ಇಡಿ ವಿಚಾರಣೆಗೆ ಹಾಜರಾದ ಸೋನಿಯಾಗಾಂಧಿ, ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

Social Share

ನವದೆಹಲಿ,ಜು.26- ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಜಾರಿ ನಿರ್ದೇಶನಾಲಯದ ಕಚೇರಿಗೆ ತೆರಳಿ 2ನೇ ದಿನದ ವಿಚಾರಣೆ ಎದುರಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಈ ಮೊದಲು ಜು.21ರಂದು ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆ ನಡೆಸಿತ್ತು. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ ಪ್ರಯುಕ್ತ ಇಂದು 2ನೇ ಬಾರಿ ವಿಚಾರಣೆಗೆ ಹಾಜರಾಗಿದ್ದರು.

ಸೋನಿಯಾ ಪುತ್ರಿ ಪ್ರಿಯಾಂಕ ವಾದ್ರ ಹಾಗೂ ಹಿರಿಯ ನಾಯಕರು ಅವರ ಜೊತೆಯಲ್ಲಿದ್ದರು. ಸೋನಿಯಾ ಗಾಂಧಿ ಅವರ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ರಾಜ್‍ಘಾಟ್‍ನಲ್ಲಿ ಮೌನ ಸತ್ಯಾಗ್ರಹ ನಡೆಸಲು ಮುಂದಾಗಿದ್ದರು. ಆದರೆ ದೆಹಲಿ ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ರಾಷ್ಟ್ರಪತಿ ಭವನ ಚಲೋ ನಡೆಸಿದರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಮಾಣಿಕಂ ಠಾಕೂರ್ ಅವರನ್ನು ಪೊಲೀಸರು ವಿಜಯ್‍ಚೌಕ್ ಬಳಿ ತಡೆದು ಬಂಧಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ನಾವು ಪೊಲೀಸರ ನಿಯಮಗಳನ್ನು ಪಾಲಿಸಿಯೇ ಪ್ರತಿಭಟನೆಗಳನ್ನು ನಡೆಸುತ್ತಿದ್ದೇವೆ. ಆದರೂ ಬಂಧಿಸಲಾಗಿದೆ. ಇದೆಲ್ಲ ಪ್ರಧಾನಿ ನರೇಂದ್ರಮೋದಿ ಮತ್ತು ಅಮಿತ್ ಷಾ ಅವರ ಷಡ್ಯಂತ್ರ. ಪ್ರತಿಪಕ್ಷಗಳ ಇಲ್ಲವಾಗಿಸಲು ಮತ್ತು ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದ್ದಾರೆ.ನಾವು ಹೆದರುವುದಿಲ್ಲ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.

ಇಂದು ದೆಹಲಿಯಲ್ಲಿ ಕಾಂಗ್ರೆಸ್ ಎಐಸಿಸಿ ಕಚೇರಿ ಸೇರಿದಂತೆ ಹಲವು ಕಡೆ ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಕಾಂಗ್ರೆಸಿಗರು ಪಕ್ಷದ ಪ್ರಧಾನ ಕಚೇರಿಯಲ್ಲಿ ಸಮಾವೇಶಗೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Articles You Might Like

Share This Article