ಬೆಂಗಳೂರು,ನ.14-ಕಬ್ಬಿಗೆ ಸೂಕ್ತ ಬೆಂಬಲ ಬೆಲೆಗೆ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕಬ್ಬು ತುಂಬಿದ್ದ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಮಹಲಿಂಗಪುರ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿವೆ.
ಹಿಂಸಾಚಾರಕ್ಕೆ ಕಾರಣವಾಗಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸರು ಶೋಧ ನಡೆಸುತ್ತಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ.ಮುಧೋಳ ತಾಲ್ಲೂಕಿನಾದ್ಯಂತ ಮೂರು ದಿನ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳ ಪುಟೇಜ್ ಹಾಗೂ ದೃಶ್ಯ ಮಾಧ್ಯಮದವರಿಂದ ವಿಡಿಯೋ ಪುಟೇಜ್ ಪಡೆದು ಪೊಲೀಸರು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದು, ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚುತ್ತಿದ್ದಾರೆ.
ಪ್ರತಿಭಟನಾ ಸ್ಥಳದಲ್ಲಿದ್ದ ಕೆಲವರು ರೈತರೇ ಅಥವಾ ರೈತರ ಹೆಸರಿನಲ್ಲಿ ಕೃತ್ಯವೆಸಗಿದ್ದಾರೆಯೇ ಎಂಬುವುದರ ಬಗ್ಗೆಯೂ ಸಹ ಪೊಲೀಸರು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ.
ಮೊಕ್ಕಾಂ: ಘಟನೆ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿದೇರ್ಶಕರಾದ ಆರ್. ಹಿತೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಪ್ರತಿ ಟನ್ ಕಬ್ಬಿಗೆ 3500 ರೂ. ದರ ನೀಡುವಂತೆ ರೈತರು ನಡೆಸುತ್ತಿರುವ ಪ್ರತಿಭಟನೆ ನಿನ್ನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ 20ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಲಿಗಳಿಗೆ ಹಾಗೂ ಐದು ಬೈಕ್‌ಗಳಿಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಘಟನೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಸಚಿವರು ಹಾಗೂ ಶಾಸಕರು ಭೇಟಿ ನೀಡಿ ಅವಲೋಕಿಸಿದ್ದಾರೆ.
