ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಕಂಬನಿ

Social Share

ಬೆಂಗಳೂರು,ಜ.3- ನಡೆದಾಡುವ ದೇವರು , ಕಾಯಕಯೋಗಿ, ಮಹಾಸಂತ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀಸಿದ್ದೇಶ್ವರ ಸ್ವಾಮೀಜಿಯವರ ನಿಧನಕ್ಕೆ ಪ್ರಧಾನಿ ನರೇಂದ್ರಮೋದಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಟ್ವಿಟರ್‍ನಲ್ಲಿ ಶ್ರೀಗಳ ಫೋಟೋ ಹಂಚಿಕೊಂಡು ಭಾವುಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರ ಗಣನೀಯ ಸೇವೆಗಾಗಿ ಸಮಾಜ ಅವರನ್ನು ಸ್ಮರಿಸುತ್ತಿದೆ. ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು.ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ.. ಎಂದಿದ್ದಾರೆ.

ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೂ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯ. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ.

ನಾಡಿನಾದ್ಯಂತ ಇರುವ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಪರಮಪೂಜ್ಯರ ಇಚ್ಚೆಯಂತೆಯೇ ಅಂತಿಮ ವಿಧಿವಿಧಾನ : ಸಿಎಂ

ಕೇಂದ್ರ ಸಚಿವ ಜೋಶಿ ಅವರು ಸಂತಾಪ ಸೂಚಿಸಿ, ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಅನಾರೋಗ್ಯದಿಂದ ಬಳಲುತ್ತಿದ್ದ ಮಹಾಚೇತನವನ್ನು ಮೊನ್ನೆಯಷ್ಟೇ ಕಂಡು, ಅವರ ಆರೋಗ್ಯ ವಿಚಾರಿಸಿ ಬಂದಿದ್ದೆವು. ಭಗವಂತ ಅವರಿಗೆ ಇನ್ನಷ್ಟು ಆಯುಷ್ಯ ನೀಡಲಿ ಎಂದು ಪ್ರಾರ್ಥಿಸಿದ್ದೆ. ಆದರೆ ಭಗವಂತನ ಇಚ್ಛೆ ನಮ್ಮೆಲ್ಲರನ್ನೂ ಮೀರಿದ್ದಾಗಿದೆ ಎಂದು ದು:ಖ ವ್ಯಕ್ತಪಡಿಸಿದ್ದಾರೆ.

ಸಿದ್ದೇಶ್ವರ ಸ್ವಾಮೀಜಿ ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದು, ದೇಶ ಕಂಡ ಶ್ರೇಷ್ಠ ಸಂತರು, ಆಧ್ಯಾತ್ಮಿಕ ಪ್ರವಚನಕಾರರಾದ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟು ಮಾಡಿದೆ ಎಂದು ಕಂಬನಿ ಮಿಡಿದಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸಿದ್ದೇಶ್ವರ ಸ್ವಾಮೀಜಿಗಳ ಲಿಂಗೈಕ್ಯಕ್ಕೆ ಸಂತಾಪ ಸೂಚಿಸಿ ಸ್ವಾಮೀಜಿಯವರು ನಿಷ್ಕಾಮ ಕರ್ಮದಿಂದಾಗಿ ನಡೆದಾಡುವ ದೇವರು ಎಂದೇ ಜನಮಾನಸದಲ್ಲಿ ಹೆಸರಾಗಿದ್ದರು. ತಾವು ಪಡೆದದ್ದೆಲ್ಲವನ್ನೂ ಸಮಾಜಕ್ಕೆ ಸಲ್ಲಿಸಬೇಕೆಂಬುದೇ ಅವರ ಬದುಕಿನ ಪರಮ ಧ್ಯೇಯವಾಗಿತ್ತು. ಪ್ರತಿಯೊಂದು ವಸ್ತುವಿನಲ್ಲೂ ಭಗವಂತನ ಚೈತನ್ಯವನ್ನು ಅನುಭವಿಸಿ, ಅದನ್ನು ಬೇರೆಯವರಿಗೂ ಮನ ಮುಟ್ಟುವಂತೆ ವಿವರಿಸುತ್ತಿದ್ದರು ಎಂದು ಅವರು ಸ್ಮರಿಸಿದ್ದಾರೆ.

ನಡೆದಾಡುವ ದೇವರು, ವಿಜಯಪುರದ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಅವರ ಅಗಲುವಿಕೆಯಿಂದ ಅತೀವ ದುಃಖವಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂತಾಪ ಸೂಚಿಸಿದ್ದಾರೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ ಶ್ರೀಗಳ ಸ್ಮರಿಸಿ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ನಡೆದಾಡುವ ವಿಶ್ವಕೋಶ. ಅವರ ಜ್ಞಾನ ಬೋಧನೆಯ ಲಾಭ ಪಡೆದು ಸನ್ಮಾರ್ಗದಲ್ಲಿ ನಡೆಯಬೇಕು. ಇವರ ಜ್ಞಾನ ಖ್ಯಾತಿ ದೇಶ-ವಿದೇಶಗಳಲ್ಲಿ ಪಸರಿಸಿದೆ. ಇಂತಹ ಮಹಾನ್ ಜ್ಞಾನಿಯ ಜ್ಞಾನ ಸುಧೆಯ ಬೆಳಕಿನಲ್ಲಿ ಎಲ್ಲರೂ ಮುನ್ನಡೆಯುವ ಅಗತ್ಯವಿದ್ದು, ಇದುವೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿಷೇಧ

ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಶಾಸಕರು ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕರು ಸೇರಿದಂತೆ ಹಲವರು ಗಣ್ಯರು ಶ್ರೀಗಳ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

#SiddeshwarSwami, #passesaway, #PMModi, #CMBommai,

Articles You Might Like

Share This Article