ಬೆಳಗಾವಿ,ಡಿ.17- ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ 32 ಸಾರ್ವಜನಿಕ ವಿಶ್ವವಿದ್ಯಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, 2997 ಬೋಧಕ ಹಾಗೂ 6295 ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಪಿ ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿ.ಟಿ.ರವಿ ಅವರು, ವಿಧಾನಪರಿಷತ್ ಕಲಾಪದಲ್ಲಿ ರಾಜ್ಯದಲ್ಲಿರುವ ಸರ್ಕಾರಿ ವಿಶ್ವವಿದ್ಯಾಲಯಗಳ ಕುರಿತು ತಾನು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆಂದು ತಿಳಿಸಿದ್ದಾರೆ.
ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ವಿಷಯವನ್ನು ಒಳಗೊಂಡಂತೆ ವಿಶ್ವವಿದ್ಯಾಲಯಗಳ ಆರ್ಥಿಕ ಪರಿಸ್ಥಿತಿಗಳ ಬಗ್ಗೆ ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡುವಂತೆ ಸರ್ಕಾರದಿಂದ ಉಪಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಹೇಳಿದ್ದಾರೆ.
ಕುಲಪತಿಗಳ ನೇಮಕ ಮಾಡಲು ಶೋಧನಾ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯಲ್ಲಿ ಈಗಾಗಲೇ ಅನೇಕ ಸಭೆಗಳನ್ನು ನಡೆಸಲಾಗಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ ಎಂದು ಸಿ.ಟಿ.ರವಿ ಮಾಹಿತಿ ಹಂಚಿಕೊಂಡಿದ್ದಾರೆ.
