Homeರಾಜ್ಯಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು..? : ಇಲ್ಲಿದೆ ಹೈಲೈಟ್ಸ್

ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು..? : ಇಲ್ಲಿದೆ ಹೈಲೈಟ್ಸ್

CM D.K. Shivakumar's Independence Day speech highlights

ಬೆಂಗಳೂರು, ಆ.15- ಕರ್ನಾಟಕದ ಆರ್ಥಿಕತೆಯನ್ನು 3 ಟ್ರಿಲಿಯನ್ ಡಾಲರ್‌ಗೆ ಹೆಚ್ಚಿಸುವುದು, 6ನೇ ತರಗತಿಯಿಂದಲೇ ಎಐ ಆಧರಿತ ಶಿಕ್ಷಣದ ಪರಿಚಯ, ರಾಜಧಾನಿ ಬೆಂಗಳೂರಿನ ಸುರಕ್ಷತೆಗೆ 5 ಪೊಲೀಸ್‌ ಆಯುಕ್ತಾಲಯಗಳ ರಚನೆ, ಒಂದು ಲಕ್ಷ ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಮಹತ್ವಾಕಾಂಕ್ಷಿ ಘೋಷಣೆಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಇಂದು ನಾಡಿನ ಜನರ ಮುಂದಿಟ್ಟಿದ್ದಾರೆ.

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಅವರು ನಾಡಿನ ಸಮಗ್ರ ಅಭಿವೃದ್ಧಿಯ ಕುರಿತ ತಮ್ಮ ಕನಸುಗಳನ್ನು ಹಂಚಿಕೊಂಡರು. ಕೃಷಿ, ಆರೋಗ್ಯ, ಜಲಸಂಪನ್ಮೂಲ, ಮೂಲಸೌಕರ್ಯ, ರಸ್ತೆ ಅಭಿವೃದ್ಧಿ, ಕೈಗಾರಿಕೆ, ಉದ್ಯೋಗ ಸೃಷ್ಟಿ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಯ ಕುರಿತಂತೆ ಮುಖ್ಯಮಂತ್ರಿಯವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.

ಪ್ರಜಾ ಸೇವೆ ಇಲಾಖೆಯನ್ನು ಸೃಷ್ಟಿಸಲಾಗಿದ್ದು, ಜನರ ಕುಂದುಕೊರತೆಗಳನ್ನು ಮೊದಲು ಜಿಲ್ಲಾ ಮಟ್ಟದಲ್ಲಿ, ಬಳಿಕ ಹೋಬಳಿ ಹಾಗೂ ಜಿಲ್ಲಾ ಪಂಚಾಯಿತಿ ಮಟ್ಟದಲ್ಲೂ ಆಲಿಸಲಾಗುವುದು ಎಂದು ಹೇಳಿದ್ದಾರೆ.ಬರ ಪರಿಸ್ಥಿತಿಯನ್ನು ಎದುರಿಸಲು ತಮ್ಮ ಸರ್ಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇಕೆದಾಟು ಯೋಜನೆಯನ್ನು ಪ್ರಾರಂಭಿಸುತ್ತೇವೆ. ಕೆರೆಕಟ್ಟೆಗಳನ್ನು ತುಂಬಿಸಲು ಕ್ರಮ ಕೈಗೊಂಡಿದ್ದೇವೆ. ಜನರ ನೀರಿನ ಬವಣೆಯನ್ನು ನೀಗಿಸಲಾಗುವುದು. ಅಂತರ್ಜಲ ಹೆಚ್ಚಿಸಲು ಹೊಸ ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದ್ದಾರೆ.

ಭಾರತದಲ್ಲೇ ಕರ್ನಾಟಕ ಬಲವಾದ ಆರ್ಥಿಕ ಶಕ್ತಿಯಾಗಿದೆ. ತಲಾದಾಯ 4.33 ಲಕ್ಷ ರೂ. ತಲುಪಿದೆ. ರಾಷ್ಟ್ರೀಯ ಸರಾಸರಿಗಿಂತಲೂ ಇದು ದುಪ್ಪಟ್ಟಾಗಿದೆ. 2047ರ ವೇಳೆಗೆ 3 ಟ್ರಿಲಿಯನ್ ಡಾಲರ್‌ ಎಂದರೆ 320 ಲಕ್ಷ ಕೋಟಿ ರೂ.ಗಳಿಗೆ ಆರ್ಥಿಕತೆಯನ್ನು ಹೆಚ್ಚಿಸುವ ಗುರಿ ಹೊಂದಿರುವುದಾಗಿ ಘೋಷಿಸಿದರು.

