ಷೇಪಣ ನೀಡುವ ಸಂಬಂಧ ಕೇಂದ್ರೀಯ ಅಂತರ್ಜಲ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಸೂಕ್ತ ಮಾರ್ಪಾಡುಗಳೊಂದಿಗೆ ರಾಜ್ಯದಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.ಜಿಲ್ಲಾ ಖನಿಜ ಪ್ರತಿಷ್ಠಾನ (ತಿದ್ದುಪಡಿ) ನಿಯಮಗಳು-2025ಕ್ಕೆ ಅನುಮೋದನೆ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ.