ಶಿವಮೊಗ್ಗ, ಆ.16- ವೀರ ಸಾವರ್ಕರ್ ಭಾವಚಿತ್ರ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚಾಕು ಇರಿದಿದ್ದ ಪ್ರಕರಣದಲ್ಲಿ ಈಗಾಗಲೇ ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು ಬಂಧಿಸಿದ್ದು, ಸದ್ಯ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಪೊಲೀಸ್ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಚಾಕು ಇರಿತಕ್ಕೊಳಗಾದ ಪ್ರೇಮ್ ಸಿಂಗ್ ಪ್ರಾಣಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಈ ಕೃತ್ಯದಲ್ಲಿ ಭಾಗಿಯಾಗಿರುವುದು ಪಿಎಫ್‍ಐ ಸಂಘಟನೆ ಕಾರ್ಯಕರ್ತರು ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಯಾರೇ ಆಗಲಿ ಶಾಂತಿ ಕದಡುವವರ ವಿರುದ್ಧ ಮುಲಾಜಿಲ್ಲದೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ವಿನಾಃ ಕಾರಣ ಜಿಲ್ಲೆಯಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಡಿಸಬಾರದು. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಏನೇ ಸಮಸ್ಯೆಯಾದರೂ ಮಾತಿನ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂದು ಅವರು ಇದೇ ವೇಳೆ ತಿಳಿಸಿದರು.