ಯುವ ಕರ್ನಾಟಕ-ನವ ಭಾರತ ತಮ್ಮ ಧ್ಯೇಯವಾಗಿದೆ. ಪರೀಕ್ಷಾ ಪದ್ಧತಿಯಲ್ಲಿ ವೈಜ್ಞಾನಿಕ ಬದಲಾವಣೆ ತರಲು ಪರಿಣಿತ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದ್ದು, ಎರಡು ತಿಂಗಳಲ್ಲಿ ವರದಿ ಪಡೆದು ದೇಶಕ್ಕೆ ಮಾದರಿಯಾಗುವ ಪರೀಕ್ಷಾ ಕ್ರಮಗಳನ್ನು ಜಾರಿ ಮಾಡುವುದಾಗಿ ಭರವಸೆ ನೀಡಿದರು.

ನಮ್ಮ ವಿದ್ಯಾರ್ಥಿಗಳು ಜಾಗತಿಕ ಮಟ್ಟದ ಸ್ಪರ್ಧೆಗೆ ಸಜ್ಜುಗೊಳ್ಳುವಂತೆ ಮಾಡಲು ಎಲ್ಲಾ ಶಾಲೆಗಳಲ್ಲಿ 6ನೇ ತರಗತಿಯಿಂದಲೇ ಕೃತಕ ಬುದ್ಧಿಮತ್ತೆ (ಎಐ) ಶಿಕ್ಷಣವನ್ನು ಪರಿಚಯಿಸಲಾಗುತ್ತಿದೆ. ಅದಕ್ಕಾಗಿ ‘ಎಐ ಅಕ್ಷರ ಅಭಿಯಾನ’ ಮತ್ತು ‘ಕೋಡಿಂಗ್ ಗುರುಕುಲ’ ಎಂಬ ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಪ್ರಕಟಿಸಿದರು.

ಎಐ ವಿಶ್ವವಿದ್ಯಾಲಯ ಹಾಗೂ ಎಐ ಹಬ್‌ಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈವರೆಗೂ 6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸಲಾಗಿದೆ. 10 ಸಾವಿರ ಭಾರತ ಜೋಡೋ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ವಿವರಿಸಿದರು.

ರಾಜಧಾನಿ ಬೆಂಗಳೂರಿನ ಜನರಿಗೆ ಸುರಕ್ಷತೆ ಒದಗಿಸಲು ಮಹತ್ವದ ಕ್ರಮ ಕೈಗೊಳ್ಳಲಾಗುತ್ತಿದೆ. ಬಿಬಿಎಂಪಿಯನ್ನು ಈಗಾಗಲೇ ಗ್ರೇಟರ್‌ ಬೆಂಗಳೂರು ಪ್ರಾಧಿಕಾರವನ್ನಾಗಿ ರೂಪಿಸಿ 5 ಪಾಲಿಕೆಗಳನ್ನು ರಚಿಸಲಾಗಿದೆ. ಅದೇ ರೀತಿ ಮತ್ತೊಂದು ಮಹತ್ವದ ಕ್ರಮವಾಗಿ ಬೆಂಗಳೂರಿನಲ್ಲಿ 5 ಪೊಲೀಸ್‌ ಆಯುಕ್ತಾಲಯಗಳನ್ನು ರಚಿಸಲಾಗುವುದು. ಅಗತ್ಯ ಇರುವ ಕಡೆ ಹೊಸ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಲಾಗುವುದು. ಈ ಮೂಲಕ ಜನರ ಭದ್ರತೆಗೆ ಆದ್ಯತೆ ನೀಡುತ್ತಿರುವುದಾಗಿ ತಿಳಿಸಿದರು.

