ಎಸ್‍ಸಿಪಿ, ಟಿಎಸ್‍ಪಿ ಯೋಜನೆಯ 28 ಸಾವಿರ ಕೋಟಿ ಬಳಕೆಗೆ ಒಪ್ಪಿಗೆ

ಬೆಂಗಳೂರು, ಮೇ 20- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಕಲ್ಯಾಣಕ್ಕಾಗಿ ಎಸ್‍ಸಿಪಿ, ಟಿಎಸ್‍ಪಿಯ 28 ಸಾವಿರ ಕೋಟಿ ರೂ. ಅನುದಾನವನ್ನು ಈ ವರ್ಷ ಬಳಕೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದಲ್ಲಿಂದು ನಡೆದ ರಾಜ್ಯ ಅನುಸೂಚಿತ ಜಾತಿಗಳು, ಅನುಸೂಚಿತ ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಗೆ 500 ಕೋಟಿ ರೂ. ಹೆಚ್ಚುವರಿಯಾಗಿ ನೀಡಲಾಗುವುದು. ಕೃಷಿ ಇಲಾಖೆಗೆ 1061 ಕೋಟಿ, ತೋಟಗಾರಿಕೆ ಇಲಾಖೆಗೆ 187 ಕೋಟಿ ರೂ., ಆರೋಗ್ಯ ಇಲಾಖೆಗೆ 1300 ಕೋಟಿ ರೂ. ನೀಡಲು ಅನುಮೋದನೆ ನೀಡಲಾಯಿತು. ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ರಾಜ್ಯದಲ್ಲಿ ಪ್ರವೇಶ ಮಾಡಿದ ತಾಣಗಳ ಅಭಿವೃದ್ಧಿಗೆ 20 ಕೋಟಿ ರೂ., ಎಸ್‍ಸಿ-ಎಸ್‍ಟಿ ವಿದ್ಯಾರ್ಥಿಗಳ ಬಸ್ ಪಾಸ್ ಉಚಿತವಾಗಿ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಹಕಾರ ಕ್ಷೇತ್ರದಲ್ಲಿ ಎಸ್‍ಸಿ-ಎಸ್‍ಟಿ ಸಮುದಾಯದವರಿಗೆ ಸದಸ್ಯತ್ವ ನೀಡಲು 203 ಕೋಟಿ ರೂ. ಹಾಗೂ ಕಂದಾಯ ಇಲಾಖೆಯಲ್ಲಿ ಪಿಂಚಣಿ ಹೆಚ್ಚಳಕ್ಕಾಗಿ 3748 ಕೋಟಿ ರೂ. ವೆಚ್ಚಕ್ಕೆ ಅನುಮತಿಸಲಾಯಿತು. ಕೌಶಲ್ಯಾಭಿವೃದ್ಧಿಗೆ 180 ಕೋಟಿ ರೂ ನೀಡಲು ನಿರ್ಣಯಿಸಿದ್ದು, ನಿಗಮ ಮಂಡಳಿಗಳ ಅನುದಾನವನ್ನು ಹೆಚ್ಚಿಸಲು ಇನ್ನೊಂದು ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು.

ಅದೇ ರೀತಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಹಾಗೂ ಮಲೆನಾಡು ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಶಾಸಕರಿಗೆ ತಲಾ ಒಂದು ಕೋಟಿ ರೂ. ನೀಡಲು ನಿರ್ಧರಿಸಲಾಯಿತು.

ಗಂಗಾ ಕಲ್ಯಾಣ ಯೋಜನೆಯಡಿ 9 ಸಾವಿರ ಕೋಟಿ ರೂ. ವೆಚ್ಚ ಮಾಡಲು ಅನುಮೋದನೆ ನೀಡಲಾಗಿದೆ ಎಂದ ಅವರು, ಗಂಗಾ ಕಲ್ಯಾಣ ಯೋಜನೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.