ಬೆಂಗಳೂರು,ಆ.16- ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣ ಇದೀಗ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಕಮಲ ನಾಯಕರು ಮುಗಿಬಿದ್ದಿದ್ದಾರೆ. ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಎಸ್‍ಡಿಪಿಐ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಹಲ್ಲೆ ನಡೆಸುತ್ತಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಇದಾಗಿದೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಗೃಹ ಸಚಿವ ಅರಗ ಜ್ಞಾನೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ರಾಜ್ಯಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮತ್ತಿತರರು ಶಿವಮೊಗ್ಗ ಗಲಭೆಗೆ ಕಾಂಗ್ರೆಸ್ ನೇರ ಕಾರಣ ಎಂದು ಆರೋಪಿಸಿದ್ದಾರೆ.
ನಳೀನ್‍ಕುಮಾರ್ ಕಟೀಲ್ ಮಾತನಾಡಿ, ಎಸ್‍ಡಿಪಿಐಗೆ ಕಾಂಗ್ರೆಸ್ ಬೆಂಬಲವಿದೆ. ಅವರ ಸಹಕಾರವಿಲ್ಲದೆ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲು ಸಾಧ್ಯವಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಕಾಂಗ್ರೆಸ್ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಎಸ್‍ಡಿಪಿಐ ಕಾರ್ಯಕರ್ತರ ಉದ್ದಟತನ ದಿನದಿಂದ ದಿನಕ್ಕೆ ಹೆಚ್ಚಗುತ್ತಿದೆ. ಕಾಂಗ್ರೆಸ್ ಪಕ್ಷದ ಬೆಂಬಲವಿದೆ ಎಂದು ನಮ್ಮ ಕಾರ್ಯಕರ್ತರಿಗೆ ಚೂರಿ ಇರಿಯುವ ಕೆಲಸ ಮಾಡಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಗಲಭೆಗಳ ಹಿಂದೆ ಎಸ್‍ಡಿಪಿಐ ಕಾರ್ಯಕರ್ತರ ಕುಮ್ಮಕ್ಕಿದೆ. ಈ ಸಂಘಟನೆಯನ್ನು ನಿಷೇಧ ಮಾಡುವಂತೆ ನಾವು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಕೇಂದ್ರ ಗೃಹ ಇಲಾಖೆಗೆ ವರದಿ ನೀಡಲಿದ್ದೇವೆ ಎಂದು ಹೇಳಿದರು.
ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಇದೇ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಬೇರೆ ಬೇರೆ ಕಡೆ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದ ದುಷ್ಕರ್ಮಿಗಳೇ ಪ್ರೇಮ್‍ಸಿಂಗ್‍ಗೆ ಚಾಕು ಇರಿದಿದ್ದಾರೆ. ಯಾರೇ ಇರಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದರು.
ಈಗಾಗಲೇ ಪೊಲೀಸರು ಶಂಕೆ ಹಿನ್ನೆಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ನಾನು ಮಾಧ್ಯಮಗಳಿಗೆ ಎಲ್ಲ ವಿಷಯಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಜ್ಞಾನೇಂದ್ರ ಸ್ಪಷ್ಟಪಡಿಸಿದರು.
ಚುನಾವಣೆಗೆ ಹೋಗುವ ಹುನ್ನಾರ: ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿ ಮಧ್ಯಂತರ ಚುನಾವಣೆಗೆ ಹೋಗುವ ಹುನ್ನಾರ ಪ್ರತಿಪಕ್ಷ ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿದೆ. ಅವರ ಸಹಕಾರವಿಲ್ಲದೆ ಇದು ಹೀಗೆ ನಡೆಯುತ್ತದೆ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕು.ಇದರಿಂದ ಬಿಜೆಪಿಗೆ ಕೆಟ್ಟ ಹೆಸರು ಬಂದರೆ ಚುನಾವಣೆಯಲ್ಲಿ ನಮಗೆ ಲಾಭವಾಗುತ್ತದೆ ಎಂಬ ಲೆಕ್ಕಚಾರದಲ್ಲಿ ಕಾಂಗ್ರೆಸ್ ಇದೆ. ರಾಜ್ಯದ ಜನತೆ ಇದನ್ನು ಗಮನಿಸಬೇಕೆಂದು ಮನವಿ ಮಾಡಿದರು.
ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೆಲವು ದುಷ್ಟ ಶಕ್ತಿಗಳು ನಾಗರಿಕ ಸಮಾಜದಲ್ಲಿ ಆಗಾಗ್ಗೆ ಕೋಮುಗಲಭೆ ಸೃಷ್ಟಿಸಲು ಹವಣಿಸುತ್ತಿವೆ. ಇದಕ್ಕೆ ರಾಜಕೀಯ ಪಕ್ಷಗಳ ಬೆಂಬಲವೂ ಸಿಗುತ್ತಿದೆ. ಹೀಗಾಗಿ ನಾವು ಏನೇ ಮಾಡಿದರೂ ನಡೆಯುತ್ತದೆ ಎಂಬ ಮನಸ್ಥಿತಿಯಲ್ಲಿದ್ದಾರೆ. ನಮ್ಮ ಸರ್ಕಾರ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.