ಬೆಂಗಳೂರಿನ ಜನ ಭಯಮುಕ್ತ ವಾತಾವರಣದಲ್ಲಿ ಬದುಕುವಂತಹ ಪರಿಸರ ನಿರ್ಮಿಸಲು ರೌಡಿ ಪ್ರತಿಬಂಧಕ ದಳಗಳನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ.ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮತ್ತು ಸಂಚಾರಿ ಪೊಲೀಸರ ನಡುವೆ ಸಮನ್ವಯತೆ ಮೂಲಕ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಉದ್ಯೋಗ ಆಕಾಂಕ್ಷಿಗಳಿಗಾಗಿ ‘ಮುಖ್ಯಮಂತ್ರಿ ಉದ್ಯೋಗ ಸಂಕಲ್ಪ’ ಆರಂಭಿಸಲಾಗುತ್ತಿದ್ದು, ಇದರ ಅಡಿ 72 ಸಾವಿರ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು.

ಮುಂದಿನ ದಿನಗಳಲ್ಲಿ ಖಾಸಗಿ ಕ್ಷೇತ್ರಗಳಲ್ಲೂ ‘ಯುವ ಉದ್ಯೋಗ ಸೇತು’, ‘ಉದ್ಯೋಗ ನಿಧಿ’ ಎಂಬ ಎರಡು ಹೊಸ ಯೋಜನೆಗಳನ್ನು ಆರಂಭಿಸಲಾಗುತ್ತದೆ.ರಾಜ್ಯದಲ್ಲಿ ಅತ್ಯಂತ ಹಿಂದುಳಿದ 10 ತಾಲ್ಲೂಕುಗಳಲ್ಲಿ ಹೊಸ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲಾಗುವುದು. ಹೊಸ ಉದ್ಯೋಗಕ್ಕೆ ಪ್ರತಿ ತಿಂಗಳು ಸರ್ಕಾರವೇ 25 ಸಾವಿರ ರೂ. ಪ್ರೋತ್ಸಾಹಧನ ನೀಡಲಿದೆ. ಇದು 2 ವರ್ಷಗಳ ಕಾಲ ಜಾರಿಯಲ್ಲಿದ್ದು, ಅಂದಾಜು 1 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಬೆಂಗಳೂರು ಹೊರತುಪಡಿಸಿ ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು ಮತ್ತು ಮೈಸೂರಿನಲ್ಲಿ ಐದು ಜಾಗತಿಕ ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ದೊಡ್ಡಬಳ್ಳಾಪುರದಲ್ಲಿ ಸುಧಾರಿತ ಉತ್ಪಾದನಾ ಕೈಗಾರಿಕಾ ಸಮೂಹವನ್ನು ಸ್ಥಾಪಿಸಲಾಗುವುದು.

ಈಗಾಗಲೇ ಈ ಯೋಜನೆಯಡಿ 20 ಸಾವಿರ ಕೋಟಿ ರೂ.ಹೂಡಿಕೆಗೆ ಬದ್ಧತೆ ವ್ಯಕ್ತವಾಗಿದ್ದು, ಸುಮಾರು ಒಂದು ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮುಖ್ಯಮಂತ್ರಿ ತಿಳಿಸಿದರು.ಕರ್ನಾಟಕ ಇಂದು ಭಾರತದ ಆರ್ಥಿಕ ಬದಲಾವಣೆಗೆ ನಾಯಕತ್ವ ನೀಡುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 134 ಲಕ್ಷ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ 945 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ 112 ಲಕ್ಷ ಕೋಟಿ ರೂಪಾಯಿ ಮೊತ್ತದ ವಿದೇಶಿ ಬಂಡವಾಳ ನೇರ ಹೂಡಿಕೆಯನ್ನು ಆಕರ್ಷಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಜನರಿಗೆ ಆಸ್ತಿ ಮಾಲೀಕತ್ವದ ಗೊಂದಲದಿಂದ ಮುಕ್ತಿ ನೀಡಲು ಆರನೇ ಗ್ಯಾರಂಟಿಯಾಗಿ ಭೂ-ಗ್ಯಾರಂಟಿ ಯೋಜನೆಯನ್ನು ಆರಂಭಿಸಲಾಗಿದೆ. ಇ-ಖಾತಾ ವ್ಯವಸ್ಥೆಯ ಮೂಲಕ ಆಸ್ತಿ ದಾಖಲೆಗಳನ್ನು ಡಿಜಿಟಲ್‌ ರೂಪಕ್ಕೆ ತರಲಾಗಿದೆ ಎಂದರು.

