Homeರಾಜ್ಯಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿಧಿವಶ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿಧಿವಶ

Former Education Minister B.C. Nagesh Passes Away

ತುಮಕೂರು, ಆ.19- ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್‌ (67) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಕಳೆದ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದಿಂದ ತಿಪಟೂರು ಸೇರಿದಂತೆ ತುಮಕೂರು ಜಿಲ್ಲೆಯ ಬಿಜೆಪಿ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ತಿಪಟೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಬಿ.ಸಿ. ನಾಗೇಶ್‌ ಅವರು 2008ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2013ರ ಚುನಾವಣೆಯಲ್ಲಿ ಸೋಲು ಕಂಡಿದ್ದ ಅವರು, 2018ರಲ್ಲಿ ಮತ್ತೆ ತಿಪಟೂರು ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. 2021ರಿಂದ 2023ರವರೆಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಸರಳ ಜೀವನಶೈಲಿಗೆ ಹೆಸರಾಗಿದ್ದ ನಾಗೇಶ್‌ ಅವರು ವಿದ್ಯಾರ್ಥಿ ದೆಸೆಯಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಬಳಿಕ ಬಿಜೆಪಿಯಲ್ಲಿ ಸಂಘಟನಾ ಜವಾಬ್ದಾರಿಗಳನ್ನು ನಿರ್ವಹಿಸಿ, ತುಮಕೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

ಬಿ.ಇ. ಪದವೀಧರರಾಗಿದ್ದ ಅವರು ರಾಜಕೀಯ ಪ್ರವೇಶಕ್ಕೂ ಮುನ್ನ ಕೃಷಿ ಮತ್ತು ಉದ್ಯಮ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದರು.ನಾಗೇಶ್‌ ಅವರ ನಿಧನಕ್ಕೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ತಿಪಟೂರು ಕ್ಷೇತ್ರದ ಅಭಿಮಾನಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಸಂಜೆ ತಿಪಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಗಣ್ಯರ ಸಂತಾಪ :

ಬೆಂಗಳೂರು, ಆ.19- ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಎಂಎಲ್‌ಸಿ ಸಿ.ಟಿ. ರವಿ, ಸಂಸದೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವರಾದ ಎಚ್‌.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ ಸೇರಿದಂತೆ ಮತ್ತಿತರ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಜಯನಗರದಲ್ಲಿರುವ ನಾಗೇಶ್‌ ಅವರ ಪುತ್ರಿಯ ನಿವಾಸಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಭೇಟಿ ನೀಡಿ ಅಂತಿಮ ದರ್ಶನ ಪಡೆದು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ನಾಗೇಶ್‌ ಅವರು ಸರಳ ಹಾಗೂ ಪ್ರಾಮಾಣಿಕ ವ್ಯಕ್ತಿಯಾಗಿದ್ದರು. ಅವರು ನನಗೆ ತುಂಬಾ ಆತ್ಮೀಯರಾಗಿದ್ದರು. ಅವರ ಅಗಲಿಕೆ ನೋವುಂಟು ಮಾಡಿದ್ದು, ಅವರಿಗೆ ಸರ್ಕಾರಿ ಗೌರವ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಮಾತನಾಡಿ, ನನ್ನ ಜಿಲ್ಲೆಯವರೇ ಆದ ಬಿ.ಸಿ. ನಾಗೇಶ್‌ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಸರಳ ನಡೆ-ನುಡಿಯ ಮೂಲಕ ಸಮಾಜದಲ್ಲಿ ಅಭಿಮಾನಿ ವರ್ಗವನ್ನೇ ಅವರು ಸಂಪಾದಿಸಿದ್ದರು. ವಿರೋಧ ಪಕ್ಷದವರೊಂದಿಗೂ ಉತ್ತಮ ಒಡನಾಟ ಹೊಂದಿದ್ದರು. ನಾಗೇಶ್‌ ಅವರ ಅಗಲಿಕೆ ರಾಜ್ಯದ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಿಜೆಪಿ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ನಾಗೇಶ್‌ ಅವರು ಅಜಾತಶತ್ರುವಾಗಿದ್ದರು. ಎಲ್ಲರನ್ನೂ ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಅವರ ಅಗಲಿಕೆ ಬಿಜೆಪಿಗೆ ತುಂಬಲಾರದ ನಷ್ಟ ಉಂಟುಮಾಡಿದ್ದು, ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ನಾಗೇಶ್‌ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ತಿಪಟೂರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಶಿಕ್ಷಣ ಸಚಿವರಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ತರಲು ಶ್ರಮಿಸಿದ್ದರು. ಒಬ್ಬ ಗೆಳೆಯನನ್ನು ಕಳೆದುಕೊಂಡಿದ್ದೇವೆ. ಬಿಜೆಪಿಗೆ ಇದು ನೋವಿನ ಸಂಗತಿ ಎಂದು ಸಂತಾಪ ಸೂಚಿಸಿದರು.

RELATED ARTICLES
spot_img

Latest News