Homeರಾಜ್ಯರಾಜ್ಯದಲ್ಲಿ 3 ದಿನಗಳ ಕಾಲ ಮತ್ತೊಂದು ಸುತ್ತಿನ ಮಳೆ ಸಾಧ್ಯತೆ

ರಾಜ್ಯದಲ್ಲಿ 3 ದಿನಗಳ ಕಾಲ ಮತ್ತೊಂದು ಸುತ್ತಿನ ಮಳೆ ಸಾಧ್ಯತೆ

ಬೆಂಗಳೂರು, ಅ.5-ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಕಳೆದ ನಾಲ್ಕೈದು ದಿನಗಳಿಂದ ದುರ್ಬಲಗೊಂಡಿದ ಮುಂಗಾರು ಮಳೆ ಚೇತರಿಕೆಯಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.

ನೈರುತ್ಯ ಮುಂಗಾರು ಮರಳುವಿಕೆ ಹಾಗೂ ಈಶಾನ್ಯ ಹಿಂಗಾರು ಮಳೆ ಆರಂಭವಾಗುವ ಪರ್ವ ಕಾಲದಲ್ಲಿ ವಾತಾವರಣದಲ್ಲಿ ಬದಲಾವಣೆಗಳಾಗುವುದು ಸಹಜ. ಮಳೆಯಾಗಲು ಪೂರಕವಾಗದ ವಾತವರಣ ಸೃಷ್ಟಿಯಾಗಲಿದ್ದು, ಈ ಸಂದರ್ಭದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರಲಿದೆ ಎಂಬುದು ಹವಾಮಾನ ತಜ್ಞರ ಅಭಿಪ್ರಾಯ.

ಕರಾವಳಿ ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ನಾಳೆ ಈ ಜಿಲ್ಲೆಗಳ ಜೊತೆಗೆ ಚಾಮರಾಜನಗರ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೂ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.

ಅ.7ರಂದು ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ಇದ್ದು, ಉಳಿದಂತೆ ರಾಜ್ಯದ ಇತರೆ ಜಿಲ್ಲೆಗಳಿಗೆ ಮಳೆಯ ಮುನ್ನೆಚ್ಚರಿಕೆಗಳಿಲ್ಲ. ಆಗಸ್ಟ್‌, ಸೆಪ್ಟೆಂಬರ್‌ನಂತೆ ಅಕ್ಟೋಬರ್‌ನಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿದ್ದು, ಬರದ ತೀವ್ರತೆ ಹೆಚ್ಚತೊಡಗಿದೆ. ಆದರೂ ಕೆಲವೆಡೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತಿದ್ದು, ರೈತರು ಸಮಾಧಾನ ಪಡುವಂತಾಗಿದೆ.

RELATED ARTICLES
spot_img

Latest News