Homeರಾಜ್ಯಪಟ್ಟು ಬಿಡದ ಆಶಾ ಕಾರ್ಯಕರ್ತೆಯರು : 7ನೇ ದಿನಕ್ಕೆ ಕಾಲಿಟ್ಟ ಹೋರಾಟ, ಸ್ಪಂದಿಸದ ಸರ್ಕಾರ

ಪಟ್ಟು ಬಿಡದ ಆಶಾ ಕಾರ್ಯಕರ್ತೆಯರು : 7ನೇ ದಿನಕ್ಕೆ ಕಾಲಿಟ್ಟ ಹೋರಾಟ, ಸ್ಪಂದಿಸದ ಸರ್ಕಾರ

ಬೆಂಗಳೂರು, ನ.23- ಆಶಾ ಕಾರ್ಯಕರ್ತೆಯರ ಹೋರಾಟ ತೀವ್ರಗೊಂಡಿದೆ. ಗೌರವಧನ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ನಡೆಸುತ್ತಿರುವ ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದೆ.

ಸರ್ಕಾರದ ಮನವಿಗೆ ಜಗ್ಗದೆ ಕೊರೆಯುವ ಚಳಿಯಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಹೋರಾಟ ಮುಂದುವರಿಸಿರುವುದರಿಂದ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದೆ. ಇಂದು ಕೂಡ ವಿಭಿನ್ನ ರೀತಿಯ ಹೋರಾಟ ನಡೆಸಿದ್ದಾರೆ. ಸ್ವಾತಂತ್ರ್ಯ ಉದ್ಯಾನವನದ ಸುತ್ತ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು.

ಆರೋಗ್ಯ ಸಚಿವ ಯು.ಟಿ. ಖಾದರ್‌ ಎರಡು ಬಾರಿ ನಡೆಸಿದ ಸಂಧಾನವೂ ವಿಫಲವಾಗಿದೆ. ಖುದ್ದು ಮುಖ್ಯಮಂತ್ರಿಯವರೇ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರೂ ಆಶಾ ಕಾರ್ಯಕರ್ತೆಯರು ಬೇಡಿಕೆ ಈಡೇರುವವರೆಗೂ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ತಾರಾಬಳಗದ ಬೆಂಬಲ ಸಿಕ್ಕಿದೆ. ಹಲವು ಚಲನಚಿತ್ರ ನಟಿಯರು ಹೋರಾಟದ ಸ್ಥಳಕ್ಕೆ ತೆರಳಿ ಅವರಿಗೆ ಬೆಂಬಲ ಸೂಚಿಸಿದ್ದಾರೆ.ನಿನ್ನೆ ಮಾಜಿ ಸಂಸದೆ, ಹಿರಿಯ ಚಿತ್ರನಟಿ ಸುಮಲತಾ ಅವರು ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕೆಂದು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದಾರೆ. ಇದಲ್ಲದೆ, ನಟಿ ಕಾರುಣ್ಯ ಅವರೂ ಆಶಾ ಕಾರ್ಯಕರ್ತೆಯರ ಬೆಂಬಲಕ್ಕೆ ನಿಂತಿದ್ದಾರೆ.

ಇನ್ನು ಹಲವು ನಟಿಯರು ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ. ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್‌ ಹಾಗೂ ವಿವಿಧ ಸಂಘಟನೆಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು, ಮಾನವೀಯ ನೆಲೆಗಟ್ಟಿನಲ್ಲಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿವೆ.

ಏಳು ದಿನವಲ್ಲ, 70 ದಿನವಾದರೂ ಬೇಡಿಕೆ ಈಡೇರುವವರೆಗೂ ಈ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಕುಳಿತಿದ್ದಾರೆ. ಮಕ್ಕಳು ಹಾಗೂ ಅವಲಂಬಿತರನ್ನು ಬಿಟ್ಟು ಕಳೆದ ಒಂದು ವಾರದಿಂದ ಬೀದಿಯಲ್ಲಿ ಕನಿಷ್ಠ ಸೌಕರ್ಯಗಳಿಲ್ಲದೆ ಸಾವಿರಾರು ಮಹಿಳೆಯರು ಪ್ರತಿಭಟನೆ ನಡೆಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂಬುದು ಪ್ರತಿಭಟನಾಕಾರರ ಆರೋಪವಾಗಿದೆ. ಈ ಎಲ್ಲದರ ನಡುವೆ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಇದು ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

RELATED ARTICLES

Latest News