ಯುವಜನರು ಉದ್ಯೋಗಿಗಳಾಗಬೇಕು, ರೈತರು ಸಮೃದ್ಧರಾಗಬೇಕು, ಮಹಿಳೆಯರು ಸ್ವಾವಲಂಬಿಗಳಾಗಬೇಕು, ಮಕ್ಕಳು ವಿದ್ಯಾವಂತರಾಗಬೇಕು, ಕಾರ್ಮಿಕರು ಗೌರವದಿಂದ ಬದುಕಬೇಕು ಹಾಗೂ ಹಿರಿಯ ನಾಗರಿಕರ ಬದುಕು ಸುರಕ್ಷಿತವಾಗಿರಬೇಕು ಎಂಬುದು ಸರ್ಕಾರದ ಕಾರ್ಯಕ್ರಮಗಳ ಗುರಿ ಮತ್ತು ಬದ್ಧತೆಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ನೆರವು ನೀಡುವ ಉದ್ದೇಶದಿಂದ ಸಹಾಯ ಹಸ್ತ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಒಂದರಿಂದ ಹತ್ತನೇ ತರಗತಿವರೆಗೆ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ಪ್ರವೇಶದಲ್ಲಿ ಈಗಿರುವ ಶೇ.15ರ ಗ್ರಾಮೀಣ ಮೀಸಲಾತಿಯೊಳಗೆ ಶೇ.7.5ರಷ್ಟು ಮೀಸಲಾತಿ ನೀಡಲಾಗುವುದು. ಇದರಿಂದ ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಗುಣಮಟ್ಟದ ವೃತ್ತಿಪರ ಉನ್ನತ ಶಿಕ್ಷಣದ ಅವಕಾಶಗಳು ಗ್ರಾಮೀಣ ವಿದ್ಯಾರ್ಥಿಗಳಿಗೆ ಮತ್ತಷ್ಟು ವಿಸ್ತರಿಸಲಿವೆ ಎಂದು ಹೇಳಿದರು.

ಆರೋಗ್ಯ ಕ್ಷೇತ್ರ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ನಿರಂತರವಾಗಿ ಬಲಪಡಿಸಿದ ಪರಿಣಾಮ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಶೇ.19ರಷ್ಟು ಇಳಿಕೆಯಾಗಿದೆ. ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟಲು ಅರ್ಹ ಬಾಲಕಿಯರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಜಲಭದ್ರತೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಈ ವರ್ಷವೇ 16 ಸಾವಿರ ಕೋಟಿ ರೂಪಾಯಿ ಮೊತ್ತದ 112 ಪ್ರಮುಖ ಜಲಸಂಪನೂಲ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಲಾಗುತ್ತಿದ್ದು, ನವೆಂಬರ್‌ ವೇಳೆಗೆ ತುಮಕೂರು ಜಿಲ್ಲೆಗೆ ನೀರು ತಲುಪಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕ ಹಿಂದೆಂದೂ ಕಂಡಿರದ ಪ್ರಮಾಣದಲ್ಲಿ ಮೂಲಸೌಕರ್ಯಗಳನ್ನು ನಿರ್ಮಿಸಲಾಗುತ್ತಿದೆ. ಕಳೆದ ಒಂದು ವರ್ಷದಲ್ಲೇ 1,663 ಕಿಲೋಮೀಟರ್‌ ರಾಜ್ಯ ಹೆದ್ದಾರಿಗಳು, 3,000 ಕಿಲೋಮೀಟರ್‌ ಪ್ರಮುಖ ಜಿಲ್ಲಾ ರಸ್ತೆಗಳು ಹಾಗೂ 125 ಹೊಸ ಸೇತುವೆಗಳನ್ನು ನಿರ್ಮಿಸಲಾಗಿದೆ. ಗ್ರಾಮಗಳು, ಪಟ್ಟಣಗಳು ಮತ್ತು ಮಾರುಕಟ್ಟೆಗಳು ಹಿಂದೆಂದಿಗಿಂತಲೂ ಉತ್ತಮವಾಗಿ ಸಂಪರ್ಕಗೊಂಡಿವೆ ಎಂದರು.

