ಬೆಂಗಳೂರು,ಮೇ.3- ನಿರೀಕ್ಷಣಾ ಜಾಮೀನು ಕೋರಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ವಿಶೇಷ ಅಭಿಯೋಜಕರು ಅತ್ಯಾಚಾರದ ಆರೋಪ ಪ್ರಕರಣ ದಾಖಲಿಸಿಲ್ಲದಿರುವುದರಿಂದ ನಿರೀಕ್ಷಣಾ ಜಾಮೀನಿನ ಅಗತ್ಯವಿಲ್ಲ.
ಜಾಮೀನು ನೀಡಬಹುದಾದ ಪ್ರಕರಣಗಳನ್ನು ಮಾತ್ರ ದಾಖಲಿಸಲಾಗಿದೆ. ನಿರೀಕ್ಷಣಾ ಅರ್ಜಿ ಊರ್ಜಿತವಾಗುವುದಿಲ್ಲ ಎಂದು ದೃಢೀಕರಿಸಿದ ಹಿನ್ನೆಲೆಯಲ್ಲಿ ರೇವಣ್ಣ ಅವರು ತಮ್ಮ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟೀಸ್ ನೀಡಿತ್ತು. ಬಂಧನದ ಭೀತಿಯ ಹಿನ್ನೆಲೆಯಲ್ಲಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ವೇಳೆ ಜಾಮೀನು ರಹಿತ ಸೆಕ್ಷನ್ ಹಾಕುತ್ತಾರೆ ಎಂಬ ಬಗ್ಗೆ ತಿಳಿಸಬೇಕೆಂದು ರೇವಣ್ಣ ಪರ ವಕೀಲರು ವಾದ ಮಂಡಿಸಿದರೂ ಈ ದಿನದವರೆಗೆ ಜಾಮೀನುರಹಿತ ಪ್ರಕರಣ ದಾಖಲಿಸಿಲ್ಲ ಎಂದು ಹೈಕೋರ್ಟ್‌ಗೆ ಎಸ್‌ಪಿಪಿ ಮಾಹಿತಿ ನೀಡಿದರು. ಈ ಮಾಹಿತಿಯನ್ನು ಕೋರ್ಟ್ ದಾಖಲಿಸಿಕೊಂಡಿತು. ನಂತರ ರೇವಣ್ಣ ಅವರು ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ಪಡೆದರು.