ಆನೇಕಲ್,ಜ.29- ಕಾರಿನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಂತೆಬೀದಿಯಲ್ಲಿ ಕಳೆದ ರಾತ್ರಿ ನಡೆದಿದೆ. ದೊಮಸಂದ್ರ ನಿವಾಸಿ ವೆಂಕಟೇಶ್ (35) ಕೊಲೆಯಾದ ವ್ಯಕ್ತಿ.
ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಈತ ಕಳೆದ ರಾತ್ರಿ 10 ಗಂಟೆ ಸುಮಾರಿನಲ್ಲಿ ಸಂತೆಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತರು ಏಕಾಏಕಿ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಸಿ.ಕೆ. ಬಾಬು ಮತ್ತು ಡಿವೈಎಸ್ಪಿ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಸರ್ಜಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.