ಬೆಂಗಳೂರು, ಅ. 6- ಏಷ್ಯನ್ ಗೇಮ್ಸ್ನಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ವಿಧಾನಸೌಧದಲ್ಲಿ ಇಂದು ಅಭಿನಂದಿಸಿದರು.
ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನೀಡಲಾಗುತ್ತಿದ್ದ ನಗದು ಪುರಸ್ಕಾರದ ಮೊತ್ತವನ್ನು ಪರಿಷ್ಕರಿಸಲಾಗಿದ್ದು, ಚಿನ್ನದ ಪದಕ ವಿಜೇತರಿಗೆ 35 ಲಕ್ಷದಿಂದ 1 ಕೋಟಿ ರೂ., ಬೆಳ್ಳಿ ಪದಕ ವಿಜೇತರಿಗೆ 25 ಲಕ್ಷದಿಂದ 75 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 15 ಲಕ್ಷದಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.
ಈ ಬಾರಿ ಎಂಟು ಕ್ರೀಡಾಪಟುಗಳಿಗೆ ಈ ನಗದು ಪುರಸ್ಕಾರ ದೊರೆಯಲಿದ್ದು, ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸಿದ್ದಕ್ಕಾಗಿ ಮತ್ತು ಅವರ ಪದಕ ಸಾಧನೆಗಾಗಿ ನೀಡಲಾಗುವ ನಗದು ಪುರಸ್ಕಾರದ ಜೊತೆಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನವನ್ನೂ ನೀಡಲಾಗುವುದು ಎಂದು ಪರಮೇಶ್ವರ ತಿಳಿಸಿದರು.
ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸಲು ಅರ್ಹತೆ ಪಡೆದು ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ 5 ಲಕ್ಷ ರೂ. ನಗದು ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ. ರಾಜ್ಯದ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುವುದೇ ಮಹತ್ವದ ಸಾಧನೆಯಾಗಿದ್ದು, ಪದಕ ಗಳಿಸಿದವರ ಜೊತೆಗೆ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಎಲ್ಲ ಕ್ರೀಡಾಪಟುಗಳನ್ನೂ ಪ್ರೋತ್ಸಾಹಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪದಕ ವಿಜೇತರಿಗೆ ರಾಜ್ಯ ಸರ್ಕಾರದ ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿಯ ಅವಕಾಶ ಕಲ್ಪಿಸಲಾಗಿದೆ. ಅರ್ಹ ಹಾಗೂ ಆಸಕ್ತ ಪದಕ ವಿಜೇತ ಕ್ರೀಡಾಪಟುಗಳನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ನೇರ ನೇಮಕಾತಿ ಮಾಡಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.
10 ಲಕ್ಷ ರೂ. ಪ್ರೋತ್ಸಾಹಧನ: ಒಲಿಂಪಿಕ್ಸ್ ಯೋಜನೆಯಡಿ 2026-27ನೇ ಸಾಲಿಗೆ ಏಷ್ಯನ್ ಗೇಮ್ಸ್ ಹಾಗೂ ಕಾಮನ್ವೆಲ್ತ್ ಗೇಮ್ಸ್ನ ಪದಕ ವಿಜೇತರ ಪೈಕಿ ಆಯ್ದ ಕ್ರೀಡಾಪಟುಗಳಾದ ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಶ್ರೇಯಾಂಕ ಪಾಟೀಲ್ ಹಾಗೂ ಶಿಲ್ಪಾ ಕೆ.ಎಸ್. ಅವರನ್ನು ಸೇರ್ಪಡೆ ಮಾಡಲಾಗಿದೆ. ಈ ಕ್ರೀಡಾಪಟುಗಳಿಗೆ ಒಲಿಂಪಿಕ್ಸ್ ಸಿದ್ಧತೆ, ತರಬೇತಿ ಹಾಗೂ ಇತರೆ ಅಗತ್ಯಗಳಿಗಾಗಿ ಪ್ರಸಕ್ತ ಸಾಲಿನಲ್ಲಿ ತಲಾ 10 ಲಕ್ಷ ರೂ. ನಗದು ಪ್ರೋತ್ಸಾಹಧನ ನೀಡಲಾಗುವುದು ಎಂದು ಅವರು ಹೇಳಿದರು.
ಸರ್ಕಾರಿ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ: ಸಾಧಕ ಕ್ರೀಡಾಪಟುಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೇರ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ನೀಡಲಾಗಿದೆ. ಈ ಕುರಿತು ಅ. 3ರಂದು ಅಧಿಸೂಚನೆ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ ಎಲ್ಲ ಹಂತದ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
