ಡಿಕೆಶಿ ಬಂಧನ ಖಂಡಿಸಿ ನಾಳಿನ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ : ರಾಮಲಿಂಗಾರೆಡ್ಡಿ

ಬೆಂಗಳೂರು, ಸೆ.10-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ಖಂಡಿಸಿ ವಿವಿಧ ಸಂಘಟನೆಗಳು ನಾಳೆ ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿ ಭಾಗವಹಿಸಲಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇಂದು ಬೆಂಗಳೂರು ನಗರದ ಮೂರು ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರು, ಬಿಬಿಎಂಪಿ ಸದಸ್ಯರು, ಮಾಜಿ ಮಹಾಪೌರರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳ ಸಭೆ ಕರೆಯಲಾಗಿತ್ತು.

ನಾಳೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಿಂದ ಫ್ರೀಡಂ ಪಾರ್ಕ್‍ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅದರಲ್ಲಿ ವಿವಿಧ ಸಂಘಟನೆಗಳು ಭಾಗವಹಿಸುತಿದ್ದು, ಕಾಂಗ್ರೆಸ್ ನಾಯಕರು ಸಹ ಭಾಗವಹಿಸಲಿದ್ದಾರೆ. ಪ್ರತಿಭಟನೆ ವೇಳೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಚನೆ ನೀಡಲಾಗಿದೆ ಎಂದರು.

ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ, ಚುನಾವಣಾ ಆಯೋಗ, ಆರ್‍ಬಿಐ ನಂತಹ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಬಂಧನ ಸಂಪೂರ್ಣ ಅಕ್ರಮವಾಗಿದೆ. ದೆಹಲಿಯಲ್ಲಿ ಆದಾಯ ತೆರಿಗೆ ದಾಳಿ ನಡೆಸಿದಾಗ ಸಿಕ್ಕಂತಹ 8.5ಕೋಟಿ ಹಣ ತಮ್ಮದೆಂದು ಸುನೀಲ್‍ಶರ್ಮಾ ಒಪ್ಪಿಕೊಂಡಿದ್ದಾರೆ. ದಾಳಿ ನಡೆದ ಮನೆ ಕೂಡ ಡಿ.ಕೆ.ಶಿವಕುಮಾರ್ ಅವರದ್ದಲ್ಲ, ಸುನೀಲ್ ಶರ್ಮಾ ಅವರದ್ದು. ಆದರೂ ದುರುದ್ದೇಶಪೂರ್ವಕವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಲಾಗಿದೆ.

ಗುಜರಾತ್‍ನ ಕಾಂಗ್ರೆಸ್ ಶಾಸಕರಿಗೆ ಬೆಂಗಳೂರಿನಲ್ಲಿ ರಕ್ಷಣೆ ನೀಡಿದ ಬಳಿಕ ಡಿ.ಕೆ.ಶಿವಕುಮಾರ್ ಅವರ ಮೇಲೆ ದ್ವೇಷ ಸಾಧನೆ ಮಾಡುತ್ತಿರುವ ಕೇಂದ್ರದ ಬಿಜೆಪಿ ನಾಯಕರು, ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.

ಕಪ್ಪು ಹಣ ಹೊಂದಿರುವವರನ್ನು, ತೆರಿಗೆ ಕಟ್ಟದಿರುವವರನ್ನು, ಹವಾಲಾ ಹಣ ವರ್ಗಾವಣೆ ಮಾಡುವವರ ವಿರುದ್ಧ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ತನಿಖೆ ಮಾಡಲು ನಮ್ಮ ಯಾವ ವಿರೋಧವೂ ಇಲ್ಲ. ಆದರೆ ದೆಹಲಿ ನಾಯಕರ ಮಾರ್ಗದರ್ಶನದ ಮೇಲೆ ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಟ್ಟುಕೊಂಡು ಕ್ರಮ ಕೈಗೊಳ್ಳುವುದರ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಸ್ವಾಯತ್ತ ಸಂಸ್ಥೆಗಳು ತಮ್ಮ ಸ್ವಂತಿಕೆಯನ್ನು ಕಳೆದುಕೊಂಡಿವೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಗೂ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದ ಬಹಳಷ್ಟು ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ನಗರದ ಜಿಲ್ಲಾಧ್ಯಕ್ಷರಾದ ಜಿ.ಶೇಖರ್, ರಾಜ್‍ಕುಮಾರ್, ಕಾಂಗ್ರೆಸ್ ಮುಖಂಡರಾದ ಮನೋಹರ್ ಸೇರಿದಂತೆ ಹಲವಾರು ಮಂದಿ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.