ಬೆಂಗಳೂರು, ಜೂ. 11- ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಾಯಕರ ನಡುವೆ ಔಪಚಾರಿಕ ಚರ್ಚೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ಎರಡು ದಿನಗಳಿಂದಲೂ ದೆಹಲಿಯಲ್ಲೇ ಇದ್ದಾರೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಕೂಡ ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದಾರೆ.ಸಂಜೆ ಮುಖ್ಯಮಂತ್ರಿಯವರು ಹೈಕಮಾಂಡ್ ನಾಯಕರ ಜೊತೆ ಮತ್ತೊಂದು ಸುತ್ತಿನ ಚರ್ಚೆ ನಡೆಸುವ ಸಾಧ್ಯತೆ ಇದೆ.
ನಿನ್ನೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರ ಜೊತೆ ಡಿ.ಕೆ.ಶಿವಕುಮಾರ್ ಮಹತ್ವದ ಮಾತುಕತೆ ನಡೆಸಿದರು. ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಮತ್ತಿತರರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಶಾಸಕರ ಲಾಬಿ:
ಈ ನಡುವೆ ದೆಹಲಿಯಲ್ಲಿ ರಾಜ್ಯದ ಮೂವರು ನಾಯಕರು ಬೀಡು ಬಿಟ್ಟಿದ್ದು, ಅವರ ಮನವೊಲಿಸಲು ರಾಜ್ಯದ ಕಾಂಗ್ರೆಸ್ ನಾಯಕರ ದಂಡೇ ನೆರೆದಿದೆ. ಕೆ.ಷಡಕ್ಷರಿ, ಟಿ.ಬಿ.ಜಯಚಂದ್ರ ಸೇರಿದಂತೆ ಹಲವು ಶಾಸಕರು ದೆಹಲಿಯಲ್ಲೇ ಇದ್ದು, ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿದ್ದಾರೆ. ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಒತ್ತಡ ಕೂಡ ಕೇಳಿ ಬರುತ್ತಿದೆ.
ಈ ಮೊದಲು ಮತಚೋರಿ ಹಗರಣದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಹೇಳಿಕೆಗೆ ವ್ಯತಿರಿಕ್ತವಾಗಿ ಮಾತನಾಡಿ ಸಂಪುಟದಿಂದ ವಜಾಗೊಂಡಿದ್ದ ಕೆ.ಎನ್.ರಾಜಣ್ಣ ಅವರ ಪುತ್ರ ರಾಜೇಂದ್ರ ರಾಜಣ್ಣ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ತಮ ಕುಟುಂಬಕ್ಕೆ ಯಾರಿಗಾದರೂ ಸಚಿವ ಸ್ಥಾನ ನೀಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದ ಶಾಸಕ ಕೆ.ಷಡಕ್ಷರಿ ದೆಹಲಿಯಲ್ಲೇ ಉಳಿದು ವರಿಷ್ಠರನ್ನು ಭೇಟಿ ಮಾಡುವ ಸಂದರ್ಭದಲ್ಲಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊದಲ ಹಂತದ ಸಂಪುಟ ರಚನೆಯಲ್ಲಿ 14 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ ಬಾಕಿಯಿರುವ 20 ಸ್ಥಾನಗಳಿಗೆ ಸಚಿವರನ್ನು ನೇಮಿಸಬೇಕಿದೆ. ಅದೇ ರೀತಿ ಸುಮಾರು 80ಕ್ಕೂ ನಿಗಮ-ಮಂಡಳಿಗಳ ಅಧ್ಯಕ್ಷರ ಅವಧಿ ಮುಕ್ತಾಯವಾಗಿದ್ದು, ಎರಡನೇ ಅವಧಿಗೆ ಅಧ್ಯಕ್ಷರಾಗುವವರು ಯಾರು? ಎಂದು ನಿರ್ಧರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್, ವರಿಷ್ಠರೊಂದಿಗಿನ ಚರ್ಚೆ ಮಹತ್ವ ಪಡೆದುಕೊಂಡಿದೆ.
ಸಚಿವ ಸಂಪುಟ ಆದಷ್ಟು ಶೀಘ್ರ ವಿಸ್ತರಣೆಯಾಗಬೇಕು. ಇದಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳಲು ಅನುಮತಿಸುವಂತೆ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಬಳಿ ಮನವಿ ಮಾಡಿಕೊಂಡಿದ್ದಾರೆ.
