ಬೆಂಗಳೂರು, ಜು. 30: ಪಶ್ಚಿಮ ಘಟ್ಟ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ವಲಯ (ESA) ಎಂದು ಘೋಷಿಸಲು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹೊರಡಿಸಿರುವ ಹೊಸ ಕರಡು ಅಧಿಸೂಚನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಲೆನಾಡು ಕರಾವಳಿ ಜನಪರ ಒಕ್ಕೂಟ, ಮಲೆನಾಡು ಭಾಗದ ರೈತರು ಹಾಗೂ ಜನರ ಅಭಿಪ್ರಾಯವನ್ನು ಪರಿಗಣಿಸದಿದ್ದರೆ ಆರು ಜಿಲ್ಲೆಗಳ ಸಂಸದರ ಕಚೇರಿ ಎದುರು ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್ ಹೊಸಕೊಪ್ಪ ಮಾತನಾಡಿ, ಈಗಿರುವ ಅರಣ್ಯ ಸಂಬಂಧಿತ ಕಾನೂನುಗಳೇ ರೈತರ ಬದುಕಿಗೆ ಸಂಕಷ್ಟ ತಂದಿದ್ದು, ಹೊಸ ಕರಡು ಅಧಿಸೂಚನೆಯಿಂದ ಮತ್ತಷ್ಟು ಆತಂಕ ಸೃಷ್ಟಿಯಾಗಿದೆ ಎಂದು ಹೇಳಿದರು. ಮಲೆನಾಡಿನ ಜನಪ್ರತಿನಿಧಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಕರಡು ಅಧಿಸೂಚನೆಯ ಪ್ರಕಾರ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪಶ್ಚಿಮ ಘಟ್ಟ ವ್ಯಾಪ್ತಿಯ ಹಲವು ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿಸಲು ಪ್ರಸ್ತಾಪಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 556, ಶಿವಮೊಗ್ಗ 446, ಚಿಕ್ಕಮಗಳೂರು 137, ಕೊಡಗು 53, ದಕ್ಷಿಣ ಕನ್ನಡ 43 ಹಾಗೂ ಉಡುಪಿ ಜಿಲ್ಲೆಯ 34 ಗ್ರಾಮಗಳು ಪಟ್ಟಿಯಲ್ಲಿ ಸೇರಿವೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲ್ಲೂಕುಗಳು, ಚಿಕ್ಕಮಗಳೂರಿನ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ ಸೇರಿದಂತೆ ಹಲವು ಪ್ರದೇಶಗಳು ಕರಡು ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
ಈ ಅಧಿಸೂಚನೆ ಇನ್ನೂ ಕರಡು ಹಂತದಲ್ಲಿದ್ದು, ಸಾರ್ವಜನಿಕರು, ರೈತರು, ಗ್ರಾಮ ಪಂಚಾಯಿತಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ತಮ್ಮ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ಕೇಂದ್ರ ಸರ್ಕಾರ 60 ದಿನಗಳ ಕಾಲಾವಕಾಶ ನೀಡಿದೆ. ಈ ಅವಧಿಯಲ್ಲಿ ಸಲ್ಲಿಕೆಯಾಗುವ ಅಭಿಪ್ರಾಯಗಳನ್ನು ಪರಿಶೀಲಿಸಿದ ಬಳಿಕವೇ ಅಂತಿಮ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ಕಸ್ತೂರಿ ರಂಗನ್ ವರದಿ ಆಧಾರದ ಮೇಲೆ ರಾಜ್ಯದ ಪಶ್ಚಿಮಘಟ್ಟ ವ್ಯಾಪ್ತಿಯ ಸುಮಾರು 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಗುರುತಿಸಿರುವುದಕ್ಕೆ ರಾಜ್ಯ ಸರ್ಕಾರ, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳು ಈ ಹಿಂದೆ ಸಲ್ಲಿಸಿದ ಮನವಿಗಳನ್ನೂ ಪರಿಗಣಿಸಿಲ್ಲ ಎಂದು ಒಕ್ಕೂಟ ಆರೋಪಿಸಿದೆ.
ಆಕ್ಷೇಪಣೆ ಸಲ್ಲಿಸಲು ಇಚ್ಛಿಸುವವರು ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 60 ದಿನಗಳೊಳಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ಅಥವಾ esz-mef@nic.in ಇ-ಮೇಲ್ ಮೂಲಕ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದು ಎಂದು ಅನಿಲ್ ಹೊಸಕೊಪ್ಪ ಮನವಿ ಮಾಡಿದ್ದಾರೆ.
