ಬೆಂಗಳೂರು, ಸೆ.8- ನಗರದ ಆರ್.ಎಂ.ಸಿ. ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 19 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರೈತರು, ಕಾರ್ಮಿಕರು ಹಾಗೂ ವರ್ತಕರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಕೆಲವು ಸಾರ್ವಜನಿಕರು ಅಂಗಡಿಗಳಲ್ಲಿ ಬಾಲಕರನ್ನು ಕೆಲಸಕ್ಕೆ ಇರಿಸಿಕೊಂಡಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಬಾಲ ಕಾರ್ಮಿಕರನ್ನು ರಕ್ಷಿಸುವಂತೆ ನೀಡಿದ ಸೂಚನೆಯ ಮೇರೆಗೆ ಪೊಲೀಸ್ ಇಲಾಖೆ ಕಾರ್ಯಾಚರಣೆ ಕೈಗೊಂಡಿದೆ.
ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರು, ಪೊಲೀಸ್ ಇನ್‌ಸ್ಪೆಕ್ಟರ್‌ಗಳು ಹಾಗೂ ಕಾರ್ಮಿಕ ಇಲಾಖೆಯ ಇನ್‌ಸ್ಪೆಕ್ಟರ್‌ಗಳನ್ನು ಒಳಗೊಂಡಂತೆ ಐದು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ತಂಡಗಳು ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ತ್ವರಿತ ಕಾರ್ಯಾಚರಣೆ ನಡೆಸಿ ಬಿಹಾರ ರಾಜ್ಯದ 13 ಮಕ್ಕಳು (12 ಬಾಲಕರು, ಒಬ್ಬ ಬಾಲಕಿ), ಪಶ್ಚಿಮ ಬಂಗಾಳದ ಇಬ್ಬರು, ಉತ್ತರ ಪ್ರದೇಶದ ಇಬ್ಬರು, ರಾಜಸ್ಥಾನ ಹಾಗೂ ಕರ್ನಾಟಕದ ತಲಾ ಒಬ್ಬರು ಸೇರಿದಂತೆ ಒಟ್ಟು 19 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಅಂಗಡಿ ಮಾಲೀಕರ ವಿರುದ್ಧ ಆರ್.ಎಂ.ಸಿ. ಯಾರ್ಡ್ ಪೊಲೀಸ್ ಠಾಣೆಯಲ್ಲಿ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆಯಡಿ ಒಟ್ಟು ನಾಲ್ಕು ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಇದಲ್ಲದೆ, ಅಂಗಡಿ ಮಾಲೀಕರ ವಿರುದ್ಧ ಬಾಲ ಮತ್ತು ಹದಿಹರೆಯದ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986ರ ಅಡಿಯಲ್ಲಿ ಐದು ಪ್ರಕರಣಗಳನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.ಬೀದಿ ಬದಿಯಲ್ಲಿ ಕೆಲಸ ಮಾಡುತ್ತಿದ್ದ 10 ಮಕ್ಕಳನ್ನು ಸಹ ರಕ್ಷಿಸಲಾಗಿದ್ದು, ಮುಂದಿನ ಕ್ರಮಕ್ಕಾಗಿ ಮಕ್ಕಳ ಕಲ್ಯಾಣ ಸಮಿತಿ, ಬೆಂಗಳೂರು ಇವರ ಮುಂದೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಐಪಿಎಸ್, ಜಂಟಿ ಪೊಲೀಸ್ ಆಯುಕ್ತರಾದ ಸಿ. ವಂಶಿಕೃಷ್ಣ, ಐಪಿಎಸ್, ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಬಿ.ಎಸ್. ನೇಮಗೌಡ, ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಯಶವಂತಪುರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರೇಣುಕಾ ಪ್ರಸಾದ್ ಬಿ.ವೈ. ನೇತೃತ್ವದಲ್ಲಿ ನಡೆಸಲಾಗಿದೆ.
ಉತ್ತರ ವಿಭಾಗದ ಎಂಟು ಪೊಲೀಸ್ ಇನ್‌ಸ್ಪೆಕ್ಟರ್‌ಗಳು, ಏಳು ಕಾರ್ಮಿಕ ಇಲಾಖೆ ಇನ್‌ಸ್ಪೆಕ್ಟರ್‌ಗಳು ಹಾಗೂ ಇತರೆ ಅಧಿಕಾರಿ-ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿ 19 ಬಾಲ ಕಾರ್ಮಿಕರ ರಕ್ಷಣೆಯಲ್ಲಿ ಯಶಸ್ವಿಯಾಗಿದ್ದಾರೆ.
