ಬೆಂಗಳೂರು,ನ.1– ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕನೇರಿ ಮಠದ ಪೀಠಾಧಿಪತಿ ಶ್ರೀ ಕಾಡಸಿದ್ಧೇಶ್ವರ ಸ್ವಾಮೀಜಿ ವಿರುದ್ಧ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ರಾಜ್ಯಾದ್ಯಂತ ಬಸವ ಅಭಿಯಾನದ ನೇತೃತ್ವ ವಹಿಸಿದ್ದ 300ಕ್ಕೂ ಹೆಚ್ಚು ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು, ಅಶ್ಲೀಲ ಮತ್ತು ಮಾನಹಾನಿಕರ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕನೇರಿ ಮಠಾಧಿಪತಿಗಳ ವಿರುದ್ಧ 1 ಕೋಟಿ ರೂ.ಗಳ ಮಾನಹಾನಿ ಮೊಕದ್ದಮೆ ಹೂಡಿದೆ.
ಏತನಧ್ಯೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಬಗ್ಗೆ ಯಾವುದೇ ರೀತಿಯ ಅವಹೇಳನಕಾರಿ ಹೇಳಿಕೆ ನೀಡದಂತೆ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರನ್ನು ನಿರ್ಬಂಧಿಸಿ, ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಶುಕ್ರವಾರ ತಾತ್ಕಾಲಿಕ ಪ್ರತಿಬಂಧಕಾದೇಶ ಹೊರಡಿಸಿದೆ.
ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಬೆಂಗಳೂರಿನ 30ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಎನ್‌ಆರ್ಮಧು ಅವರು ವಿಚಾರಣೆ ನಡೆಸಿದರು.ಅರ್ಜಿಯ ಮುಂದಿನ ವಿಚಾರಣೆವರೆಗೆ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವಿರುದ್ಧ ಸಾರ್ವಜನಿಕವಾಗಿ ಹಾಗೂ ಮುದ್ರಣ ಮಾಧ್ಯಮ, ಡಿಜಿಟಲ್ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಮಾನಹಾನಿಕರ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಕಾಡಸಿದ್ದೇಶ್ವರ ಸ್ವಾಮಿಗಳನ್ನು ನಿರ್ಬಂಧಿಸಿ ತಾತ್ಕಾಲಿಕ ಪ್ರತಿಬಂಧಕಾದೇಶ ಹೊರಡಿಸಿದರು. ಇದೇ ವೇಲೆ ಅರ್ಜಿ ಸಂಬಂಧ ಕಾಡಸಿದ್ದೇಶ್ವರ ಸ್ವಾಮೀಜಿಗೆ ನೋಟಿಸ್ ಜಾರಿಗೊಳಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಿದರು.ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದ ಸಮಾರಂಭದಲ್ಲಿ ಮಾತನಾಡಿದ್ದ ಕಾಡಸಿದ್ದೇಶ್ವರ ಸ್ವಾಮೀಜಿ, ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಕಳೆದ ಎರಡು ತಿಗಂಗಳುಗಳಿಂದ ದೇವಾಲಯಕ್ಕೆ ಹೋಗಬೇಡಿ ಎಂದು ಪ್ರಚಾರ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳ ಕೃಪಾಪೋಷಿತ ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ಕಲಾವಿದರು ಸೇರಿ ಬಸವ ಸಂಸ್ಕೃತಿ ಅಭಿಯಾನ ಎನ್ನುವ ನಾಟಕವನ್ನು ರಾಜ್ಯಾದ್ಯಂತ ಮಾಡುತ್ತಿದ್ದಾರೆ. ಗುಡಿಯಲ್ಲಿ ದೇವರಿಲ್ಲ. ಮನೆಯಲ್ಲಿನ ದೇವರನ್ನು ಹೊರಗೆ ಹಾಕಿ ಎನ್ನುತ್ತಿದ್ದಾರೆ.
ಇವರಿಗೆ ನಾನೇ ಬುದ್ಧಿ ಹೇಳಬೇಕು ಎಂದು ಕೆಲ ಅಸಂವಿಧಾನಿಕ ಪದ ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದರು.ಈ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಲಿಂಗಾಯತ ಮಠಾಧೀಶರು ಶ್ರೀಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
