ಬೆಂಗಳೂರು, ಜೂ.23- ಅಂತೂ ಇಂತೂ ಸುಪ್ರೀಂ ಕೋರ್ಟ್ ಆದೇಶದಂತೆ ಆ.31 ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಯುವುದು ಖಚಿತಪಟ್ಟಿದೆ.
ಆ.31ರೊಳಗೆ ಚುನಾವಣೆ ನಡೆಸುವ ಸಂಬಂಧ ಈಗಾಗಲೇ ಮೂರು ಸಭೆಗಳನ್ನು ನಡೆಸಿರುವ ರಾಜ್ಯ ಚುನಾವಣಾ ಆಯೋಗ ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಿ, ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸಲು ಸಿದ್ಧತೆ ಮಾಡಿಕೊಂಡಿದೆ.
ಜುಲೈ 10ರೊಳಗೆ ಚುನಾವಣಾ ದಿನಾಂಕ ಪ್ರಕಟಗೊಳ್ಳುವ ಸಾಧ್ಯತೆ ಇದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ಜಿಬಿಎ ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸಲು ನೀಡಿದ್ದ ಜೂನ್ 30ರ ಗಡುವನ್ನು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಮಾತ್ರವಲ್ಲ ಮತ್ತೊಮೆ ಚುನಾವಣೆ ಮುಂದೂಡುವ ವಿಚಾರವನ್ನು ನಮ ಬಳಿಗೆ ತರಬಾರದು ಎಂದು ಬಿಸಿ ಮುಟ್ಟಿಸಿತ್ತು.
ರಾಜ್ಯ ಸರ್ಕಾರ ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಮನವಿ ಸಲ್ಲಿಸಿದ್ದರೂ, ನ್ಯಾಯಾಲಯ ಅದನ್ನು ತಿರಸ್ಕರಿಸಿದೆ.
ಚುನಾವಣಾ ಆಯೋಗದ ಸದ್ದಿಲ್ಲದ ಸಿದ್ಧತೆ:ಸುಪ್ರೀಂ ಕೋರ್ಟ್ ಆದೇಶದ ನಂತರ ರಾಜ್ಯ ಚುನಾವಣಾ ಆಯೋಗ ಸದ್ದಿಲ್ಲದೆ ಚುನಾವಣಾ ಸಿದ್ಧತೆ ಆರಂಭಿಸಿದೆ. ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ವ್ಯವಸ್ಥೆ, ಸಿಬ್ಬಂದಿ ನಿಯೋಜನೆ ಸೇರಿದಂತೆ ವಿವಿಧ ಹಂತದ ಸಿದ್ಧತೆಗಳು ನಡೆಯುತ್ತಿವೆ. ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ನಲ್ಲೂ ಚುನಾವಣಾ ಚಟುವಟಿಕೆ; ಇತ್ತ ಆಡಳಿತಾರೂಢ ಕಾಂಗ್ರೆಸ್ ಕೂಡ ಚುನಾವಣೆಗೆ ಸಜ್ಜಾಗಿದ್ದು, ಐದು ನಗರಪಾಲಿಕೆಗಳ ವ್ಯಾಪ್ತಿಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಈಗಾಗಲೇ ಸಿದ್ಧತೆ ಆರಂಭಿಸುವಂತೆ ಸೂಚನೆ ನೀಡಿದೆ.
ಮನೆ ಮನೆಗೆ ಭೇಟಿ ನೀಡಿ ರಾಜ್ಯ ಸರ್ಕಾರದ ಸಾಧನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಮತದಾರರಿಗೆ ಮನವರಿಕೆ ಮಾಡಬೇಕು. ವಾರ್ಡ್‌ವಾರು ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಬೇಕು. ಅಲ್ಲದೆ, ವಾರ್ಡ್ ಮಟ್ಟದಲ್ಲಿ ಜನಸಂಪರ್ಕ ಕಾರ್ಯಕ್ರಮಗಳನ್ನು ತ್ವರಿತವಾಗಿ ಆಯೋಜಿಸುವಂತೆ ಪಕ್ಷದ ನಾಯಕರು ಸೂಚಿಸಿದ್ದಾರೆ ಎಂಬ ಮಾಹಿತಿ ಪಕ್ಷದ ಹಿರಿಯ ಮುಖಂಡರಿಂದ ಲಭ್ಯವಾಗಿದೆ.
ಬಿಜೆಪಿ ಕೂಡ ಸಿದ್ದ; ಕಳೆದ ಆರು ವರ್ಷಗಳಿಂದ ಜಿಬಿಎಗೆ ಚುನಾವಣೆ ನಡೆಯದಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಆದಷ್ಟು ಬೇಗ ಪಂಚ ಪಾಲಿಕೆಗಳಿಗೆ ಚುನಾವಣೆ ನಡೆದರೆ ಹಲವಾರು ಅಭಿವೃದ್ಧಿ ಕಾರ್ಯ ಮಾಡಲು ಸಹಕಾರಿಯಾಗುತ್ತದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಬಿಜೆಪಿ ಕೂಡ ಚುನಾವಣೆಗೆ ಸಿದ್ಧತೆ ನಡೆಸಿದೆ ಎಂದು ನಿನ್ನೆ ಪರೋಕ್ಷವಾಗಿ ಹೇಳಿದ್ದರು. ಇದರ ಜೊತೆಗೆ ಪಕ್ಷದ ಇತರ ನಾಯಕರುಗಳು ಜಿಬಿಎ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.
ಜೆಡಿಎಸ್ ಹುಮಸ್ಸು; ಇದುವರೆಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂತಹ ಸಾಧನೆ ಮಾಡದ ಜೆಡಿಎಸ್‌ನವರು ಈ ಬಾರಿ ಬಿಜೆಪಿ ಮೈತ್ರಿಯೊಂದಿಗೆ ಪಂಚ ಪಾಲಿಕೆ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಈ ಬಾರಿ ನಮ ಪಾಲಿಗೆ ಸಿಗುವ ಕ್ಷೇತ್ರಗಳನ್ನು ನಿರಾಯಾಸವಾಗಿ ಗೆಲ್ಲುತ್ತೇವೆ ಎಂಬ ಹುಮಸ್ಸಿನಲ್ಲಿದ್ದಾರೆ ಆ ಪಕ್ಷದವರು.