ಪ್ರಗತಿಪಥ ಯೋಜನೆಯಡಿ 5,200 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ 7,100 ಕಿಲೋಮೀಟರ್‌ ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಕಲ್ಯಾಣಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದಲ್ಲಿ 1,150 ಕಿಲೋಮೀಟರ್‌ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಕೃಷಿ ನಮ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಬೆಳೆ ವಿಮಾ ಯೋಜನೆಯಡಿ 12.35 ಲಕ್ಷ ರೈತರಿಗೆ 1,300 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಈ ಮುಂಗಾರಿನಲ್ಲಿ ದಾಖಲೆಯ 25 ಲಕ್ಷ ರೈತರು ಬೆಳೆ ವಿಮಾ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಎರಡು ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ವಿಸ್ತರಿಸಲಾಗಿದ್ದು, 184 ಆಧುನಿಕ ಕೊಯ್ಲು ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.

ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗೆ ಅಡಿಪಾಯ ಹಾಕಿದ ಗ್ಯಾರಂಟಿ ಯೋಜನೆಗಳು

ಬೆಂಗಳೂರು, ಆ.15- ಗ್ಯಾರಂಟಿ ಯೋಜನೆಗಳು ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗೆ ಅಡಿಪಾಯ ಹಾಕಿದ್ದು, ಜನರ ಮೇಲಿನ ಬಂಡವಾಳವಾಗಿ ಪರಿಣಮಿಸಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕ ಮಾದರಿ ಎಂದೇ ಗುರುತಿಸಿಕೊಂಡಿರುವ ಈ ಯೋಜನೆಗಳನ್ನು ಇಡೀ ದೇಶವೇ ಅನುಸರಿಸುತ್ತಿದೆ. ಪ್ರತಿಯೊಂದು ಕುಟುಂಬಕ್ಕೂ ಭದ್ರತೆ, ಪ್ರತಿಯೊಬ್ಬ ನಾಗರಿಕನಿಗೂ ಗೌರವ ಹಾಗೂ ಯುವಜನರಿಗೆ ಅವಕಾಶ ಕಲ್ಪಿಸುವುದು ತಮ್ಮ ಸರ್ಕಾರದ ಮೂಲ ಉದ್ದೇಶವಾಗಿದೆ ಎಂದರು.

ಗೃಹಲಕ್ಷ್ಮಿ ಯೋಜನೆಯಡಿ 1.28 ಕೋಟಿ ಮಹಿಳೆಯರಿಗೆ ಪ್ರತಿತಿಂಗಳು 2 ಸಾವಿರ ರೂ. ನೀಡಲಾಗುತ್ತಿದ್ದು, ಇದುವರೆಗೆ 77 ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಯಾವುದೇ ಮಧ್ಯಸ್ಥಿಕೆ ಇಲ್ಲದೆ ನೇರವಾಗಿ ಮಹಿಳೆಯರ ಖಾತೆಗಳಿಗೆ ವರ್ಗಾಯಿಸಲಾಗಿದೆ. ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಆರನೇ ವರದಿಯ ಪ್ರಕಾರ, ಕರ್ನಾಟಕದಲ್ಲಿ ವಿವಾಹಿತ ಮಹಿಳೆಯರು ಎದುರಿಸುವ ಕೌಟುಂಬಿಕ ದೌರ್ಜನ್ಯದ ಪ್ರಮಾಣ ಶೇ.44ರಿಂದ ಶೇ.14ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದರು.

