Homeರಾಜ್ಯ"ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ..?" ಎಂಬ ತಮ್ಮ ಹೇಳಿಕೆಗೆ ಸಿ.ಟಿ.ರವಿ ಸ್ಪಷ್ಟನೆ

“ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ..?” ಎಂಬ ತಮ್ಮ ಹೇಳಿಕೆಗೆ ಸಿ.ಟಿ.ರವಿ ಸ್ಪಷ್ಟನೆ

ಚಿಕ್ಕಮಗಳೂರು, ಜು.26- ಮುಸ್ಲಿಂ ಸಮಾಜದ ವಿರುದ್ಧ ತಾವು ಎಂದಿಗೂ ಟೀಕಿಸಿ ಮಾತನಾಡಿಲ್ಲ, ದುಷ್ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಮಾತ್ರ ಧ್ವನಿ ಎತ್ತಿದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ರವಿ ಸಿ.ಟಿ ಸ್ಪಷ್ಟಪಡಿಸಿದ್ದಾರೆ. ತಮ್ಮ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಕುರಿತು ತಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಸರ್ಕಾರದ ನಡವಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಗಂಭೀರವಾಗಿ ಸ್ಪಂದಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಇದೇ ರೀತಿಯ ಕ್ರಮವನ್ನು ಕರ್ನಾಟಕದಲ್ಲಿ ಕೆಪಿಎಸ್‌‍ಸಿ ಸೇರಿದಂತೆ ವಿವಿಧ ನೇಮಕಾತಿ ಹಗರಣಗಳಲ್ಲಿಯೂ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ನೀಟ್‌ ಹಗರಣದಲ್ಲಿ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದಾರೆ, ಸಿಬಿಐ ತನಿಖೆ ನಡೆದಿದೆ, 13 ಮಂದಿಯನ್ನು ಬಂಧಿಸಲಾಗಿದೆ ಮತ್ತು ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಉಲ್ಲೇಖಿಸಿದ ಅವರು, ಪ್ರಶ್ನೆಪತ್ರಿಕೆಗಳನ್ನು ಭಾರತೀಯ ವಾಯುಪಡೆಯ ವಿಮಾನದ ಮೂಲಕ ಸುರಕ್ಷಿತವಾಗಿ ರಾಜ್ಯಗಳಿಗೆ ರವಾನಿಸಿರುವುದು ಕೇಂದ್ರ ಸರ್ಕಾರದ ಗಂಭೀರತೆಯನ್ನು ತೋರಿಸುತ್ತದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ರೂಪಿಸಲು ಮುಂದಾಗಿದ್ದಾರೆ. 10 ಕೋಟಿವರೆಗೆ ದಂಡ ಹಾಗೂ ತಪ್ಪಿತಸ್ಥರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತಹ ತಿದ್ದುಪಡಿಗಳನ್ನು ತರಲಾಗುವುದು ಎಂದು ಘೋಷಿಸಿರುವುದನ್ನೂ ಅವರು ಉಲ್ಲೇಖಿಸಿದರು.

ಕರ್ನಾಟಕದಲ್ಲಿ ಕೆಪಿಎಸ್‌‍ಸಿ ಅಕ್ರಮಗಳ ಬಗ್ಗೆ ಕಾಂಗ್ರೆಸ್‌‍ ಸರ್ಕಾರ ಇದೇ ರೀತಿಯ ಗಂಭೀರತೆ ತೋರಿಸಿಲ್ಲ ಎಂದು ಆರೋಪಿಸಿದ ರವಿ, ಪಶುವೈದ್ಯಕೀಯ ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ 80 ಲಕ್ಷದಿಂದ 1 ಕೋಟಿವರೆಗೆ ಹಣದ ಬೇಡಿಕೆ ಇಟ್ಟಿರುವ ಆರೋಪಗಳು ಕೇಳಿ ಬಂದಿದ್ದರೂ ಪ್ರಕರಣ ದಾಖಲಿಸಿಲ್ಲ ಎಂದು ದೂರಿದರು.

