ಬೆಂಗಳೂರು, ಅ.15- ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಸ್ಟಿಂಗ್ ಆಪರೇಷನ್ ಜಾಲವನ್ನು ತನಿಖೆ ನಡೆಸಲು ಎಸ್ ಐ ಟಿ ರಚಿಸುವ ಕುರಿತು ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲಾಗಿ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ನೀತಿ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎನ್ನಲಾದ ಕುಟುಕು ಕಾರ್ಯಾಚರಣೆ ಮತ್ತು ನಕಲಿ ದೃಶ್ಯಾವಳಿಗಳ ವಿವಾದ ಪ್ರಮುಖವಾಗಿ ಚರ್ಚೆಗೆ ಬಂದಿದೆ. ಈ ಪ್ರಕರಣದ ಹಿಂದೆ ನಡೆದಿರುವ ಸಂಚು ಹಾಗೂ ಸಂಬಂಧಪಟ್ಟ ವಿಚಾರಗಳ ಕುರಿತು ಸಮಗ್ರ ತನಿಖೆ ನಡೆಸುವ ಸಲುವಾಗಿ ವಿಶೇಷ ತನಿಖಾ ತಂಡ ರಚಿಸುವ ಕುರಿತು ರ್ಚೆಯಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಕ್ರಮಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ರಾಜ್ಯದಲ್ಲಿ ಹೆಚ್ಚಿಸಲಾದ ಮೀಸಲಾತಿ ಪ್ರಮಾಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿರುವುದರಿಂದ, ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲನವಿ ಸಲ್ಲಿಸುವ ಮೂಲಕ ಅವಕಾಶ ವಂಚಿತ ಸಮುದಾಯಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ.
ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕರ್ನಾಟಕ ನಾಗರಿಕ ವಿಮಾನಯಾನ ನೀತಿ-2026ಕ್ಕೆ ಸಂಪುಟ ಸಭೆ ಅನುಮೋದನೆ ನೀಡುವ ಸಾಧ್ಯತೆ ಇದೆ. ವಿಮಾನಯಾನ ಕ್ಷೇತ್ರದ ಅಭಿವೃದ್ಧಿ, ಸಂಪರ್ಕ ವ್ಯವಸ್ಥೆಯ ಸುಧಾರಣೆ ಹಾಗೂ ರಾಜ್ಯದಲ್ಲಿ ವಿಮಾನಯಾನ ಮೂಲಸೌಕರ್ಯ ವಿಸ್ತರಣೆಗೆ ಈ ನೀತಿ ನೆರವಾಗುವ ನಿರೀಕ್ಷೆಯಿದೆ.
ಮೈಸೂರು ಜಿಲ್ಲೆಯ ಇಮಾವು ಸಮೀಪ 160 ಎಕರೆ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಿಸುವ ಯೋಜನೆಗೂ ಸಂಪುಟದಲ್ಲಿ ಚರ್ಚೆಯಗುವ ಸಾಧ್ಯತೆ ಇದೆ. ಈ ಯೋಜನೆಗೆ 729.43 ಕೋಟಿ ಅನುದಾನ ಒದಗಿಸುವ ಪ್ರಸ್ತಾವನೆ ಇದೆ.ಚಿತ್ರರಂಗಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಚಲನಚಿತ್ರ ನಿರ್ಮಾಣ ಚಟುವಟಿಕೆಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.
ಶೃಂಗೇರಿ ಕ್ಷೇತ್ರದಲ್ಲಿ ತುಂಗಾ ನದಿಗೆ ಅಡ್ಡಲಾಗಿ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ 83 ಕೋಟಿ ಮಂಜೂರು ಮಾಡುವ ಸಾಧ್ಯತೆ ಇದೆ. ಈ ಯೋಜನೆಯಿಂದ ಸ್ಥಳೀಯ ನೀರಾವರಿ ಹಾಗೂ ಜಲಸಂಪನೂಲ ನಿರ್ವಹಣೆಗೆ ನೆರವಾಗುವ ನಿರೀಕ್ಷೆಯಿದೆ.
ಬೆಂಗಳೂರು ನಗರದ ಯಶವಂತಪುರ ಮತ್ತು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳಲ್ಲಿನ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸುವುದು, ಕುಡಿಯುವ ನೀರು ಪೂರೈಕೆ ಮತ್ತು ಆರೋಗ್ಯ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ವಿವಿಧ ಯೋಜನೆಗಳಿಗೂ ಅನುಮೋದನೆ ನೀಡುವ ಸಾಧ್ಯತೆ ಇದೆ.
ವಿಶೇಷವಾಗಿ ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಸಾರ್ವಜನಿಕ ಸೌಲಭ್ಯಗಳ ಸುಧಾರಣೆಗೆ ಒತ್ತು ನೀಡಲಾಗಿದೆ. ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ಮೂಲಸೌಕರ್ಯ ವಿಸ್ತರಣೆ ಮತ್ತು ವಿವಾದಾತ್ಮಕ ವಿಷಯಗಳ ಕುರಿತು ಕಾನೂನು ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗಿದೆ.
