ಶಿವಮೊಗ್ಗ, ಆ.15- ರಾಜ್ಯದ ಯುವಜನರ ಭದ್ರ ಭವಿಷ್ಯ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಗುಣಮಟ್ಟ ಬಲಪಡಿಸಲು 15 ಸಾವಿರ ಶಿಕ್ಷಕರ ನೇರ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಯುವಕರಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಯುವ ಉದ್ಯೋಗ ಸೇತು ಯೋಜನೆಯನ್ನೂ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಸ್ವಾತಂತ್ರ್ಯ ಎಂದರೆ ಕೇವಲ ಧ್ವಜ ಹಾರಿಸುವುದಲ್ಲ. ಪ್ರತಿಯೊಬ್ಬ ಮನುಷ್ಯ ಗೌರವದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗುವುದೇ ನಿಜವಾದ ಸ್ವಾತಂತ್ರ್ಯ. ಬಡತನ, ಹಸಿವು, ಅನಕ್ಷರತೆ, ನಿರುದ್ಯೋಗ ಮತ್ತು ಅನ್ಯಾಯದ ವಿರುದ್ಧ ಹೊಸ ಸ್ವಾತಂತ್ರ್ಯ ಹೋರಾಟ ನಡೆಯಬೇಕು. ಜಾತಿ-ಧರ್ಮದ ಹೆಸರಿನಲ್ಲಿ ಜನರನ್ನು ಬೇರ್ಪಡಿಸುವ ಮನಸ್ಥಿತಿಯ ವಿರುದ್ಧವೂ ಹೋರಾಡಬೇಕಿದೆ ಎಂದು ಮಧು ಬಂಗಾರಪ್ಪ ಕರೆ ನೀಡಿದರು.
ಈಸೂರು ಕೇವಲ ಒಂದು ಗ್ರಾಮವಲ್ಲ, ಗ್ರಾಮೀಣ ಭಾರತದ ಸ್ವಾತಂತ್ರ್ಯ ಹೋರಾಟದ ಬಹುದೊಡ್ಡ ಐತಿಹಾಸಿಕ ತ್ಯಾಗದ ಸಂಕೇತವಾಗಿದೆ. ದೊಡ್ಡ ಸೇನೆ ಅಥವಾ ಶಸ್ತ್ರಾಸ್ತ್ರಗಳಿಲ್ಲದೆ ಧೈರ್ಯ ಮತ್ತು ಸ್ವಾತಂತ್ರ್ಯದ ಹಂಬಲದಿಂದ ಬ್ರಿಟಿಷರ ವಿರುದ್ಧ ಹೋರಾಡಿದ ಜನರ ನೆಲವಾಗಿದೆ ಎಂದು ಅವರು ಸ್ಮರಿಸಿದರು.
ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ರಾಜ್ಯದಲ್ಲಿ 2 ಸಾವಿರಕ್ಕೂ ಹೆಚ್ಚು ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ 11 ಕೆಪಿಎಸ್ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ 59 ಕೆಪಿಎಸ್ ಶಾಲೆಗಳು ಮಂಜೂರಾಗಿವೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ರಾಜ್ಯ ದಾಖಲೆಯ ಫಲಿತಾಂಶ ಸಾಧಿಸಿದೆ ಎಂದು ಸಚಿವರು ತಿಳಿಸಿದರು.
ರೈತರ ಹಿತಾಸಕ್ತಿ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಮಳೆ ಮತ್ತು ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ಹಾನಿ ಪರಿಹಾರ ಹಾಗೂ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಮನೆ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಶಿವಮೊಗ್ಗವನ್ನು ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ. ಇದರಿಂದ ಯುವಕರಿಗೆ ಉದ್ಯೋಗ ಮತ್ತು ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ವೇಗ ದೊರೆಯಲಿದೆ ಎಂದು ಹೇಳಿದರು.
ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಜನಪರ ಕಾಳಜಿಯನ್ನು ಸ್ಮರಿಸಿದ ಸಚಿವರು, “ನಾನು ಬಂಗಾರಪ್ಪನವರ ಮಗ ಎಂಬುದು ಹೆಮ್ಮೆ. ಅದಕ್ಕಿಂತ ದೊಡ್ಡದು ಅದು ಹೊಣೆಗಾರಿಕೆ” ಎಂದು ಹೇಳಿದರು.
ಜನಪರ, ಬಡವರ ಪರ ಹಾಗೂ ಶೋಷಿತರ ಪರ ಸೇವೆ ಸಲ್ಲಿಸುವ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿ ತಮ್ಮ ಮೇಲಿದೆ ಎಂದರು.
