ಬೆಂಗಳೂರು, ಜೂ.3- ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ.
ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಿರುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಹತ್ವದ ಕ್ಷಣವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ ಜನತೆಗೆ ಈ ಮಹತ್ವದ ಕಾರ್ಯಕ್ರಮವನ್ನು ತಲುಪಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯ ಸಹಯೋಗದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.
ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಸಾಮಾನ್ಯಜನರು ಈ ಐತಿಹಾಸಿಕ ಸಮಾರಂಭದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿದೆ.