ಶಕ್ತಿ ಯೋಜನೆಯಡಿ ರಾಜ್ಯದ 3.5 ಕೋಟಿ ಮಹಿಳೆಯರು ಸುಮಾರು 796 ಕೋಟಿ ಬಾರಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ ಮೂರು ವರ್ಷಗಳಲ್ಲಿ ಸರ್ಕಾರ 15 ಸಾವಿರ ಕೋಟಿಗೂ ಅಧಿಕ ವೆಚ್ಚ ಮಾಡಿದೆ. ಗೃಹಜ್ಯೋತಿ ಯೋಜನೆಯಡಿ 1.65 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್‌ ಸೌಲಭ್ಯ ದೊರೆಯುತ್ತಿದ್ದು, ಇದರಿಂದ ಬಡ ಕುಟುಂಬಗಳ ಆರ್ಥಿಕ ಹೊರೆಯೂ ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಸೀಮಿತವಾಗಿಲ್ಲ. ನೆಮ್ಮದಿಯ ನಾಳಿನ ಕರ್ನಾಟಕ ನಿರ್ಮಾಣಕ್ಕಾಗಿ ದೂರದೃಷ್ಟಿಯ ಅಭಿವೃದ್ಧಿಯ ಹೊಸ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯಡಿ ಸುಮಾರು ನಾಲ್ಕು ಲಕ್ಷ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಪದವೀಧರರಿಗೆ 1,200 ಕೋಟಿ ರೂ. ನೆರವು ನೀಡಲಾಗಿದೆ ಎಂದು ಹೇಳಿದರು.

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಒಂದೂವರೆ ಲಕ್ಷ ಕೋಟಿ ರೂ. ಮೊತ್ತದ ವಿವಿಧ ಮೂಲಸೌಕರ್ಯ ಕಾಮಗಾರಿ

ಬೆಂಗಳೂರು, ಆ.15- ಕರ್ನಾಟಕದ ಆರ್ಥಿಕತೆಯ ಎಂಜಿನ್‌ ಆಗಿರುವ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸುಮಾರು ಒಂದೂವರೆ ಲಕ್ಷ ಕೋಟಿ ರೂ. ಮೊತ್ತದ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಗೌರವ ರಕ್ಷೆ ಸ್ವೀಕರಿಸಿ ಅವರು ಭಾಷಣ ಮಾಡಿದರು. ಮೂರನೇ ಹಂತದ ಮೆಟ್ರೋ ಕಾಮಗಾರಿ ಪೂರ್ಣಗೊಂಡ ಬಳಿಕ ಬೆಂಗಳೂರಿನ ಮೆಟ್ರೋ ಜಾಲ 220 ಕಿ.ಮೀ.ಗೆ ವಿಸ್ತರಣೆಯಾಗಲಿದೆ. ಈ ಮೂಲಕ ನಮ್ಮ ಮೆಟ್ರೋ ದೇಶದ ಎರಡನೇ ಅತಿ ದೊಡ್ಡ ಮೆಟ್ರೋ ಜಾಲವಾಗಲಿದೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ನಗರದ ಪ್ರಮುಖ ರಸ್ತೆಗಳನ್ನು ಅಭಿವೃದ್ಧಿಪಡಿಸಲು 5 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಎರಡು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಪೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಯನ್ನು ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಎಂಬ ಹೊಸ ರೂಪದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, 117 ಕಿ.ಮೀ. ಉದ್ದದ ರಿಂಗ್‌ ರಸ್ತೆಯನ್ನು 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಯೋಜನೆಗೆ ಚಾಲನೆ ನೀಡಲಾಗಿದೆ.

ಇದರ ಮೊದಲ ಹಂತದಲ್ಲಿ 68 ಕಿ.ಮೀ. ಉದ್ದದ 12 ಪಥದ ರಿಂಗ್‌ ರಸ್ತೆ ನಿರ್ಮಿಸಲಾಗುವುದು. ಎಲೆಕ್ಟ್ರಾನಿಕ್‌ ಸಿಟಿಯಿಂದ ಮೈಸೂರು ರಸ್ತೆ ಮಾರ್ಗವಾಗಿ ನೆಲಮಂಗಲದ ಬಳಿ ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುವ 44 ಕಿ.ಮೀ. ಉದ್ದದ ಎರಡನೇ ಹಂತದ ರಸ್ತೆ ನಿರ್ಮಾಣಕ್ಕೂ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೇಳಿದರು.

