Homeರಾಜ್ಯವಸತಿ ರಹಿತ ಕುಟುಂಬಗಳಿಗೆ 15 ಲಕ್ಷ ಉಚಿತ ನಿವೇಶ, 1 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ...

ವಸತಿ ರಹಿತ ಕುಟುಂಬಗಳಿಗೆ 15 ಲಕ್ಷ ಉಚಿತ ನಿವೇಶ, 1 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಚಾಲನೆ

ಬೆಂಗಳೂರು, ನ.21- ಕರ್ನಾಟಕದಲ್ಲಿ ವಸತಿ ರಹಿತ ಕುಟುಂಬಗಳಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭೂಗ್ಯಾರಂಟಿ ಯೋಜನೆಯಡಿ 15 ಲಕ್ಷ ಉಚಿತ ನಿವೇಶನಗಳನ್ನು ಹಂಚಿಕೆ ಮಾಡಲು ಹಾಗೂ 2026-27ನೇ ಸಾಲಿನಲ್ಲಿ 2,241 ಕೋಟಿ ರೂ.ವೆಚ್ಚದಲ್ಲಿ ಒಂದು ಲಕ್ಷ ಹೊಸ ಮನೆಗಳನ್ನು ನಿರ್ಮಿಸಲು ಚಾಲನೆ ನೀಡಲಾಗಿದೆ.

ಸೂರು ಒದಗಿಸುವ ಯೋಜನೆಯ ಬಗ್ಗೆ ಸರ್ಕಾರ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಜನರಿಗೆ ತಿಳುವಳಿಕೆ ನೀಡುವ ವಿವರಗಳನ್ನು ಪ್ರಕಟಿಸಲಾಗಿದೆ. ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಭೂ ಗ್ಯಾರಂಟಿ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಅದರ ಅನುಷ್ಠಾನಕ್ಕೆ ಅಗತ್ಯ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಐದು ಲಕ್ಷ ನಿವೇಶನಗಳನ್ನು ಅಭಿವೃದ್ಧಿಪಡಿಸಲು 1,000 ಕೋಟಿ ಮೀಸಲಿಡಲು ಉದ್ದೇಶಿಸಲಾಗಿದೆ. ಮಾಜಿ ಸೈನಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ದುರ್ಬಲ ವರ್ಗದವರಿಗೆ ನಿವೇಶನ ಹಂಚಿಕೆಯಲ್ಲಿ ಆದ್ಯತೆ ನೀಡಲಾಗುತ್ತದೆ.

ಇನ್ನು ಒಂದು ಲಕ್ಷ ಮನೆಗಳ ಪೈಕಿ ಗ್ರಾಮೀಣ ಪ್ರದೇಶಕ್ಕೆ 68 ಸಾವಿರ ಹಾಗೂ ನಗರ ಪ್ರದೇಶಕ್ಕೆ 32 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಮನೆ ನಿರ್ಮಾಣದ ಸಹಾಯಧನವನ್ನು ಸಾಮಾನ್ಯ ವರ್ಗದವರಿಗೆ 1.20 ಲಕ್ಷದಿಂದ 2 ಲಕ್ಷಕ್ಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 2 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಅರ್ಹ ಫಲಾನುಭವಿಗಳಿಂದ ನಾಡಕಚೇರಿ, ಗ್ರಾಮ ಒನ್‌, ಕರ್ನಾಟಕ ಒನ್‌ ಸೇರಿದಂತೆ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ ಅರ್ಜಿ ಆಹ್ವಾನಿಸಲು ಉದ್ದೇಶಿಸಲಾಗಿದೆ. ಆಧಾರ್‌ ಆಧರಿತ ಇ-ಕೆವೈಸಿ ಮೂಲಕ ಅರ್ಜಿಗಳ ಪರಿಶೀಲನೆ ನಡೆಯಲಿದ್ದು, ನಿವೇಶನ ನೋಂದಣಿಗೆ ಮುದ್ರಾಂಕ ಮತ್ತು ನೋಂದಣಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ.

RELATED ARTICLES

Latest News