ಬೆಂಗಳೂರು,ಮಾ.12-ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ದರಗಳನ್ನು ಮೂಲ ವೇತನದ ಶೇ.38.75ರಿಂದ ಶೇ.42.5ಕ್ಕೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕøತ ತುಟ್ಟಿಭತ್ಯೆಯು ಜನವರಿ 1ರಿಂದ ಪೂರ್ವಾನ್ವಯವಾಗಲಿದೆ. ಪರಿಷ್ಕøತ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಪಾವತಿ ಮಾಡಲಾಗುತ್ತದೆ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ, ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಈ ಪರಿಷ್ಕøತ ತುಟ್ಟಿಭತ್ಯೆ ದರವು ಅನ್ವಯವಾಗಲಿದೆ.
ನಿವೃತ್ತಿ ವೇತನದಾರರಿಗೂ ಜ.1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿದ್ದು, ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಶೇ.38.75ರಿಂದ ಶೇ.42.5ಕ್ಕೆ ಹೆಚ್ಚಿಸಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಯು.ಜಿ.ಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತಿ ವೇತನದಾರರಿಗೂ ಈ ಆದೇಶ ಅನ್ವಯವಾಗಲಿದೆ. ಜಿಲ್ಲ ಪಂಚಾಯ್ತಿಗಳ ಪೂರ್ಣಾವಧಿ ನೌಕರರಿಗೆ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‍ಚಾರ್ಜ್ ನೌಕರರಿಗೂ ಹಾಗೂ ಸರ್ಕಾರದಿಂದ ಸಹಾಯ ಅನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯದಲ್ಲಿ ಕಾಲಿಕ ವೇತನ ಶ್ರೇಣಿಯಲ್ಲಿರುವ ಪೂರ್ಣಾವ ನೌಕರರಿಗೂ ಈ ಆದೇಶ ಅನ್ವಯಿಸಲಿದೆ.
ಆದರೆ ಯು.ಜಿ.ಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‍ಜೆಪಿಸಿ ವೇತನಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸುವುದಾಗಿ ತಿಳಿಸಲಾಗಿದೆ.
ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು ಮಾರ್ಚ್ ತಿಂಗಳ ವೇತನ ಬಟವಾಡೆಗೂ ಮೊದಲು ಪಾವತಿ ಮಾಡುವಂತಿಲ್ಲ. ಈ ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನವೆಂದು ಪರಿಗಣಿಸುವುದಿಲ್ಲ ಎಂದು ಆರ್ಥಿಕ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.