ಈ ಯೋಜನೆಗಳಿಗಾಗಿ ಭೂಮಿ ನೀಡುತ್ತಿರುವ ರೈತರಿಗೆ ದೇಶಕ್ಕೇ ಮಾದರಿಯಾಗುವ ರೀತಿಯಲ್ಲಿ ಪರಿಹಾರ ಪ್ಯಾಕೇಜ್‌ ನೀಡಲಾಗುತ್ತಿದೆ. ಭೂ ಮಾಲೀಕರಿಗೆ ನಗದು ಪರಿಹಾರ, ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು, ಅಭಿವೃದ್ಧಿಪಡಿಸಿದ ನಿವೇಶನ, ವಾಣಿಜ್ಯ ನಿವೇಶನ ಹಾಗೂ ಎಫ್‌ಎಆರ್‌ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರು ಜನರಿಗೆ ಉತ್ತಮ ಆಡಳಿತ ಮತ್ತು ಸುರಕ್ಷತೆ ಒದಗಿಸುವ ಉದ್ದೇಶದಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಮಹಾನಗರ ಪಾಲಿಕೆಗಳನ್ನು ರಚಿಸಲಾಗಿದೆ. ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಈ ಮಹತ್ವದ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಜೊತೆಗೆ ಭದ್ರತೆಗಾಗಿ ಐದು ಪೊಲೀಸ್‌ ಆಯುಕ್ತಾಲಯಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲು ಲಾಲ್‌ಬಾಗ್‌ ಮಾದರಿಯಲ್ಲಿ ಐದು ಬೃಹತ್‌ ಉದ್ಯಾನವನಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ತುರಹಳ್ಳಿ ಕಿರು ಅರಣ್ಯ ಪ್ರದೇಶ, ತೊಟ್ಟಿಕಲ್ಲು ಫಾಲ್ಸ್‌, ನೆಟ್ಟಿಗೆರೆ, ಬಿ.ಎಂ. ಕಾವಲ್‌ ಅರಣ್ಯ ಪ್ರದೇಶ, ಬಸವಂತರ ಹಾಗೂ ಮಂಡೂರು-ಜೋತಿಪುರ ಪ್ರದೇಶಗಳಲ್ಲಿ ಹಸಿರು ವಲಯಗಳನ್ನು ಅಭಿವೃದ್ಧಿಪಡಿಸಲಾಗುವುದು.

ಬೆಂಗಳೂರಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಹಾಗೂ ಕುಡಿಯುವ ನೀರಿನ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಹೆಸರಘಟ್ಟ ಕೆರೆ, ಬೆಟ್ಟದಕೋಟೆ ಕೆರೆ, ಹೊಸಕೋಟೆ ಕೆರೆ, ಎಲೆಮಲ್ಲಪ್ಪ ಶೆಟ್ಟಿ ಕೆರೆ, ಬನ್ನೇರುಘಟ್ಟ ಕೆರೆ, ಬಾಗಲೂರು ಕೆರೆ ಹಾಗೂ ಬೈರಮಂಗಲ ಕೆರೆಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಬೆಂಗಳೂರನ್ನು ಪಾದಚಾರಿ ಸ್ನೇಹಿ ಹಾಗೂ ಕಸಮುಕ್ತ ನಗರವನ್ನಾಗಿ ಮಾಡಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ನಗರದಲ್ಲಿ ಹೆಚ್ಚುತ್ತಿರುವ ವಾಹನ ವಿಮಾ ವೆಚ್ಚ ಹಾಗೂ ಅಪಘಾತದ ಸಂದರ್ಭದಲ್ಲಿ ವಿಮಾ ಹಣ ಪಡೆಯುವ ಪ್ರಕ್ರಿಯೆಯಿಂದ ಸಾಮಾನ್ಯ ಕುಟುಂಬಗಳಿಗೆ ಆಗುತ್ತಿರುವ ತೊಂದರೆ ನಿವಾರಿಸಲು ವಾಹನ ಮಾಲೀಕರಿಗೆ ಸರಳ ವಿಮಾ ಸೇವೆ ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮೋಟಾರು ವಾಹನ ವಿಮಾ ಸಂಸ್ಥೆಯನ್ನು ಸ್ಥಾಪಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

RELATED ARTICLES
spot_img

Latest News