ಬೆಂಗಳೂರು,ಆ.18- ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಜ್ಯದ ವಿವಿಧೆಡೆ ತೀವ್ರ ಶೋಧ ಹಾಗೂ ತನಿಖೆ ಮುಂದುವರಿಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಕಾರವಾರ, ಕಲಬುರಗಿ ಹಾಗೂ ಬೆಳಗಾವಿ ಸೇರಿದಂತೆ ಸುಮಾರು 21 ಕಡೆಗಳಲ್ಲಿ ಇ.ಡಿ. ಅಧಿಕಾರಿಗಳು ಶೋಧ ಮತ್ತು ತನಿಖೆ ಮುಂದುವರೆಸಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲೂ ಕೆಲವು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್, ಸದಸ್ಯೆ ಶಾಂತಾ ಹೊಸಮನಿ ಹಾಗೂ ಇತರ ಪ್ರಮುಖ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳಲ್ಲಿ ಈ ಶೋಧ ಕಾರ್ಯ ಮುಂದುವರೆದಿದೆ.
ಬೆಂಗಳೂರಿನ ಪ್ರತಿಷ್ಠಿತ ಡಾಲರ್ಸ್ ಕಾಲೋನಿಯಲ್ಲಿರುವ ಹೊಯ್ಸಳ ಡ್ರಿಂಕ್ಸ್ ಅಪಾರ್ಟ್‌ಮೆಂಟ್‌ನಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ಇ.ಡಿ.ಯ 8 ಅಧಿಕಾರಿಗಳ ತಂಡವು ಏಕಕಾಲಕ್ಕೆ ದಾಳಿ ನಡೆಸಿದೆ. ಬೆಳಿಗ್ಗೆಯಿಂದಲೇ ಮನೆಯೊಳಗೆ ಪ್ರವೇಶಿಸಿರುವ ಅಧಿಕಾರಿಗಳು, ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಪ್ರಮುಖ ಕಡತಗಳನ್ನು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೆಪಿಎಸ್‌ಸಿ ಮಧ್ಯವರ್ತಿಗಳ ಮನೆಗಳ ಮೇಲೂ ದಾಳಿ ನಡೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 21 ಕಡೆಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯ ಮುಂದುವರಿದಿದೆ.ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಹಾಗೂ ನೇಮಕಾತಿ ಪ್ರಕ್ರಿಯೆಗಳಲ್ಲಿ ವ್ಯವಸ್ಥಿತ ಅಕ್ರಮ ಎಸಗಿರುವ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಶಿವಶಂಕರಪ್ಪ ಸಾಹುಕಾರ್ ವಿರುದ್ಧದ ತನಿಖೆ ಈಗ ಮತ್ತಷ್ಟು ತೀವ್ರಗೊಂಡಿದೆ.
ಪಶುವೈದ್ಯಾಧಿಕಾರಿ ನೇಮಕಾತಿ ವಿವಾದ :
ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ 400 ಪಶುವೈದ್ಯಾಧಿಕಾರಿ ಹ್ದುೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ಹಾಗೂ ಹಣಕಾಸು ವಹಿವಾಟು ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿದ್ದವು.
ಈ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ ವರ್ಗಾಯಿಸಲಾಗಿತ್ತು. ಓಎಂಆರ್ ಶೀಟ್ ತಿರುಚುವಿಕೆ ಮತ್ತು ಮಧ್ಯವರ್ತಿಗಳ ನಂಟಿನ ಕುರಿತು ತನಿಖೆ ನಡೆಯುತ್ತಿದೆ. ನೇಮಕಾತಿ ವಿವಾದ ಹಾಗೂ ಇತರ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಜು.13ರಂದು ರಾಜ್ಯಪಾಲರು ಶಿವಶಂಕರಪ್ಪ ಎಸ್.ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿದ್ದರು.
ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ತಮ ಕುಟುಂಬದ ಸದಸ್ಯರಿಗೆ ಸರ್ಕಾರಿ ಹ್ದುೆಗಳನ್ನು ಕೊಡಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ 400 ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಗೋಲ್‌ಮಾಲ್ ನಡೆದಿದೆ ಎಂಬ ಸ್ಫೋಟಕ ಅಂಶಗಳು ಹೊರಬಿದ್ದವು.
ಆಯ್ಕೆ ಪ್ರಕ್ರಿಯೆಯಲ್ಲಿ ಓಎಂಆರ್ ಶೀಟ್‌ಗಳ ತಿದ್ದುಪಡಿ, ಮಧ್ಯವರ್ತಿಗಳ ಹಸ್ತಕ್ಷೇಪ ಮತ್ತು ಆಯ್ದ ಅಭ್ಯರ್ಥಿಗಳಿಗೆ ಅಕ್ರಮವಾಗಿ ಅನುಕೂಲ ಮಾಡಿಕೊಟ್ಟಿರುವ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಸಿಐಡಿ ತನಿಖೆ :
ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ತಂಡವು, ಅಕ್ರಮದಲ್ಲಿ ಶಾಮೀಲಾಗಿದ್ದಾರೆನ್ನಲಾದ 29 ಅಭ್ಯರ್ಥಿಗಳು ಹಾಗೂ ಸಂಬಂಧಪಟ್ಟ ಮಾಜಿ ಅಧ್ಯಕ್ಷರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.
ಸಾಹುಕಾರ್ ಅವರು ಅಧ್ಯಕ್ಷರಾದಾಗಿನಿಂದ ನಡೆದ ವಿವಿಧ ನೇಮಕಾತಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಮತ್ತು ಹಣಕಾಸು ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದವು.
ಅಕ್ರಮದ ಹಿನ್ನೆಲೆ ಏನು? :
ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಆಯ್ಕೆ ಮಾಡಲು ಮಧ್ಯವರ್ತಿಗಳು ಪ್ರತಿ ಅಭ್ಯರ್ಥಿಗೆ 85 ಲಕ್ಷ ರೂಪಾಯಿಗಳವರೆಗೆ ಲಂಚದ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪವಿತ್ತು.
ನೇಮಕಾತಿಯಲ್ಲಿ ಮೋಸಹೋದ ಮತ್ತು ಅನ್ಯಾಯಕ್ಕೊಳಗಾದ ನೊಂದ ಅಭ್ಯರ್ಥಿಗಳು ಒಗ್ಗೂಡಿ ವಿಧಾನಸೌಧ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ದಾಖಲಿಸಿದ್ದರು.
ಶಿವಶಂಕರಪ್ಪ ಸಾಹುಕಾರ್ ಅವರು ತಮ ಪುತ್ರಿಗೆ ಸಿಗಬಾರದ ಮೀಸಲಾತಿಯನ್ನು ಅಕ್ರಮವಾಗಿ ಒದಗಿಸಿಕೊಂಡಿದ್ದಾರೆ ಎಂಬ ಆರೋಪವೂ ಅವರ ಅಮಾನತಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿತ್ತು.
ಸಿಐಡಿ ತನಿಖೆಯ ಬೆನ್ನಲ್ಲೇ ಇ.ಡಿ. ಎಂಟ್ರಿ :
ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯ ಬೆನ್ನಲ್ಲೇ ಇದೀಗ ಕೇಂದ್ರ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯ ಕೂಡ ಅಖಾಡಕ್ಕಿಳಿದಿದ್ದು, ಅಕ್ರಮ ಹಣ ವರ್ಗಾವಣೆ ಮತ್ತು ಹವಾಲಾ ಜಾಲದ ಬಗ್ಗೆಯೂ ತನಿಖೆ ತೀವ್ರಗೊಳಿಸಿದೆ. ಒಟ್ಟಿನಲ್ಲಿ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವು ರಾಜ್ಯ ರಾಜಕೀಯ ಹಾಗೂ ಶೈಕ್ಷಣಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
