Homeರಾಜ್ಯಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧ ದೂರು : ಸುಪ್ರೀಂನಲ್ಲಿ ಅರ್ಜಿ ವಜಾ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧ ದೂರು : ಸುಪ್ರೀಂನಲ್ಲಿ ಅರ್ಜಿ ವಜಾ

ಬೆಳ್ತಂಗಡಿ,ಸೆ.9- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್‌ ರಾವ್‌ ಯರ್ಡೂರು ಅವರು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯು ವಜಾಗೊಂಡಿದೆ.
ರಂಜನ್‌ ರಾವ್‌ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯಲ್ಲಿರುವ ಆರೋಪಗಳಿಗೆ ಸಮರ್ಪಕ ಆಧಾರವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.

ರಂಜನ್‌ರಾವ್‌ ಅವರು ಹಲವು ಆರೋಪಗಳನ್ನು ಮಾಡಿದ್ದು, ಈ ಸಂಬಂಧ ಬೆಳ್ತಂಗಡಿಯ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ನ್ಯಾಯಾಲಯವು ಈ ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ, ದೂರುದಾರರು ಪರಿಷ್ಕರಣೆ ಕೋರಿ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕರ್ನಾಟಕದ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿದ ಉಚ್ಚ ನ್ಯಾಯಾಲಯವು, ಗ್ರಾಮಾಭಿವೃದ್ಧಿ ಯೋಜನೆಯ ಪರವಾಗಿ ಮಂಡಿಸಲಾದ ವಾದಗಳನ್ನು ಪರಿಗಣಿಸಿತು.

ಗ್ರಾಮಾಭಿವೃದ್ಧಿ ಯೋಜನೆಯ ಪರವಾಗಿ ರಾಜ್ಯದ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ವಾದ ಮಂಡಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯಗಳನ್ನು ಒದಗಿಸುವ ಕಾರ್ಯವು ಆರ್ಥಿಕ ಸೇರ್ಪಡೆಯ ಉದ್ದೇಶದಿಂದ ಕೈಗೊಳ್ಳಲಾಗುತ್ತಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಅಲ್ಲದೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂಸ್ಥೆಯನ್ನು ಚಾರಿಟಬಲ್‌ ಟ್ರಸ್ಟ್‌ ಆಗಿ ರೂಪಿಸಿ, ಅದರ ಮೂಲಕ ಹಲವಾರು ಸಮಾಜಸೇವಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಎಂಬ ಅಂಶವನ್ನೂ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಗ್ರಾಮಾಭಿವೃದ್ಧಿ ಯೋಜನೆಯ ಸಮಾಜಮುಖಿ ಕಾರ್ಯಕ್ರಮಗಳ ಯಶಸ್ಸನ್ನು ಸಹಿಸದ ಹಿನ್ನೆಲೆಯಲ್ಲಿ ದೂರುದಾರರು ದುರುದ್ದೇಶಪೂರ್ವಕವಾಗಿ ಆರೋಪಗಳನ್ನು ಮಾಡಿದ್ದಾರೆ ಎಂದು ಯೋಜನೆಯ ಪರ ವಕೀಲರು ವಾದಿಸಿದರು.

ಈ ಎಲ್ಲಾ ಅಂಶಗಳನ್ನು ಪರಿಗಣಿಸಿದ ಉಚ್ಚ ನ್ಯಾಯಾಲಯವು, ಗ್ರಾಮಾಭಿವೃದ್ಧಿ ಯೋಜನೆಯ ಪರವಾಗಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿ, ಕೆಳ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

ಈ ತೀರ್ಪನ್ನು ಪ್ರಶ್ನಿಸಿ ದೂರುದಾರ ರಂಜನ್‌ ರಾವ್‌ ಯರ್ಡೂರು ಅವರು ಏ.23 ರಂದು ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ವಿಶೇಷ ಅನುಮತಿ ಅರ್ಜಿ ಸಲ್ಲಿಸಿದ್ದರು.
ನಿನ್ನೆ ನಡೆದ ವಿಚಾರಣೆಯ ಸಂದರ್ಭದಲ್ಲಿ ಅರ್ಜಿಯಲ್ಲಿರುವ ಆರೋಪಗಳಿಗೆ ಸಮರ್ಪಕ ಆಧಾರವಿಲ್ಲ ಎಂಬ ಅಭಿಪ್ರಾಯವನ್ನು ನ್ಯಾಯಾಲಯ ವ್ಯಕ್ತಪಡಿಸಿ, ಪ್ರಾಥಮಿಕ ಹಂತದಲ್ಲಿಯೇ ಅರ್ಜಿಯನ್ನು ವಜಾಗೊಳಿಸಿದೆ ಎಂದು ತಿಳಿದುಬಂದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪರವಾಗಿ ಈ ಹಂತದಲ್ಲಿಯೂ ಹಿರಿಯ ನ್ಯಾಯವಾದಿ ಪಿ.ಪಿ.ಹೆಗ್ಡೆ ಅವರು ವಾದ ಮಂಡಿಸಿದರು. ಗ್ರಾಮೀಣ ಜನರ ಆರ್ಥಿಕ ಸಬಲೀಕರಣ ಮತ್ತು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯು ಸರ್ವೋಚ್ಛ ನ್ಯಾಯಾಲಯದ ಪ್ರಾಥಮಿಕ ಹಂತದಲ್ಲಿಯೇ ವಜಾಗೊಂಡಿರುವುದು ಸಂಸ್ಥೆಯ ಪರವಾಗಿ ಮಹತ್ವದ ಬೆಳವಣಿಗೆಯಾಗಿದೆ.

RELATED ARTICLES
spot_img

Latest News