ಬೆಂಗಳೂರು, ಮೇ 2- ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಂತರ ಇಂದು ಮೊದಲ ಬಾರಿಗೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ್ದು, ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವ ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿಯವರು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ನಿರ್ದೇಶಕರು ಹಾಗೂ ಆಯುಕ್ತರುಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಅಭಿವೃದ್ಧಿ ಹಾಗೂ ಜನಪರ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ಜೊತೆ ಮುಲಾಜಿಲ್ಲದೆ ಕಠಿಣಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ವಿದ್ಯಮಾನಗಳಲ್ಲಿ ರಾಜಕೀಯ ಗೊಂದಲಗಳು ಆಡಳಿತಯಂತ್ರ ಕುಸಿಯುವಂತೆ ಮಾಡಿವೆೆ. ನಾಯಕತ್ವ ಬದಲಾವಣೆಯ ಚರ್ಚೆಗಳು ಅಧಿಕಾರಿಗಳಲ್ಲಿ ಉಡಾಫೆಯ ಮನೋಭಾವ ಸೃಷ್ಟಿಸಿವೆ. ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರೆಯುವುದಿಲ್ಲ ಎಂಬ ಅಂದಾಜಿನ ಮೇಲೆ, ಅಧಿಕಾರಿಗಳು ಕೂಡ ಕಡೆಗಣನೀಯ ಧೋರಣೆ ಅನುಸರಿಸುತ್ತಿದ್ದಾರೆ ಎನ್ನಲಾಗಿತ್ತು.
ವಿರೋಧ ಪಕ್ಷಗಳ ನಾಯಕರೂ ಕೂಡ ರಾಜ್ಯದಲ್ಲಿ ಕುರ್ಚಿ ಕದನದಿಂದಾಗಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ ಎಂದು ಪದೇ ಪದೇ ಟೀಕಿಸುತ್ತಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ನಂತರ ಸುಧಾರಿಸಿಕೊಂಡಂತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ಮೂಲಕ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಘೋಷಿತ ಯೋಜನೆಗಳು ಹಾಗೂ ಕಾರ್ಯಕ್ರಮಗಳಿಗೆ ತ್ವರಿತ ಗತಿಯಲ್ಲಿ ಅಧಿಸೂಚನೆಗಳು ಮತ್ತು ಆದೇಶಗಳನ್ನು ಹೊರಡಿಸಬೇಕು. ಒಂದು ವೇಳೆ ವಿಳಂಬ ಧೋರಣೆ ಅನುಸರಿಸಿದರೆ, ಸಂಬಂಧಪಟ್ಟ ಹಿರಿಯ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಸಿದ್ದಾರೆ.
ಕಳೆದ ವರ್ಷದ ಬಜೆಟ್‌ನಲ್ಲಿ ಘೋಷಿತ ಕಾರ್ಯಕ್ರಮ ಹಾಗೂ ಯೋಜನೆಗಳ ಪೈಕಿ ಕೆಲವು ಈವರೆಗೂ ಅನುಷ್ಠಾನಗೊಂಡಿಲ್ಲ, ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.
ಕೆಲ ಅಧಿಕಾರಿಗಳು ಅನುದಾನದ ಕೊರತೆಯ ಬಗ್ಗೆ ಪ್ರಸ್ತಾಪಿಸಿದಾಗ ಸಿಡಿಮಿಡಿ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು, ಹಣಕಾಸು ನಿಗದಿ ಪಡಿಸಿದ ಬಳಿಕವೇ ಬಜೆಟ್‌ನಲ್ಲಿ ಯೋಜನೆಗಳನ್ನು ಪ್ರಕಟಿಸಲಾಗುತ್ತಿದೆ. ಹೊಸ ಯೋಜನೆಗಳು ಅಥವಾ ಅನಿರೀಕ್ಷಿತ ಸಂದರ್ಭಗಳಿಗೆ ಮಾತ್ರ ಹಣ ಕಾಸಿನ ಪ್ರಶ್ನೆ ಉದ್ಭವಿಸುತ್ತದೆ. ಹಿರಿಯ ಅಧಿಕಾರಿಗಳು ಕುಂಟು ನೆಪ ಹೇಳುತ್ತಾ ಕಾಲಹರಣ ಮಾಡುವುದನ್ನು ಬಿಟ್ಟು, ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ಕೆಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ಮತ್ತು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿವೆ ಎಂಬ ದೂರುಗಳಿವೆ. ಇನ್ನೂ ಕೆಲವು ಅಧಿಕಾರಿಗಳು ಕಚೇರಿಗೆ ಆಗಮಿಸದೇ ಬೇರೆ ಕಡೆ ಕುಳಿತು ಕಡತಗಳನ್ನು ಪರಿಶೀಲಿಸುತ್ತಿರುವುದು ತಮ ಗಮನಕ್ಕೆ ಬಂದಿದೆ. ಇಂತಹ ಧೋರಣೆಗಳನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
