ಬೆಂಗಳೂರು, ಆ.14- ಸಚಿವ ಸಂಪುಟದಿಂದ ಬಿ. ನಾಗೇಂದ್ರ ಅವರನ್ನು ತಕ್ಷಣವೇ ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ವಿಧಾನಸೌಧದ ಆವರಣದಲ್ಲಿರುವ ತಾಯಿ ಭುವನೇಶ್ವರಿ ಪ್ರತಿಮೆ ಮುಂದೆ ಬೃಹತ್ ಪ್ರತಿಭಟನೆ ನಡೆಸಿತು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿ, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲದಿದ್ದರೆ ಸದನವನ್ನು ಸುಗಮವಾಗಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನ್ಯಾಯಾಲಯದ ನಿರ್ದೇಶನವನ್ನು ಉಲ್ಲಂಘಿಸಿ ನಾಗೇಂದ್ರ ಅವರು ದೆಹಲಿಗೆ ತೆರಳಿ ಬಂದಿರುವುದು ಸ್ಪಷ್ಟವಾಗಿದೆ. ಕರ್ನಾಟಕ ಬಿಟ್ಟು ನ್ಯಾಯಾಲಯದ ಅನುಮತಿ ಇಲ್ಲದೆ ಹೊರರಾಜ್ಯಗಳಿಗೆ ತೆರಳುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿತ್ತು. ಆದರೆ ಸಚಿವ ಸಂಪುಟ ವಿಸ್ತರಣೆ ವೇಳೆ ಅವರು ನ್ಯಾಯಾಲಯದ ಅನುಮತಿಯನ್ನು ಧಿಕ್ಕರಿಸಿ ದೆಹಲಿಗೆ ತೆರಳಿ ಬಂದಿದ್ದಾರೆ. ಈ ವಿಚಾರ ಮಾಧ್ಯಮಗಳಲ್ಲಿ ಬಹಿರಂಗಗೊಂಡಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಆರೋಪಿ ಸ್ಥಾನದಲ್ಲಿರುವ ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ ಬಿಜೆಪಿ ನಾಯಕರು, ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭ್ರಷ್ಟಾಚಾರದ ಆರೋಪ ಹೊತ್ತಿರುವ ನಾಗೇಂದ್ರ ಅವರನ್ನು ತಕ್ಷಣವೇ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.
