ಬೆಂಗಳೂರು,ಆ.16- ಎಸ್‍ಡಿಪಿಐ ಪಕ್ಷದಿಂದಾಗಿ ಕಾಂಗ್ರೆಸ್‍ನ ಮತಗಳು ವಿಭಜನೆಯಾಗುತ್ತವೆ ಎಂಬ ಕಾರಣಕ್ಕೆ ಬಿಜೆಪಿ ಅದನ್ನು ನಿಷೇಧ ಮಾಡಲು ಪ್ರಯತ್ನಿಸುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಪ್ರಚೋದನಾಕಾರಿ ಹೇಳಿಕೆಗಳಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ ಎಂದು ಆರೋಪಿಸಿದರು. ಸರ್ಕಾರ ಕಾನೂನು ಬಿಗಿ ಮಾಡಬೇಕು. ಗಲಭೆ ಪೀಡಿತ ಪ್ರದೇಶಗಳಿಗೆ ದಕ್ಷ ಅಧಿಕಾರಿಗಳನ್ನು ನಿಯೋಜನೆ ಮಾಡಿ ಅವರಿಗೆ ಪೂರ್ಣ ಪ್ರಮಾಣದ ಸ್ವಾತಂತ್ರ್ಯ ನೀಡಬೇಕು. ಆಗ ಮಾತ್ರ ಪರಿಸ್ಥಿತಿ ತಿಳಿಗೊಳ್ಳಲು ಕಾರಣ. ಆಗ ಬಿಜೆಪಿಯವರು ಪೊಲೀಸ್ ಅಧಿಕಾರಿಗಳ ಕೈ ಕಟ್ಟಿಹಾಕಿದ್ದಾರೆ ಎಂದು ದೂರಿದರು.
ಈ ಹಿಂದೆ ಹಿಜಾಬ್, ಹಲಾಲ್‍ಕಟ್ ವಿವಾದಗಳು ತೀವ್ರಗೊಂಡಾಗ ಸರ್ಕಾರ ನಿಯಂತ್ರಣ ಮಾಡಲಿಲ್ಲ. ಸಹಜವಾಗಿಯೇ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಸರ್ಕಾರ ನಿಷ್ಪಕ್ಷಪಾತವಾಗಿ ವರ್ತಿಸಬೇಕು. ಗಲಭೆ ಮಾಡುತ್ತಿರುವವರು ಎಷ್ಟೇ ದೊಡ್ಡವರಾಗಿದ್ದರೂ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಅದನ್ನು ಮಾಡಿಲ್ಲ. ಪದೇ ಪದೇ ಗಲಭೆಗಳಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಕಾನೂನು ಸುವ್ಯವಸ್ಥೆ, ಆಡಳಿತ, ಬಂಡವಾಳ ಹೂಡಿಕೆ ಸೇರಿದಂತೆ ಹಲವಾರು ವಿಷಯಗಳಲ್ಲಿ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾಗ ಎಸ್‍ಡಿಪಿಐ ನಿಷೇಧವಾಗಬೇಕು ಎಂದು ಒತ್ತಾಯಿಸುತ್ತಿದ್ದರು. ಅಧಿಕಾರಕ್ಕೆ ಬರುತ್ತಿದ್ದಂತೆ ಆ ಬಗ್ಗೆ ಉಸಿರೇ ಎತ್ತುತ್ತಿಲ್ಲ. ಎಸ್‍ಡಿಪಿಐ ಅಸ್ತಿತ್ವದಲ್ಲಿದ್ದರೆ ಕಾಂಗ್ರೆಸ್‍ನ ಮತಗಳು ವಿಭಜನೆಯಾಗುತ್ತವೆ.
ರಾಜಕೀಯವಾಗಿ ನಮಗೆ ಲಾಭವಾಗುತ್ತದೆ ಎಂಬುದು ಬಿಜೆಪಿ ಲೆಕ್ಕಾಚಾರ. ಹೀಗಾಗಿ ಅವರು ಎಸ್‍ಡಿಪಿಐ ಮತ್ತು ಪಿಎಫ್‍ಐನಂತಹ ಸಂಘಟನೆಗಳಿಗೆ ಪರೋಕ್ಷ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.