Homeರಾಜ್ಯಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿ ರಂಗನಾಥ ನಾಮಪತ್ರ ಸಲ್ಲಿಕೆ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿ ರಂಗನಾಥ ನಾಮಪತ್ರ ಸಲ್ಲಿಕೆ

ಬೆಂಗಳೂರು, ಅ.5-ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ ಅವರು ಇಂದು ನಾಮಪತ್ರ ಸಲ್ಲಿಸಿದರು. ಶಾಂತಿನಗರದಲ್ಲಿರುವ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ರಂಗನಾಥ ಅವರು ಇಂದು ಮಧ್ಯಾಹ್ನ ಜೆಡಿಎಸ್‌‍ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಎನ್‌ಡಿಎ ನಾಯಕರು ಸಾಥ್‌ ನೀಡಿದರು.

ಕೇಂದ್ರ ಸಚಿವ ಹಾಗೂ ಜೆಡಿಎಸ್‌‍ ರಾಜ್ಯಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ, ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಂಸದರಾದ ಡಾ. ಸಿ.ಎನ್‌.ಮಂಜುನಾಥ್‌, ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ರಂಗನಾಥ್‌ ಅವರೊಂದಿಗೆ ರಾಜ್ಯಸಭಾ ಸದಸ್ಯ ಜಗ್ಗೇಶ್‌, ಶಾಸಕರಾದ ಎಂ.ಕೃಷ್ಣಪ್ಪ, ಸುರೇಶ್‌ಗೌಡ, ಮುನಿರತ್ನ, ರಾಮಮೂರ್ತಿ, ಉದಯ ಗರುಡಾಚಾರ್‌, ಟಿ.ಎ.ಶರವಣ ಸೇರಿದಂತೆ ಉಭಯ ಪಕ್ಷಗಳ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಕೆಂಗೆಲ್‌ ಹನುಮಂತಯ್ಯ ರಸ್ತೆಯ ಲಾಲ್‌ ಬಾಗ್‌ ಗೇಟ್‌ ಬಳಿ ಸಮಾವೇಶಗೊಂಡು ಅಲ್ಲಿಂದ ಪ್ರಾದೇಶಿಕ ಆಯುಕ್ತರ ಕಚೇರಿವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದರು.

ಅಕ್ಟೋಬರ್‌ 23 ರಂದು ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಸ್ಪರ್ಧಿಸಿದರೆ, ಈಶಾನ್ಯ ಶಿಕ್ಷಕರ, ಪಶ್ಚಿಮ ಪದವೀಧರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಯ ನಂತರ ಎನ್‌ಡಿಎ ನಾಯಕರು ಖಾಸಗಿ ಹೋಟೆಲ್‌ನಲ್ಲಿ ಸಭೆ ಸೇರಿ ಪ್ರಸ್ತುತ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದರು. ಇದುವರೆಗೂ ಚುನಾವಣೆಗೆ ನಡೆದಿರುವ ಸಿದ್ಧತೆ ಮತ್ತು ಮುಂದೆ ಕೈಗೊಳ್ಳಬೇಕಿರುವ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಎನ್‌ಡಿಎ ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರಗಳ ಬಗ್ಗೆ ಗಂಭೀರ ಚರ್ಚೆ ನಡೆಸಿ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.ನಾಲ್ಕು ಕ್ಷೇತ್ರಗಳ ಎನ್‌ಡಿಎ ಅಭ್ಯರ್ಥಿಗಳು ಗೆಲುವಿಗೆ ಉಭಯ ಪಕ್ಷಗಳ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಶ್ರಮ ವಹಿಸಿ ಕೆಲಸ ಮಾಡಲು ನಿರ್ದೇಶನ ನೀಡಲಾಗಿದೆ.

RELATED ARTICLES
spot_img

Latest News