ಬೆಂಗಳೂರು, ಅ.22– ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ಕುರಿತಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಪಿ.ಯೋಗೇಶ್ವರ್ ಹಾಗೂ ಜೆಡಿಎಸ್ ನಡುವೆ ಆರೋಪ-ಪ್ರತ್ಯಾರೋಪ ಶುರುವಾಗಿದೆ. ಇದರಿಂದ ಎನ್ಡಿಎ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು ಮುಂದುವರೆದಿರುವುದಲ್ಲದೆ, ತೀವ್ರ ಕುತೂಹಲ ಕೆರಳಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಮ ಕುಟುಂಬದವರನ್ನು ಸ್ಪರ್ಧೆಗಿಳಿಸುತ್ತಾರೆಯೋ? ಅಥವಾ ಸ್ಥಳೀಯರಿಗೆ ಅವಕಾಶ ನೀಡುತ್ತಾರೆಯೋ? ಎಂಬ ಜಿಜ್ಜಾಸೆ ರಾಜಕೀಯವಾಗಿ ನಡೆಯುತ್ತಿದೆ.
ನಮ ಚಿಹ್ನೆಯಡಿ ಸ್ಪರ್ಧಿಸಲು ಯೋಗೇಶ್ವರ್ ಒಪ್ಪುತ್ತಿಲ್ಲ. ಬಿಜೆಪಿ ಚಿಹ್ನೆಯಡಿ ಸ್ಪರ್ಧೆಗೆ ಪಟ್ಟು ಹಿಡಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ಆದರೆ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ ಎಂದು ಆರೋಪಿಸಿರುವ ಯೋಗೇಶ್ವರ್ ಎನ್ಡಿಎ ಟಿಕೆಟ್ಗಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ.
ಈ ನಡುವೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಯೋಗೇಶ್ವರ್ ಕಾಂಗ್ರೆಸ್ ಸೇರಲಿದ್ದು, ಆ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಯೋಗೇಶ್ ನಡೆಯ ಮೇಲೆ ಮೂರು ಪಕ್ಷಗಳು ಕಣ್ಣಿಟ್ಟಿವೆ. ಸ್ವತಂತ್ರವಾಗಿ ಯೋಗೇಶ್ವರ್ ಸ್ಪರ್ಧಿಸುತ್ತಾರೋ ಅಥವಾ ರಾಜಕೀಯ ಪಕ್ಷದಿಂದ ಸ್ಪರ್ಧಿಸುತ್ತಾರೋ ಎಂಬ ಕುತೂಹಲ ಹೆಚ್ಚಾಗಿದೆ.
ಚನ್ನಪಟ್ಟಣ ಕ್ಷೇತ್ರದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದು, ಸೂಕ್ತ ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಜೆಡಿಎಸ್ ಹೇಳಿದೆ. ಈ ನಡುವೆ ಸ್ಪರ್ಧಾಕಾಂಕ್ಷಿಯಾಗಿರುವುದಾಗಿ ಎಲ್ಲೂ ಹೇಳಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶ ಹೆಚ್.ಸಿ.ಜಯಮುತ್ತು ಅವರ ಹೆಸರು ಕೂಡ ಚಲಾವಣೆಯಲ್ಲಿದೆ. ಯೋಗೇಶ್ವರ್ ಜೆಡಿಎಸ್ ಚಿಹ್ನೆಯಡಿ ಒಪ್ಪಿದರೆ ಅವರೇ ಎನ್ಡಿಎ ಅಭ್ಯರ್ಥಿಯಾಗಲಿದ್ದಾರೆ. ಒಂದು ವೇಳೆ ಅವರು ಒಪ್ಪದಿದ್ದರೆ, ಸ್ಥಳೀಯರಿಗೆ ಅವಕಾಶ ಕಲ್ಪಿಸಿದರೆ ಜಯಮುತ್ತು ಅಭ್ಯರ್ಥಿಯಾಗಲಿದ್ದಾರೆ.ಇಲ್ಲವೆ ಪಕ್ಷದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಕುಟುಂಬದವರಿಗೆ ಮಣೆ ಹಾಕಿದರೆ, ನಿಖಿಲ್ ಕುಮಾರಸ್ವಾಮಿ ಅಥವಾ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಎನ್ಡಿಎ ಅಭ್ಯರ್ಥಿಯಾಗಲಿದ್ದಾರೆ.
ಮೂರು ಕ್ಷೇತ್ರಗಳ ಪೈಕಿ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಕುಮಾರಸ್ವಾಮಿ ಅವರ ವಿವೇಚನೆಗೆ ಬಿಡಲಾಗಿದೆ. ಅಂತಿಮ ಕ್ಷಣದಲ್ಲಿ ಯಾರನ್ನು ಸ್ಪರ್ಧೆಗೆ ಇಳಿಸಲಿದ್ದಾರೆ ಎಂಬ ತೀವ್ರ ಕುತೂಹಲ ಕೆರಳಿಸಿದೆ.
ಹೈ ವೋಲ್ಟೇಜ್ ಕ್ಷೇತ್ರವೆಂದು ಪರಿಗಣಿತವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ಏರ್ಪಡಲಿದೆ. ಆಡಳಿತ ಮತ್ತು ಪ್ರತಿಪಕ್ಷಗಳೆರಡು ಸಮರ್ಥ ಅಭ್ಯರ್ಥಿ ಕಣಕ್ಕಿಳಿಸಲು ತಂತ್ರಗಾರಿಕೆ ರೂಪಿಸುತ್ತಿವೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಜೆಡಿಎಸ್ ಈ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವುದರಿಂದ ಅಭ್ಯರ್ಥಿಗಳ ಸ್ಪರ್ಧೆಗೆ ಮುನ್ನವೇ ಕಾವೇರತೊಡಗಿದೆ.