ಬೆಂಗಳೂರು,ಜು.26- ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಇದೀಗ ರಾಜಭವನಕ್ಕೂ ಕಾಲಿಟ್ಟಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಿಂ ಅವರು ರಾಜ್ಯಪಾಲ ಥಾವರ್‌ಚಂದ್ ಗೆಲ್ಹೋಟ್‌ಗೆ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದಾರೆ.ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಕುರಿತು ದಾಖಲೆಗಳ ವಿವರಗಳನ್ನು ನೀಡಿದ್ದಾರೆ.
ಸುಮಾರು 2000ಕ್ಕೂ ಹೆಚ್ಚು ಪುಟಗಳ ದಾಖಲೆಗಳನ್ನು ನೀಡಿರುವ ಅಬ್ರಾಹಿಂ ಅವರು, ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಎಸ್.ಯತೀಂದ್ರ, ಮುಡಾ ಆಯುಕ್ತ ನಟೇಶ್ ಹಾಗೂ ಹಿಂದಿನ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಬೇಕೆಂದು ಕೋರಿದ್ದಾರೆ.
ಸೆಕ್ಷನ್ 218, ಭಾರತೀಯ ನಾಗರಿಕ ಸುರಕ್ಷಾ ಸಮಿತಿ, ಸೆಕ್ಷನ್ 17ಎ, 19 ಮತ್ತು 1988ರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ದಾಖಲಿಸಲು ಅಬ್ರಾಹಿಂ ಮನವಿ ಮಾಡಿದ್ದಾರೆ. ಕಳೆದ ಜು.18ರಂದು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಿಸಿದ್ದರೂ ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬದಲಿ ನಿವೇಶನ ಪಡೆದಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ಒಟ್ಟು 45 ಕೋಟಿ ನಷ್ಟವಾಗಿದೆ. ಉನ್ನತ ಸ್ಥಾನದಲ್ಲಿರುವ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ದೂರು ದಾಖಲಿಸಲು ಅನುಮತಿ ನೀಡಬೇಕು ಎಂಬುದಾಗಿಯೂ ಕೋರಿಕೊಳ್ಳಲಾಗಿದೆ.
ಈ ಹಿಂದೆ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಲು ಅಂದು ವಕೀಲರಾದ ಕೆ.ಎನ್.ಬಾಲರಾಜ್ ಹಾಗೂ ಸಿರಾಜುದ್ದೀನ್ ಪಾಷ ಅವರು ಅಂದಿನ ರಾಜ್ಯಪಾಲ ಹಂಸರಾಜ್ ಭಾರದಾಜ್ ಅವರು ದೂರು ದಾಖಲಿಸಲು ಅನುಮತಿ ನೀಡಿದ್ದರು ಎಂಬುದನ್ನು ಅಬ್ರಾಹಿಂ ಪ್ರಸ್ತಾಪಿಸಿದ್ದಾರೆ.
ಭೂಮಿ ವಶಪಡಿಸಿಕೊಂಡ ಜಾಗದಲ್ಲಿ, ಅಥವಾ ಸಮಾನಾಂತರ ಜಾಗದಲ್ಲಿ ಬದಲಿ ಭೂಮಿ ನೀಡಬೇಕು ಎಂಬುದು ಕಾನೂನಿನಲ್ಲಿದೆ. ಆದರೆ ಸಿಎಂ ಪತ್ನಿಗೆ ಭೂಸ್ವಾಧೀನವಾದ ಜಾಗ ಬಿಟ್ಟು, ವಿಜಯನಗರದಲ್ಲಿ ಭೂಮಿ ಕೊಡಲಾಗಿದೆ. 50:50 ಅನುಪಾತ ನಿಯಮವನ್ನು ದುರುಪಯೋಗಪಡಿಸಿಕೊಂಡು, 1998ರಲ್ಲಿ ವಶಪಡಿಸಿಕೊಂಡ ಜಾಗಕ್ಕೆ 2020ರಲ್ಲಿ ಜಾರಿಗೆ ಬಂದ 50-50 ಅನುಪಾತ ಬಳಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.