ಕಳೆದ ಎರಡೂವರೆ ವರ್ಷಗಳಲ್ಲಿ ಕೆಪಿಎಸ್‌‍ಸಿ ಮೂಲಕ ಸುಮಾರು 3 ಸಾವಿರಕ್ಕೂ ಹೆಚ್ಚು ನೇಮಕಾತಿಗಳು ನಡೆದಿದ್ದು, ಒಂದು ಹುದ್ದೆಯಲ್ಲೇ ಅಕ್ರಮ ನಡೆದಿದ್ದರೆ ಉಳಿದ ನೇಮಕಾತಿಗಳ ಬಗ್ಗೆಯೂ ಅನುಮಾನ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌‍ಐಟಿ) ರಚಿಸಿ ಸಂಪೂರ್ಣ ಕೆಪಿಎಸ್‌‍ಸಿ ಹಗರಣದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನೀಟ್‌ ಪರೀಕ್ಷೆ ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಆದರೆ ರಾಜ್ಯದಲ್ಲಿ ನಡೆದ ವಿವಿಧ ಶಿಕ್ಷಣ ಸಂಬಂಧಿತ ಆರೋಪಗಳಲ್ಲಿ ಯಾರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು.

ಎಸ್‌‍ಎಸ್‌‍ಎಲ್‌ಸಿ, ಸಿಇಟಿ ಹಾಗೂ ಸ್ಪರ್ಧಾತಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿಯೂ ಸರ್ಕಾರ ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ರವಿ, ತಾವು ಯಾವುದೇ ಸಂದರ್ಭದಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. ನೀಟ್‌ ಪ್ರತಿಭಟನೆಯ ಸಂದರ್ಭದಲ್ಲಿ ಜೀಪಿನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಉಲ್ಲೇಖಿಸಿ ಮಾತನಾಡಿದ್ದೇನೆ. ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದೇ ಹೊರತು ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಎಂದರು.

ಜಿಹಾದಿಗಳು, ಭಯೋತ್ಪಾದಕರು ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಕ್ರಿಮಿನಲ್‌ಗಳ ವಿರುದ್ಧ ಮಾತನಾಡಿದ್ದೇನೆ. ಮುಸ್ಲಿಂ ಸಮಾಜದ ವಿರುದ್ಧ ಒಂದೇ ಒಂದು ಪದವೂ ಬಳಸಿಲ್ಲ ಎಂದು ಅವರು ಪುನರುಚ್ಚರಿಸಿದರು. ಕೆಲವು ಮಾಧ್ಯಮಗಳು ತಮ್ಮ ಹೇಳಿಕೆಯನ್ನು ತಿರುಚಿ ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿರುವಂತೆ ಪ್ರಸಾರ ಮಾಡಿವೆ. ಇದರಿಂದ ತಪ್ಪು ಸಂದೇಶ ಹೋಗಿದ್ದು, ಅಂತಹ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬೆದರಿಸುವ ಪ್ರಯತ್ನ ನಡೆದರೂ ಸತ್ಯವನ್ನು ಹೇಳುವುದನ್ನು ನಿಲ್ಲಿಸುವುದಿಲ್ಲ. ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ ನಡೆಯುವ ಭಯೋತ್ಪಾದನೆ, ಜಿಹಾದಿ ಚಟುವಟಿಕೆಗಳು ಹಾಗೂ ರಾಷ್ಟ್ರವಿರೋಧಿ ಶಕ್ತಿಗಳ ವಿರುದ್ಧ ಮುಂದೆಯೂ ಧ್ವನಿ ಎತ್ತುತ್ತೇನೆ. ಬಂಧನಕ್ಕೆ ತಾವು ಹೆದರುವುದಿಲ್ಲ. ಅಗತ್ಯವಿದ್ದರೆ ನ್ಯಾಯಾಲಯದಲ್ಲೂ ಮತ್ತು ಜನತಾ ನ್ಯಾಯಾಲಯದಲ್ಲೂ ತಮ ನಿಲುವನ್ನು ಸಮರ್ಥಿಸಿಕೊಳ್ಳುವುದಾಗಿ ತಿಳಿಸಿದರು.

ವೈಚಾರಿಕವಾಗಿ ಎದುರಿಸಲು ಸಾಧ್ಯವಾಗದ ಕಾರಣ ವ್ಯಕ್ತಿತ್ವ ಹರಣ ಮಾಡುವ ಪ್ರಯತ್ನ ನಡೆಯುತ್ತಿದೆ. ತಮ ಬಗ್ಗೆ ಅವಹೇಳನಕಾರಿ ಹಾಗೂ ಸುಳ್ಳು ಪ್ರಚಾರ ನಡೆಸಿದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್‌. ದೇವರಾಜ್‌ ಶೆಟ್ಟಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್‌.ಸಿ. ಕಲರುಡಪ್ಪ, ಜಿಲ್ಲಾ ಬಿಜೆಪಿ ವಕ್ತಾರ ಎಚ್‌.ಎಸ್‌‍. ಪುಟ್ಟಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES
spot_img

Latest News