ಬೆಂಗಳೂರು,ಡಿ.10- ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಮೂರು ದಿನಗಳ ಕಾಲ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದ್ದು, ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯಸರ್ಕಾರದ ಅಧಿಕೃತ ಆದೇಶದ ಪ್ರಕಾರ ಇಂದಿನಿಂದ ಡಿ.12 ರವರೆಗೆ ಮೂರು ದಿನ ಶೋಕಾಚರಣೆ ಜಾರಿಯಲ್ಲಿದ್ದು, ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳಿರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ.
ನಿನ್ನೆ ಮಧ್ಯರಾತ್ರಿ 2.30ಕ್ಕೆ ಎಸ್.ಎಂ.ಕೃಷ್ಣ ಅವರು ಇಹಲೋಕ ತ್ಯಜಿಸಿದ್ದು, ನಾಳೆ ಅವರ ಹುಟ್ಟೂರು ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿಸುವುದಾಗಿ ತಿಳಿಸಲಾಗಿದೆ.ಈ ನಡುವೆ ರಾಜ್ಯಸರ್ಕಾರ ತನ್ನೆಲ್ಲಾ ಅಧಿಕೃತ ಕಾರ್ಯಕಲಾಪಗಳನ್ನು ಶೋಕಾಚರಣೆ ಹಿನ್ನೆಲೆಯಲ್ಲಿ ಬದಿಗೊತ್ತಿದೆ. ಡಿ.12ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಡಿ.13 ರ ಸಂಜೆ 4 ಗಂಟೆಗೆ ಮುಂದೂಡಲಾಗಿದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಇಂದು ಮಧ್ಯಾಹ್ನದವರೆಗೂ ಸಂತಾಪ ಸೂಚಕ ಕಲಾಪ ನಡೆಸಿ ನಂತರ ಅಧಿವೇಶನವನ್ನು ಮುಂದೂಡುವ ಸಾಧ್ಯತೆಯಿದೆ.ನಾಳೆ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ರಜೆ ಘೋಷಿಸುವುದಾಗಿ ತಿಳಿಸಿವೆ. ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಅರೆ ಸರ್ಕಾರಿ ಸಂಸ್ಥೆಗಳು, ನಿಗಮ ಮಂಡಳಿಗಳಿಗೂ ರಜೆ ಘೋಷಿಸಲಾಗಿದೆ.
ಅಂತ್ಯಕ್ರಿಯೆಗೆ ಸಕಲ ಸಿದ್ಧತೆ :
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನಾಳೆ ಎಸ್‌ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಜಿಲ್ಲಾ ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಅಂತ್ಯಕ್ರಿಯೆ ನಡೆಯಲಿರುವ ಸ್ಥಳಕ್ಕೆ ಇಂದು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾಧಿಕಾರಿ ಡಾ.ಕುಮಾರ್ ಹಾಗೂ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಈ ಸಂಜೆಯೊಂದಿಗೆ ಮಾತನಾಡಿದ ಎಸ್‌ಪಿ ಬಾಲದಂಡಿಯವರು ಅಂತ್ಯ ಕ್ರಿಯೆಗೆ ಸಾಕಷ್ಟು ಸಂಖ್ಯೆಯಲ್ಲಿ ವಿವಿಐಪಿಗಳು ಹಾಗೂ ಪಕ್ಷಾತೀತವಾಗಿ ರಾಜಕೀಯ ಮುಖಂಡರು ಆಗಮಿಸುವ ಹಿನ್ನಲೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗುತ್ತದೆ ಎಂದು ವಿವರಿಸಿದರು.
ಅಧಿಕಾರಿಗಳು ಸೇರಿದಂತೆ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂಧಿಯನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗುತ್ತದೆ, ಅಲ್ಲದೇ ನೆರೆ ಜಿಲ್ಲೆಗಳಿಂದ ಇಬ್ಬರು ಅಡಿಷನಲ್ ಎಸ್‌ಪಿಗಳೂ ಸೇರಿದಂತೆ 200ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗುವುದು ಎಂದರು. ಸಾರ್ವಜನಿಕ ಅಂತಿಮ ದರ್ಶನಕ್ಕೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಇದೇ ವೇಳೆ ಅವರು ತಿಳಿಸಿದರು.