Sunday, April 12, 2026
Homeರಾಜ್ಯಮಾ.11 ರಂದು ವಿದ್ಯುತ್‌ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ

ಮಾ.11 ರಂದು ವಿದ್ಯುತ್‌ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ

Electrical Contractors Association to protest on March 11

ಬೆಂಗಳೂರು,ಮಾ.9- ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘವು ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್‌ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ನ ಆದೇಶದ ಅನ್ವಯ 2025 ಏಪ್ರಿಲ್‌ನಲ್ಲಿ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದಿರುವ ಹಾಗೂ ವಿವಿಧ ಹಂತಗಳಲ್ಲಿ ನಿರ್ಮಾಣ ಹಂತದಲ್ಲಿರುವ, ಪೂರ್ಣಗೊಂಡಿರುವ ಕಟ್ಟಡಗಳಿಗೆ ಪೂರ್ಣ ಪ್ರಮಾಣ ಪತ್ರ (ಓ.ಸಿ) ಅಥವಾ ವಾಸಯೋಗ್ಯ ಪ್ರಮಾಣ ಪತ್ರ ನೀಡುವ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯಾದ್ಯಂತ ಲಕ್ಷಾಂತರ ಗ್ರಾಹಕರು ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದು, ಭೂ ಪರಿವರ್ತಿತ ಹಾಗೂ ಭೂ ಪರಿವರ್ತನೆಯಾಗದ ಪ್ರದೇಶಗಳು ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಸ್ಥಳಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಬ್ಯಾಂಕ್‌ಗಳಿಂದ ಸಾಲ ಪಡೆದು ವಿವಿಧ ಹಂತಗಳಲ್ಲಿ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದಲ್ಲಿ ರಾಜ್ಯದ ಲಕ್ಷಾಂತರ ನಾಗರಿಕರಿಗೆ ಆರ್ಥಿಕ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆ ಎದುರಾಗುತ್ತದೆ ಎಂದರು.

ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದಿರುವ, ಅರ್ಜಿ ಸಲ್ಲಿಸಿರುವ, ಮಂಜೂರಾತಿ ಪಡೆದಿರುವ ಕಾರ್ಯಾದೇಶಗೊಂಡಿರುವ ಕಟ್ಟಡಗಳಿಗೆ ಸೂಕ್ತ ವಿನಾಯಿತಿ ನೀಡುವ ಮೂಲಕ ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡಗಳ ಗ್ರಾಹಕರಿಗೆ ಅನುಕೂಲವಾಗುವಂತೆ ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಯಾವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರ ಕಡ್ಡಾಯ ಎಂಬುದನ್ನು ಸ್ಪಷ್ಟಪಡಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಕಟ್ಟಡದ ನಕ್ಷೆಗೆ ಅನುಮೋದನೆ ಪಡೆಯದೇ ನಿರ್ಮಾಣಗೊಂಡ ಕಟ್ಟಡಗಳಿಗೆ ಸಂಬಂಧಿಸಿದ ಲಕ್ಷಾಂತರ ಅರ್ಜಿಗಳು ಬಾಕಿ ಇರುವುದರಿಂದ ಅವುಗಳನ್ನು ಕ್ರಮವಾಗಿ ಪರಿಹರಿಸಲು ವಿಶೇಷ ಕಾನೂನು ರೂಪಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಚ್‌.ವಿ.ಚಂದ್ರಬಾಬು ಒತ್ತಾಯಿಸಿದರು.

ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿರುವ ಸದಸ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್‌ ತಿಳಿಸಿದರು.

RELATED ARTICLES

Latest News