Friday, November 22, 2024
Homeರಾಜ್ಯಶೀಘ್ರದಲ್ಲೇ ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗಗಳ 150 ಹಾಸ್ಟೆಲ್‌ಗಳ‌ ಆರಂಭ

ಶೀಘ್ರದಲ್ಲೇ ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗಗಳ 150 ಹಾಸ್ಟೆಲ್‌ಗಳ‌ ಆರಂಭ

ಬೆಂಗಳೂರು,ಜು.19- ಶೀಘ್ರದಲ್ಲೇ ರಾಜ್ಯಾದ್ಯಂತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ 150 ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.

ವಿಧಾನಪರಿಷತ್‌ನಲ್ಲಿಂದು ಸದಸ್ಯ ಬಾಬಣ್ಣ ತಳವಾರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 75 ಬಾಲಕಿಯರ ಹಾಗೂ 75 ಬಾಲಕರು ಸೇರಿದಂತೆ ಒಟ್ಟು 150 ವಿದ್ಯಾರ್ಥಿನಿಲಯಗಳನ್ನು ತೆರೆಯಲಾಗುವುದು. ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಘೋಷಣೆ ಮಾಡಿದ್ದರು ಎಂದು ತಿಳಿಸಿದರು.

ಮೈಸೂರು, ಬೆಳಗಾವಿ, ಧಾರವಾಡ ಸೇರಿದಂತೆ ವಿವಿಧ ಶೈಕ್ಷಣಿಕ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮೊದಲು ಜಿಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಬೇಕೆಂಬ ಆಲೋಚನೆ ಇತ್ತು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ತಾಲ್ಲೂಕು ಮಟ್ಟದಲ್ಲೂ ಪ್ರಾರಂಭಿಸಲಾಗುವುದು ಎಂದರು.

ಕಳೆದ ವರ್ಷ 2,28,000 ವಿದ್ಯಾರ್ಥಿಗಳು ಹಿಂದುಳಿದ, ಎಸ್ಸಿ-ಎಸ್ಟಿ ಹಾಸ್ಟೆಲ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ 100 ವಿದ್ಯಾರ್ಥಿಗಳಿರುವ ಕಡೆ 150 ಹಾಗೂ 150 ವಿದ್ಯಾರ್ಥಿಗಳಿರುವ ಹಾಸ್ಟೆಲ್‌ಗಳಲ್ಲಿ 200 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುತ್ತೇವೆ ಎಂದರು.

ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರಗಳನ್ನು ನೀಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಮೊದಲು ಮೂರು ತಿಂಗಳಿಗೊಮೆ ಆಹಾರ ಪದಾರ್ಥಗಳನ್ನು ಪರೀಕ್ಷೆ ಒಳಪಡಿಸಲಾಗುತ್ತಿತ್ತು. ಇನ್ನು ಮುಂದೆ ಪ್ರತಿ ತಿಂಗಳು ಪರೀಕ್ಷೆಗೆ ಒಳಪಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗಳು, ಸಿಇಒಗಳ ಸಭೆ ನಡೆಸಿ ವಿದ್ಯಾರ್ಥಿ ನಿಲಯಗಳಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈವರೆಗೂ ಜಿಲ್ಲಾ ಮಟ್ಟದಲ್ಲಿ ಆಹಾರ ಪದಾರ್ಥಗಳನ್ನು ಖರೀದಿಸಲು ಟೆಂಡರ್‌ ಕರೆಯಲಾಗುತ್ತಿತ್ತು. ಇದು ಟೆಂಡರ್‌ನಲ್ಲಿ ಭಾಗವಹಿಸಿದವರಿಗೆ ಸಿಗುತಿತ್ತು. ಇನ್ನು ಮುಂದೆ ತಾಲ್ಲೂಕು ಮಟ್ಟದಲ್ಲಿ ಟೆಂಡರ್‌ ಕರೆಯಲಾಗುತ್ತದೆ ಎಂದು ವಿವರಿಸಿದರು.

RELATED ARTICLES

Latest News