ಬೆಂಗಳೂರು,ಜು.28- ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು, ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್, ಗುಪ್ತಚರ ಇಲಾಖೆಯ ಮುಖ್ಯಸ್ಥ ಎಡಿಜಿಪಿ ದಯಾನಂದ್, ನಗರ ಪೊಲೀಸ್ ಆಯುಕ್ತ ಪ್ರತಾಪ್‍ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಕ್ಕೆ ಗುರಿಯಾಗಬೇಕಾಗಿದೆ. ಇದರಿಂದ ಸರ್ಕಾರಕ್ಕೆ ಮುಜುಗರವಾಗುತ್ತಿದೆ. ಪದೇ ಪದೇ ಹತ್ಯೆಯಾಗುತ್ತಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಇದೇ ರೀತಿ ನಿರ್ಲಕ್ಷ್ಯ ಮನೋಭಾವವನ್ನು ಮುಂದುವರೆಸಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗದಿದ್ದರೆ ಬಿಟ್ಟು ಹೋಗಿ. ವಿನಾಃಕಾರಣ ಸರ್ಕಾರಕ್ಕೆ ಕೆಟ್ಟ ಹೆಸರು ತರುವಂತಹ ಕೆಲಸ ಮಾಡಬೇಡಿ. ಗುಪ್ತಚರ ಇಲಾಖೆ ಏನು ಮಾಡುತ್ತಿದೆ ? ಕರಾವಳಿ ಸೂಕ್ಷ್ಮ ಪ್ರದೇಶ ಎಂಬುದು ಗೊತ್ತಿಲ್ಲವೆ ? ಪ್ರವೀಣ್‍ನನ್ನು ಗುರಿಯಾಗಿರಿಸಿಕೊಂಡಿದ್ದಾರೆ ಎಂಬುದನ್ನು ಗೊತ್ತಿದ್ದರೂ ಏಕೆ ನಿರ್ಲಕ್ಷ್ಯ ವಹಿಸಿದ್ದೀರೀ ಎಂದು ಪ್ರಶ್ನಿಸಿದ್ದಾರೆ.
ಗೃಹ ಇಲಾಖೆಯ ವೈಫಲ್ಯದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವಂತಾಗಿದೆ. ರಾಜ್ಯ ಸರ್ಕಾರದ ಒಂದು ವರ್ಷದ ಜನೋತ್ಸವವನ್ನು ರದ್ದುಪಡಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳ ಬೇಜವಾಬ್ದಾರಿತನವನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ಶಿವಮೊಗ್ಗದಲ್ಲಿ ಹರ್ಷ ಎಂಬ ಯುಕನ ಹತ್ಯೆಯಾಗಿದೆ. ಇದರ ಬೆನ್ನಲ್ಲೇ ಸೂಳ್ಯ ತಾಲ್ಲೂಕಿನಲ್ಲಿ ಪ್ರವೀಣ್ ಹತ್ಯೆಯಾಗಿ ಕರಾವಳಿ ಭಾಗದಲ್ಲಿ ಜನರು ಅದರ ವಿರುದ್ಧ ಸಿಡಿದೆದ್ದಿದ್ದಾರೆ. ಇಂತಹ ಪರಿಸ್ಥಿತಿಗೆ ಯಾರನ್ನು ಹೊಣೆ ಮಾಡಬೇಕೆಂದು ಗುಡುಗಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಅನುಮಾನಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಬೇಕಿತ್ತಲ್ಲವೇ? ಇಂತಹ ಘಟನೆಗಳು ಮರುಕಳಿಸಿದರೆ ಸರ್ಕಾರ ಮುಜುಗರ ಎದುರಿಸಬೇಕಾಗುತ್ತದೆ. ಒಳ್ಳೆಯ ಹೆಸರು ಬರುವುದಿಲ್ಲ. ಇದು ನಿಮಗೆ ನೀಡುತ್ತಿರುವ ಕಡೆಯ ಎಚ್ಚರಿಕೆ ಎಂದು ಸಿಎಂ ಹೇಳಿದ್ದಾರೆ.