ಬೆಂಗಳೂರು,ಫೆ.10– ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರಿಂ ಕೋರ್ಟ್ಗೆ ಮೇಲನವಿ ಅರ್ಜಿ ಸಲ್ಲಿಕೆ ಮಾಡುವುದಾಗಿ ಹೇಳಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇದೀಗ ಅರ್ಜಿ ಸಲ್ಲಿಕೆಯಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ.
ಮುಂದಿನ ತಮ ನಿರ್ಧಾರದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲನವಿ ಸಲ್ಲಿಸುವ ಬಗ್ಗೆ ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮೆ ಪರಿಶೀಲನೆ ನಡೆಸಿ ನನ್ನ ಕೆಲವು ಆತೀಯ ವಕೀಲರೊಂದಿಗೆ ಹಿತೈಷಿಗಳೊಂದಿಗೆ ಚರ್ಚೆ ನಡೆಸಿ ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ.
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಮತ್ತಷ್ಟು ಕಾಲ ವಿಳಂಬ ಮಾಡುವ ಬದಲು, ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸಹ ನನ್ನ ಬಳಿ ಇರುವ ಮತ್ತು ಲಭ್ಯವಾಗುವ ಸಾಕ್ಷ್ಯಾಧಾರಗಳನ್ನು ಆಧರಿಸಿ ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪದಿಂದ ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದ್ದರಿಂದ ವಕೀಲರ ಪರೋಕ್ಷ ಸಹಕಾರ ಪಡೆದುಕೊಂಡು, ಅವಶ್ಯಕತೆ ಬಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು ಖುದ್ದಾಗಿ ನಾನೇ ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿ ವಾದ ಮಂಡನೆ ಮಾಡಿ, ಆರೋಪವನ್ನು ಸಾಬೀತು ಪಡಿಸಿ, ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರಯತ್ನಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಲೋಕಾಯುಕ್ತ ಪೂರ್ಣ ತನಿಖಾ ವರದಿ ಸಲ್ಲಿಸಿದ ನಂತರ ಮೇಲನವಿ ಸಲ್ಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ. ಮೇಲನವಿ ಸಲ್ಲಿಸಿ ಸಮಯ ವ್ಯರ್ಥ ಮಾಡುವ ಬದಲು ಆರೋಪಿಗಳಿಗೆ ಶಿಕ್ಷೆ ಕೊಡಿಸುವ ಕಡೆ ಹೆಚ್ಚಿನ ಗಮನ ನೀಡುತ್ತೇನೆ. ಸಿಎಂ ತಪ್ಪು ಮಾಡಿದರೆ ಒಬ್ಬ ಸಾಮಾನ್ಯ ಪ್ರಜೆ ಶಿಕ್ಷೆ ಕೊಡಿಸಬಹುದು ಎಂಬುದನ್ನು ಸಾಬೀತುಪಡಿಸುತ್ತೇನೆ. ನನ್ನ ಬಳಿ ಇರುವ ದಾಖಲೆ-ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ನೀಡುತ್ತೇನೆ ಎಂದು ಹೇಳಿದರು.
ಸಿಎಂ ಪರ ಘಟಾನುಘಟಿ ವಕೀಲರು ಬರುತ್ತಾರೆ, ವಾದ ಮಂಡಿಸುತ್ತಾರೆ. ಅವರ ಮುಂದೆ ನಾನು ವಾದ ಮಂಡನೆ ಮಾಡಬೇಕು. ಸಿಬಿಐಗೆ ವಹಿಸಿ ಅಂತ ಹೋರಾಟ ಮಾಡುವ ಬದಲು ಶಿಕ್ಷೆ ಕೊಡಿಸಲು ಹೋರಾಟ ಮಾಡುತ್ತೇನೆ. ನಾನು ಯಾವುದೇ ನಿರ್ಧಾರ ಮಾಡಿದರೂ ಪರ-ವಿರೋಧ ಚರ್ಚೆಯಾಗುತ್ತದೆ. ನಾನು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ, ನನ್ನ ಗುರಿ ಮುಟ್ಟುತ್ತೇನೆ. ಯಾವುದೇ ಕಾರಣಕ್ಕೂ ಜನ ಅನುಮಾನ ಪಡುವುದು ಬೇಡ. ಕೆಲವೇ ತಿಂಗಳಲ್ಲಿ ಆರೋಪಿಗಳಿಗೆ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಿಸುತ್ತೇನೆ. ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಮುಡಾ ಹಗರಣ ಹಗರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸಲ್ಲಿಸಿದ ಅರ್ಜಿ ಹೈಕೋರ್ಟ್ನಲ್ಲಿ ವಜಾ ಆಗಿತ್ತು. ಇದರಿಂದ ಅರ್ಜಿದಾರ ಸ್ನೇಹಮಯಿ ಕೃಷ್ಣಗೆ ಹಿನ್ನಡೆಯಾಗಿತ್ತು, ಈ ಬಗ್ಗೆ ಮುಂದಿನ ವಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸುತ್ತೇನೆ. ನನಗೆ ಈ ತೀರ್ಪು ಸ್ವಲ್ವ ಹಿನ್ನಡೆಯಾಗಿದೆ. ಆದರೂ ಹೋರಾಟ ಮುಂದುವರೆಸುತ್ತೇನೆ ಎಂದು ಹೈಕೋರ್ಟ್ ತೀರ್ಪು ಬಂದ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಧಾರವಾಡ ಹೈಕೋರ್ಟ್ ಹೇಳಿದ್ದೇನು? :
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ನಿರಾಕರಿಸಿರುವ ಧಾರವಾಡ ಹೈಕೋರ್ಟ್, ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಅಲ್ಲ ಎಂದು ಹೇಳಲು ಆಗಲ್ಲ. ಲೋಕಾಯುಕ್ತ ಪೊಲೀಸ್ ತನಿಖೆಯಲ್ಲಿ ತಾರತಮ್ಯ ಇದೆ ಎಂದು ಹೇಳಲು ಆಧಾರಗಳಿಲ್ಲ. ಹೀಗಾಗಿ ಸಿಬಿಐ ತನಿಖೆಗೆ ಸಲ್ಲಿಸಿರುವ ಅರ್ಜಿ ತಿರಸ್ಕಾರಗೊಳಿಸುವುದಾಗಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪೀಠ ಅಭಿಪ್ರಾಯಪಟ್ಟಿತು. ಈ ಮೂಲಕ ಸಿಎಂ ಸಿದ್ದರಾಮಯ್ಯ ಬಹುತೇಕ ಮುಡಾ ಪ್ರಕರಣದಿಂದ ಪಾರಾಗುವಂತಹ ಸನ್ನಿವೇಶ ಸೃಷ್ಟಿಯಾಗಿದೆ.