Saturday, March 1, 2025
Homeರಾಜ್ಯದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ, ಪರೀಕ್ಷೆ ಕೇಂದ್ರಗಳಿಗೆ ಸಚಿವ ಮಧುಬಂಗಾರಪ್ಪ ಭೇಟಿ

ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ, ಪರೀಕ್ಷೆ ಕೇಂದ್ರಗಳಿಗೆ ಸಚಿವ ಮಧುಬಂಗಾರಪ್ಪ ಭೇಟಿ

Second PUC Examination-1 begins, Minister Madhubangarappa visits examination centers

ಬೆಂಗಳೂರು,ಫೆ.28 – ಪ್ರಸಕ್ತ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಇಂದಿನಿಂದ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ತೆರಳಿದರು. ಇಂದು ಬೆಳಗ್ಗೆ 10 ರಿಂದ 1 ಗಂಟೆವರೆಗೆ ಕನ್ನಡ, ಆರೇಬಿಕ್ ಪರೀಕ್ಷೆ ನಡೆಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇಂದಿನಿಂದ ಮಾರ್ಚ್ 20ವರೆಗೆ ರಾಜ್ಯಾದ್ಯಂತ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ದತೆ ಮಾಡಿಕೊಂಡಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 7,13,812 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸಬರು 6,61,474 ಪುನರಾವರ್ತಿತ 34,071 ಹಾಗೂ 18,317 ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ಇಂದು ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪುಷ್ಪಗುಚ್ಛ ನೀಡಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಭಯ, ಆತಂಕ ಬಿಟ್ಟು ಧೈರ್ಯವಾಗಿ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಯಶಸ್ಸು ನಿಮ್ಮದಾಗಲಿ ಎಂದು ಸಚಿವರು ಶುಭ ಹಾರೈಸಿದ್ದಾರೆ.

ಪರೀಕ್ಷಾ ಸಿದ್ಧತೆ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರಲ್ಲದೆ, ಪರೀಕ್ಷಾ ಕೊಠಡಿಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ. ರಾಜ್ಯದಲ್ಲಿ ದ್ವಿತೀಯ ಪರೀಕ್ಷೆ ಬರೆಯುತ್ತಿರುವ 7.13 ಲಕ್ಷ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾರೈಸಿದ್ದಾರೆ.

ಈ ಪರೀಕ್ಷೆ ನಿಮ್ಮ ಜೀವನದ ಒಂದು ಘಟ್ಟವಷ್ಟೇ, ಆತ್ಮವಿಶ್ವಾಸ ಮತ್ತು ಉತ್ತಮ ತಯಾರಿಯೊಂದಿಗೆ ಪರೀಕ್ಷೆ ಎದುರಿಸಿ. ಯಾವುದೇ ಕಾರಣಕ್ಕೂ ಹೆದರುವ ಅಗತ್ಯವಿಲ್ಲ. ಗುರಿಮುಟ್ಟಲು ತಾಯಿ ಶಾರದೆ ಶಕ್ತಿ ನೀಡಲಿ ಎಂದು ಹಾರೈಸಿದ್ದಾರೆ.
ಯಾವುದೇ ಒತ್ತಡಕ್ಕೆ ಒಳಗಾಗದೇ ಆತ್ಮವಿಶ್ವಾಸ ಮತ್ತು ಧೈರ್ಯದಿಂದ ಪರೀಕ್ಷೆ ಎದುರಿಸಿ, ಯಶಸ್ಸು ನಿಮ್ಮದಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಕೋರಿದ್ದಾರೆ.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ಪ್ರಕಾರ, ಪರೀಕ್ಷೆ ಸಂದರ್ಭದಲ್ಲಿ ನಕಲು ಮಾಡುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ವೀಕ್ಷಣೆ ಮಾಡಲಾಗುತ್ತಿದೆ. ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜಿಸುವ ವ್ಯಕ್ತಿಗಳ ವಿರುದ್ಧ ಶಿಕ್ಷಣ ಕಾಯಿದೆಯ ನಿಯಮಗಳಡಿಯಲ್ಲಿ ಅಗತ್ಯವಾದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಸ್ಟಾರ್ಟ್ ವಾಚ್, ಈಯರ್ ಫೋನ್ ಸೇರಿದಂತೆ ಎಲ್ಲಾ ವಿಧದ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿತ್ತು |

RELATED ARTICLES

Latest News