ಬೆಂಗಳೂರು,ಸೆ.25- ರಾಜ್ಯದಲ್ಲಿ ಆ್ಯಂಬುಲೆನ್ಸ್ ಸೇವೆ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದೆ. ಆದಷ್ಟು ಶೀಘ್ರ ಇದನ್ನು ಸರಿಪಡಿಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯಿಂದ ಜಿವಿಕೆ ಸಂಸ್ಥೆಯಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣ ಆ್ಯಂಬುಲೆನ್ಸ್‍ಗೆ ಬರುವ ದೂರವಾಣಿ ಕರೆಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ನಾನು ಸಂಬಂಧಪಟ್ಟವರೊಂದಿಗೆ ಮಾತುಕತೆ ನಡೆಸಿ ತಕ್ಷಣ ಸಮಸ್ಯೆ ಪರಿಹರಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು.
ಇದನ್ನೂ ಓದಿ : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
ಮದರ್‍ಬೋರ್ಡ್ 15 ವರ್ಷ ಹಳೆಯದಾಗಿರುವುದರಿಂದ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಹೀಗಾಗಿ ಯಾವುದೇ ಕರೆಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ಇದು ಇತ್ಯರ್ಥವಾಗಲಿದೆ ಎಂದು ಭರವಸೆ ನೀಡಿದರು.
2008ರಲ್ಲಿ ಜಿವಿಕೆ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಸುಮಾರು 15 ವರ್ಷವಾಗಿರುವುದರಿಂದ ಮದರ್‍ಬೋರ್ಡ್ ಕೈಕೊಟ್ಟು ತಾಂತ್ರಿಕ ಸಮಸ್ಯೆ ಉಂಟಾಗಿದೆ. ಯಾರೂ ಕೂಡ ಆತಂಕ ಪಡಬೇಕಾದ ಅಗತ್ಯವಿಲ್ಲ. ಎಷ್ಟು ಸಾಧ್ಯವೋ ಅಷ್ಟು ಬೇಗ ಈ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.