ಬೆಂಗಳೂರು, ಮಾ.6- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬಜೆಟ್ ಭಾಷಣದಲ್ಲಿ ಅಜೀಂ ಪ್ರೇಮ್‌ಜೀ ಫೌಂಢೇಷನ್ ವತಿಯಿಂದ 2025-26 ಸಾಲಿನಲ್ಲಿ ಉನ್ನತ ಶಿಕ್ಷಣಕ್ಕಾಗಿ 37 ಸಾವಿರ ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯಸರ್ಕಾರದಿಂದ ದೀಪಿಕಾ ವಿದ್ಯಾರ್ಥಿ ವೇತನ ಯೋಜನೆಯಡಿ ನೀಡಲಾಗುವುದೆಂದು ತಿಳಿಸಿದ್ದಾರೆ.
ಹೆಸರಘಟ್ಟದ ಸರ್ಕಾರಿ ಚಲನ ಚಿತ್ರ ಮತ್ತು ದೂರದರ್ಶನ ಸಂಸ್ಥೆಗೆ ಎಂಜಿನಿಯರಿಂಗ್ ಹಾಗೂ ಸಿನಿಮಾಟೋಗ್ರಫಿ ಕೋರ್ಸ್‌ಗಳಿಗೆ ಅಗತ್ಯ ಇರುವ ಆಧುನಿಕ ಉಪಕರಣಗಳನ್ನು ನೀಡಲಾಗುವುದೆಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡೌ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುವ ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯವನ್ನು ತಡೆಯಲು ರೋಹಿತ್ ವೇಮುಲ ಕಾಯ್ದೆಯನ್ನು ಜಾರಿಗೆ ತರಲಾಗುವುದು.
ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ. ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸಲಾಗುವುದುದೆಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಎನ್‌ಸಿಸಿ ಉತ್ತೇಜಿಸುವ ಸಲುವಾಗಿ ಮುಂದಿನ 2 ವರ್ಷಗಳಲ್ಲಿ 10 ಸಾವಿರ ಕೆಡೆಟ್‌ಗಳನ್ನು ಹೆಚ್ಚಿಸುವ ಸಂಕಲ್ಪ ಮಾಡಲಾಗಿದೆ ಮತ್ತು ಬಸವ ಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲು 25 ಎಕರೆ ಜಮೀನು ನೀಡಲಾಗುವುದೆಂದು ಸಿಎಂ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
