Homeರಾಜ್ಯಚಳಿ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರ ಒಗ್ಗಟ್ಟು ಪ್ರದರ್ಶನ : 3ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಚಳಿ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರ ಒಗ್ಗಟ್ಟು ಪ್ರದರ್ಶನ : 3ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಬೆಂಗಳೂರು, ನ.19- ಮಾಸಿಕ 15 ಸಾವಿರ ರೂ. ಗೌರವಧನ ನಿಗದಿಪಡಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ನಮ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದು ಕುಳಿತಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳ ಮೂಲೆ ಮೂಲೆಗಳಿಂದ ನೂರಾರು ಆಶಾ ಕಾರ್ಯಕರ್ತೆಯರು ರಾಜಧಾನಿಗೆ ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಹಗಲು-ರಾತ್ರಿ ಎನ್ನದೆ, ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನಾ ಸ್ಥಳದಲ್ಲೇ ಉಳಿದು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುತ್ತಿದ್ದಾರೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನರ ಆರೋಗ್ಯ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ತಮ್ಮ ದುಡಿಮೆಗೆ ತಕ್ಕ ಗೌರವಧನ ದೊರೆಯಬೇಕು ಎಂದು ಆಗ್ರಹಿಸಿದ್ದಾರೆ.

ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳು, ತಾಯಿ ಮತ್ತು ಮಕ್ಕಳ ಆರೋಗ್ಯದ ಕಾಳಜಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರೂ, ಜೀವನ ನಿರ್ವಹಣೆಗೆ ಅನುಕೂಲವಾಗುವಷ್ಟು ಗೌರವಧನ ದೊರೆಯುತ್ತಿಲ್ಲ ಎಂಬುದು ಅವರ ಅಳಲಾಗಿದೆ.ಮಾಸಿಕ 15 ಸಾವಿರ ರೂ.ಗಳ ಗೌರವಧನ ನಿಗದಿಪಡಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.

ಈ ಬೇಡಿಕೆ ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ರಾಜ್ಯದ ಎಲ್ಲ ಜಿಲ್ಲೆಗಳ ಕಾರ್ಯಕರ್ತೆಯರು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದಾರೆ.ಮೂರನೇ ದಿನವೂ ಪ್ರತಿಭಟನೆ ಮುಂದುವರಿದಿದ್ದು, ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ಕೇವಲ ಭರವಸೆಗಳಿಗೆ ತೃಪ್ತರಾಗುವುದಿಲ್ಲ;
ಬೇಡಿಕೆ ಈಡೇರಿಸುವ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು ಎಂಬುದು ಅವರ ಆಗ್ರಹವಾಗಿದೆ.ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯುವವರೆಗೂ ಅಹೋರಾತ್ರಿ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಸುವುದಾಗಿ ಆಶಾ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ, ಈ ಹೋರಾಟಕ್ಕೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

RELATED ARTICLES

Latest News