ನವದೆಹಲಿ,ಸೆ.23- ಬಿಡಿಎ ವಸತಿ ಯೋಜನೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇತರರ ವಿರುದ್ಧ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಇಂದು ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಚಂದ್ರ ಚೂಡ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ತನಿಖೆಗೆ ತಡೆ ನೀಡಿದೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳೊಳಗೆ ಉತ್ತರಿಸುವಂತೆ ಸೂಚನೆ ನೀಡಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಹೈಕೋರ್ಟ್ ಸೂಚನೆ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ನಂತರ ಲೋಕಾಯುಕ್ತ ತನಿಖೆಗೆ ಆದೇಶಿಸಲಾಗಿತ್ತು.
ಇದನ್ನು ಪ್ರಶ್ನಿಸಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಹಾಗೂ ಇತರರು ಸುಪ್ರೀಂಕೋರ್ಟ್‍ಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪೂರ್ವಾನುಮತಿ ಇರಲಿಲ್ಲ. ಹಾಗಿದ್ದರೂ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶ ಮಾಡಿದೆ. ಇದಕ್ಕೆ ತಡೆ ನೀಡಬೇಕು ಎಂದು ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನು ಮಾನ್ಯ ಮಾಡಿ ನ್ಯಾಯಾಲಯ ತಡೆ ನೀಡಿರುವುದರಿಂದ ಬಿ.ಎಸ್.ಯಡಿಯೂರಪ್ಪ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ವಿಜಯೇಂದ್ರ ಸೇರಿದಂತೆ 9 ಮಂದಿ ಸದ್ಯ ನಿರಾಳರಾಗಿದ್ದಾರೆ.