ಇಡಿ ವಿಚಾರಣೆ: ಜಿಲ್ಲಾ ಕೇಂದ್ರಗಳಲ್ಲಿ ಮುಂದುವರೆದ ಕಾಂಗ್ರೆಸ್ ಪ್ರತಿಭಟನೆ

Social Share

ಬೆಂಗಳೂರು,ಜು.22- ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಅನುಸರಿಸುತ್ತಿದೆ ಎಂದು ಆರೋಪಿಸಿ ರಾಜ್ಯವೂ ಸೇರಿದಂತೆ ದೇಶಾದ್ಯಂತ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ
ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ನಿನ್ನೆ ಜಾರಿನಿರ್ದೇಶನಾಲಯ ವಿಚಾರಣೆ ನಡೆಸಿದೆ. ಮುಂದಿನ ವಿಚಾರಣೆಗಾಗಿ ಜುಲೈ 25ರಂದು ಹಾಜರಾಗುವಂತೆ ಸಮನ್ಸ್ ನೀಡಿದೆ.

ಈ ಕುರಿತು ನಿನ್ನೆ ರಾಜಭವನ ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ ಕಾಂಗ್ರೆಸಿಗರು ಇಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಕೇಂದ್ರ ಭಾಗಗಳಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪಾದಯಾತ್ರೆ ನಡೆಸುವ ಮೂಲಕ ಡಿಸಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ, ತಳ್ಳಾಟ, ನೂಕಾಟ ನಡೆದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಬ್ಬಳ್ಳಿಯಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದರೆ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಕಾರ್ಯಕರ್ತರ ಜತೆ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತುಮಕೂರಿನಲ್ಲಿ ರಸ್ತೆಯಲ್ಲೇ ಕುಳಿತು ಧರಣಿ ನಡೆಸುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಕೆಪಿಸಿಸಿಯ ಕಾರ್ಯಾಧ್ಯಕ್ಷರು ವಿವಿಧ ಜಿಲ್ಲೆಗಳಿಗೆ ತೆರಳಿ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ.

ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಹಿರಿಯ ನಾಯಕರು, ಚುನಾವಣೆಯ ಅಭ್ಯರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೆಲವು ಕಡೆ ವಾಗ್ವಾದ, ತಳ್ಳಾಟ, ನೂಕಾಟದಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿ ನಿಭಾಯಿಸಲು ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನು ಗುರಿಯಾಗಿರಿಸಿಕೊಂಡು ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸರ್ಕಾರದ ಜನವಿರೋ ನಿಲುವುಗಳನ್ನು ಪ್ರಶ್ನಿಸುವ ನಾಯಕರ ಧ್ವನಿ ಅಡಗಿಸುವ ಪ್ರಯತ್ನ ನಡೆದಿದೆ. ಇದಕ್ಕೆಲ್ಲಾ ಕಾಂಗ್ರೆಸ್ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ನಾಯಕರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ಹಾಗೂ ಕೆಲವು ಭಾಗಗಳಲ್ಲಿ ಕಾರ್ಯಕರ್ತರು ಬ್ಯಾರಿಕೇಡ್‍ಗಳನ್ನು ನೂಕಿ ಮುನ್ನುಗ್ಗುವ ಪ್ರಯತ್ನ ನಡೆಸಿದ್ದಾರೆ. ಇನ್ನು ಕೆಲವು ಕಡೆ ಟೈರ್‍ಗಳಿಗೆ ಬೆಂಕಿ ಹಚ್ಚಿ , ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Articles You Might Like

Share This Article