ಬೆಂಗಳೂರು,ನ.15- ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಇರಬೇಕೆಂಬುದು ಹಲವರ ಅಭಿಪ್ರಾಯವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಪಕ್ಷಗಳ ನಡುವೆ ಹೊಂದಾಣಿಕೆ ಇರಬೇಕು ಎಂಬ ಅಭಿಪ್ರಾಯ ಹಲವರಲ್ಲಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಒಂದೊಂದು ರೀತಿಯ ರಾಜಕೀಯ ವಾತಾವರಣವಿದೆ. ಹೀಗಾಗಿ ಸಮನ್ವಯ ಸಮಿತಿ ಸಭೆ ನಡೆಸಿ, ಕಾರ್ಯಕರ್ತರ ಅಭಿಪ್ರಾಯಗಳನ್ನೂ ಚರ್ಚಿಸಲಾಗುವುದು. ಅಂತಿಮವಾಗಿ ಕೇಂದ್ರದ ಬಿಜೆಪಿ ನಾಯಕತ್ವ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದರು.
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ, ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಈ ಬಗ್ಗೆ ಪಕ್ಷ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ ಎಂದರು.
ಈ ಬಗ್ಗೆ ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು. ಅಂತಿಮವಾಗಿ ಕೇಂದ್ರದ ನಾಯಕರು ಜೆಡಿಎಸ್ ಅನ್ನು ಮನವೊಲಿಸಿ ಬಿಜೆಪಿಗೇ ಹಿರಿಯೂರು ಟಿಕೆಟ್ ನೀಡುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದ್ದು, ರಾಜ್ಯದ ಜನರಿಗೆ ಮೋಸ ಮಾಡುತ್ತಿದೆ. ತಮಿಳುನಾಡು ಸರ್ಕಾರ ಹಾಗೂ ಅಲ್ಲಿನ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಮೇಕೆದಾಟು ಯೋಜನೆ ಆಗಬೇಕಾದರೆ ಬಿಜೆಪಿಯ ಸರ್ಕಾರವೇ ಬರಬೇಕು. ಕಾಂಗ್ರೆಸ್‌ನವರು ಸುಮನೆ ಬೊಗಳೆ ಬಿಡುತ್ತಾ ನಾಟಕ ಆಡುತ್ತಿದ್ದಾರೆ. ವೋಟ್‌ಗಾಗಿ ಹೇಳುವುದೊಂದು, ಮಾಡುವುದೊಂದು ಎಂದು ವಾಗ್ದಾಳಿ ನಡೆಸಿದರು.
ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷರೇ ಮೇಕೆದಾಟು ಯೋಜನೆ ಕಾನೂನುಬಾಹಿರ ಎಂದು ಹೇಳಿದ್ದಾರೆ. ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪಷ್ಟವಾಗಿ ಮಾತನಾಡಬೇಕು ಎಂದು ಆಗ್ರಹಿಸಿದ ಅವರು, ಎಲ್ಲಿದ್ದೀಯಪ್ಪ ರಾಹುಲ್ ಗಾಂಧಿ? ಅಲ್ಲಿ ಅಂಡಮಾನ್‌ಗೆ ಹೋಗಿ ಮರ ತಬ್ಬಿಕೊಳ್ಳುತ್ತೀರಲ್ಲ, ಮೇಕೆದಾಟನ್ನೂ ಒಮೆ ತಬ್ಬಿಕೊಳ್ಳಿ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಪಕ್ಷ ಮೇಕೆದಾಟು ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ರಾಜ್ಯದ ಜನರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಆರೋಪಿಸಿದ ಅಶೋಕ್, ಹಳೇ ಮೈಸೂರು ಭಾಗದ ಜನರು ಇದನ್ನು ಸುಮನೆ ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಬಿಸಾಕುತ್ತಾರೆ ಎಂದು ಹೇಳಿದರು.
