ಬೆಂಗಳೂರು, ಅ.23-ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಟೋಲ್ ಬಳಿ ರಸ್ತೆಗಿಳಿದು ರೈತರು ಪ್ರತಿಭಟನೆ ನಡೆಸಿದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿ ಟನ್ ಕಬ್ಬಿಗೆ ಕನಿಷ್ಠ 5500 ರೂ. ನಿಗದಿಪಡಿಸಬೇಕು.
ಸಕ್ಕರೆ ಕಾರ್ಖಾನೆಗಳು ಉಳಿಸಿಕೊಂಡಿರುವ ರೈತರ ಬಾಕಿ ಹಣವನ್ನು ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಕೇಂದ್ರಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ ಪರದಾಡುವಂತಾಯಿತು. ಕೆಲ ಕಾಲ ರಸ್ತೆಯಲ್ಲೇ ವಾಹನಗಳು ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಗಣಂಗೂರು ಟೋಲ್ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಐಜಿಪಿ ಬೋರಲಿಂಗಯ್ಯ ಅವರು, ಪ್ರತಿಭಟನಾ ನಿರತ ರೈತರೊಂದಿಗೆ ಮಾತಕತೆ ನಡೆಸಿ ಹೆದ್ದಾರಿ ತಡೆಯದಂತೆ ಮನವೊಲಿಸುವ ಪ್ರಯತ್ನ ನಡೆಸಿದರು.
