ಮೈಸೂರು,ಏ.20- ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ಕೊಲೆಗಾರರನ್ನು ಕೂಡಲೇ ಬಂಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.
ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ :
ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಂದ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.
ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ :
ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು.
ಬಿಜೆಪಿ ಸರ್ಕಾರ ಜನರಿಗೆ ಖಾಲಿ ಚಂಬು ಕೊಟ್ಟಿದೆ :
ಕಾಂಗ್ರೆಸ್ನ ಚಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿನ್ಹೆ ಎಂದು ಬಿಜೆಪಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ಕೊಟ್ಟಿರುವ ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚಂಬು ಕೊಟ್ಟಿದೆ ಎಂದು ತಿಳಿಸುವುದಾಗಿದೆ. ದೇಶದ ಜನರಿಗೆ 15 ಲಕ್ಷ ರೂ. ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿಯಾಯಿತೇ? ರೈತರ ಆದಾಯ ದುಪ್ಪಟ್ಟಾಗಿದೆಯೇ? ಅಚ್ಚೇ ದಿನ್ ಬಂದಿದೆಯೇ? ಯಾವುದೂ ಆಗದಿರುವುದಕ್ಕೆ ಚಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಲಾಗಿದೆ ಎಂದು ತಿಳಿಸಿದರು.